ಲಂಚ ಪ್ರಕರಣ: ಮಾಜಿ ತಹಸೀಲ್ದಾರ್ ಶಶಿಕಲಾ ಪಾದಗಟ್ಟಿಗೆ 4 ವರ್ಷ ಜೈಲು ಶಿಕ್ಷೆ
ಲೋಕಾಯುಕ್ತ ಪ್ರಕರಣದಲ್ಲಿ ದೋಷಿ ಎಂದು ನ್ಯಾಯಾಲಯ ತೀರ್ಪು; ₹50 ಸಾವಿರ ದಂಡ, ಸಹಆರೋಪಿಗೂ ಶಿಕ್ಷೆ
ಲಂಚ ಸ್ವೀಕರಿಸಿದ ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ಅಫಜಲಪುರದ ಮಾಜಿ ತಹಸೀಲ್ದಾರ್ ಶಶಿಕಲಾ ಪಾದಗಟ್ಟಿ ಅವರಿಗೆ ಪ್ರಧಾನ ಜಿಲ್ಲಾ ಮತ್ತು ವಿಶೇಷ ನ್ಯಾಯಾಲಯ ನಾಲ್ಕು ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆ ಹಾಗೂ ₹50 ಸಾವಿರ ದಂಡ ವಿಧಿಸಿದೆ.
ಪ್ರಧಾನ ಜಿಲ್ಲಾ ಮತ್ತು ವಿಶೇಷ ನ್ಯಾಯಾಲಯದ ನ್ಯಾಯಾಧೀಶ ಜಿ.ಎಲ್. ಲಕ್ಷ್ಮೀನಾರಾಯಣ ಅವರು ಪ್ರಕರಣದ ಸಾಕ್ಷ್ಯಾಧಾರಗಳು ಹಾಗೂ ಎರಡೂ ಪಕ್ಷಗಳ ವಾದಗಳನ್ನು ಪರಿಗಣಿಸಿ ಈ ತೀರ್ಪು ನೀಡಿದ್ದಾರೆ. ಇದೇ ಪ್ರಕರಣದಲ್ಲಿ ಎರಡನೇ ಆರೋಪಿ ಶಿವಾನಂದ್ ಅವರಿಗೂ ಭ್ರಷ್ಟಾಚಾರ ತಡೆ ಕಾಯ್ದೆಯ ಸಂಬಂಧಿತ ಕಲಂಗಳಡಿ ನಾಲ್ಕು ವರ್ಷಗಳ ಜೈಲು ಶಿಕ್ಷೆ ಹಾಗೂ ₹20 ಸಾವಿರ ದಂಡ ವಿಧಿಸಲಾಗಿದೆ.
ಪ್ರಕರಣದ ವಿವರ
2017ರಲ್ಲಿ ಅಫಜಲಪುರ ತಾಲ್ಲೂಕಿನ ಕರಜಗಿ ನಾಡ ಕಚೇರಿಯಲ್ಲಿ ಗುತ್ತಿಗೆ ಆಧಾರದಲ್ಲಿ ಡಾಟಾ ಎಂಟ್ರಿ ಆಪರೇಟರ್ ಆಗಿ ಕಾರ್ಯನಿರ್ವಹಿಸುತ್ತಿದ್ದ ಶಿವಲಿಂಗಯ್ಯ ಬಸಯ್ಯ ಮಠ ಅವರ ವಿರುದ್ಧ ಬಂದಿದ್ದ ದೂರಿಗೆ ಸಂಬಂಧಿಸಿದಂತೆ ಅನುಕೂಲಕರ ವರದಿ ನೀಡಲು ಆಗಿನ ತಹಸೀಲ್ದಾರ್ ಶಶಿಕಲಾ ಪಾದಗಟ್ಟಿ ಅವರು ₹1 ಲಕ್ಷ ಲಂಚಕ್ಕೆ ಬೇಡಿಕೆ ಇಟ್ಟಿದ್ದಾರೆ ಎಂದು ಆರೋಪಿಸಲಾಗಿತ್ತು.
ಈ ಸಂಬಂಧ ಆಗಸ್ಟ್ 31, 2017ರಂದು ಲೋಕಾಯುಕ್ತ ಪೊಲೀಸರಿಗೆ ದೂರು ಸಲ್ಲಿಕೆಯಾಗಿತ್ತು. ತನಿಖೆಯ ವೇಳೆ ತಹಸೀಲ್ದಾರ್ ಅವರ ಸೂಚನೆಯಂತೆ ಎರಡನೇ ಆರೋಪಿ ಶಿವಾನಂದ್ ಅವರು ಲಂಚದ ಹಣ ಸ್ವೀಕರಿಸುವಾಗ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿ ಪ್ರಕರಣ ದಾಖಲಿಸಿದ್ದರು.
ತನಿಖೆ ಪೂರ್ಣಗೊಂಡ ಬಳಿಕ ಆರೋಪಿಗಳ ವಿರುದ್ಧ ಭ್ರಷ್ಟಾಚಾರ ತಡೆ ಕಾಯ್ದೆಯ ವಿವಿಧ ಕಲಂಗಳಡಿ ದೋಷಾರೋಪಣ ಪಟ್ಟಿ ನ್ಯಾಯಾಲಯಕ್ಕೆ ಸಲ್ಲಿಸಲಾಗಿತ್ತು.
ಲೋಕಾಯುಕ್ತ ಪರ ವಾದ
ಸರ್ಕಾರದ ಪರವಾಗಿ ಲೋಕಾಯುಕ್ತ ವಿಶೇಷ ಸರ್ಕಾರಿ ಅಭಿಯೋಜಕ ಅಶೋಕ್ ಎಸ್. ಚಾಂದಕವಠ ಅವರು ವಾದ ಮಂಡಿಸಿದರು. ಲೋಕಾಯುಕ್ತ ಪೊಲೀಸ್ ಸಿಬ್ಬಂದಿ ಹಣಮಂತರಾಯ್ ಹಾಗೂ ಗುಂಡೂರಾವ್ ಅವರು ಸಾಕ್ಷಿದಾರರನ್ನು ನ್ಯಾಯಾಲಯಕ್ಕೆ ಹಾಜರುಪಡಿಸುವಲ್ಲಿ ಸಹಕರಿಸಿದರು.



