ರಾಜಕೀಯ

ರೈತರಿಗೆ ಎಕರೆಗೆ ₹50 ಸಾವಿರ ಪರಿಹಾರ ನೀಡಿ: ಜಿಲ್ಲಾ ಉಸ್ತುವಾರಿ ಸಚಿವರಿಗೆ ಜೆಡಿಎಸ್ ಆಗ್ರಹ

ಬರ ಪರಿಸ್ಥಿತಿ, ಕುಡಿಯುವ ನೀರಿನ ಸಮಸ್ಯೆ, ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ ಎಂದು ಬಾಲರಾಜ್ ಗುಟ್ಟೇದಾರ್ ಆರೋಪ

ಜಿಲ್ಲೆಯಲ್ಲಿನ ಬರ ಪರಿಸ್ಥಿತಿ ತೀವ್ರವಾಗಿದ್ದು, ಬೆಳೆ ಹಾನಿಗೊಳಗಾದ ರೈತರಿಗೆ ಪ್ರತಿ ಎಕರೆಗೆ ₹50 ಸಾವಿರ ಪರಿಹಾರವನ್ನು ರಾಜ್ಯ ಸರ್ಕಾರ ನೀಡಬೇಕು ಎಂದು ಜೆಡಿಎಸ್ ಜಿಲ್ಲಾ ಅಧ್ಯಕ್ಷ ಬಾಲರಾಜ್ ಗುಟ್ಟೇದಾರ್ ಒತ್ತಾಯಿಸಿದರು.

ನಗರದಲ್ಲಿ ಬುಧವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಜಿಲ್ಲೆಯ ರೈತರು ಮಳೆ ಕೊರತೆಯಿಂದ ಸಂಕಷ್ಟಕ್ಕೆ ಸಿಲುಕಿದ್ದು, ಕುಡಿಯುವ ನೀರಿನ ಸಮಸ್ಯೆಯೂ ಗಂಭೀರವಾಗಿದೆ. ಇಂತಹ ಸಂದರ್ಭದಲ್ಲಿ ಜಿಲ್ಲಾ ಉಸ್ತುವಾರಿ ಸಚಿವರು ತಕ್ಷಣ ಜಿಲ್ಲೆಗೆ ಭೇಟಿ ನೀಡಿ ಸಮಸ್ಯೆಗಳ ಪರಿಹಾರಕ್ಕೆ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು.

ಜಿಲ್ಲೆಯಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿದ್ದು, ಪೋಕ್ಸೊ ಪ್ರಕರಣದ ಆರೋಪಿ ಹಾಗೂ ಕೇಂದ್ರ ಕಾರಾಗೃಹದಿಂದ ಕೈದಿಗಳು ಪರಾರಿಯಾಗಿರುವ ಘಟನೆಗಳು ಆಡಳಿತದ ವೈಫಲ್ಯವನ್ನು ತೋರಿಸುತ್ತವೆ. ಜೂಜಾಟ, ಗಾಂಜಾ ಮಾರಾಟ ಮತ್ತು ಬೆಟ್ಟಿಂಗ್ ಚಟುವಟಿಕೆಗಳು ಹೆಚ್ಚಾಗುತ್ತಿದ್ದು, ಅವುಗಳನ್ನು ನಿಯಂತ್ರಿಸಲು ಕಠಿಣ ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿದರು.

ಇತ್ತೀಚೆಗೆ ಮುಖ್ಯಮಂತ್ರಿ ಜಿಲ್ಲೆಯ ಭೇಟಿ ವೇಳೆ ರೈತರ ಸಮಸ್ಯೆಗಳಿಗೆ ಯಾವುದೇ ವಿಶೇಷ ಪ್ಯಾಕೇಜ್ ಘೋಷಣೆ ಮಾಡಿಲ್ಲ. ಕುಡಿಯುವ ನೀರು ಹಾಗೂ ಬರ ಪರಿಹಾರಕ್ಕೆ ತಕ್ಷಣ ವಿಶೇಷ ಅನುದಾನ ಬಿಡುಗಡೆ ಮಾಡಬೇಕು ಎಂದು ಅವರು ಆಗ್ರಹಿಸಿದರು.

ಭೀಮಾ ನದಿಯಲ್ಲಿ ನೀರಿನ ಕೊರತೆ ಉಂಟಾಗಿದ್ದು, ಅಗತ್ಯವಿದ್ದರೆ ಉಜನಿ ಅಥವಾ ಇತರ ಜಲಾಶಯಗಳಿಂದ ನೀರು ಹರಿಸುವ ಮೂಲಕ ಜಿಲ್ಲೆಯ ಕುಡಿಯುವ ನೀರಿನ ಸಮಸ್ಯೆ ಪರಿಹರಿಸಬೇಕು ಎಂದು ಹೇಳಿದರು. ಗ್ರಾಮೀಣ ಪ್ರದೇಶಗಳಲ್ಲಿ ಟ್ಯಾಂಕರ್ ಮೂಲಕ ನೀರು ಪೂರೈಕೆ ಹೆಚ್ಚಿಸಬೇಕೆಂದೂ ಒತ್ತಾಯಿಸಿದರು.

ರೈತರ ಸಾಲ ಮನ್ನಾ ವಿಚಾರದಲ್ಲಿ ರಾಜ್ಯ ಸರ್ಕಾರ ಕೇಂದ್ರಕ್ಕೆ ಅಧಿಕೃತ ಪ್ರಸ್ತಾವನೆ ಸಲ್ಲಿಸಬೇಕು. ಆಗ ಮಾತ್ರ ಕೇಂದ್ರ ಸರ್ಕಾರದಿಂದ ಅಗತ್ಯ ನೆರವು ದೊರೆಯಲು ಸಾಧ್ಯ ಎಂದು ಹೇಳಿದರು.

ಜಿಲ್ಲೆಯಲ್ಲಿ ಅಕ್ರಮ ಚಟುವಟಿಕೆಗಳು ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಪೊಲೀಸ್ ಇಲಾಖೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕು. ಸರ್ಕಾರ ರೈತರ ಸಮಸ್ಯೆಗಳು, ನೀರಿನ ಅಭಾವ ಹಾಗೂ ಕಾನೂನು ಸುವ್ಯವಸ್ಥೆ ವಿಚಾರದಲ್ಲಿ ತ್ವರಿತ ಕ್ರಮ ಕೈಗೊಂಡು ಜನರ ವಿಶ್ವಾಸ ಉಳಿಸಿಕೊಳ್ಳಬೇಕು ಎಂದು ಬಾಲರಾಜ್ ಗುಟ್ಟೇದಾರ್ ಒತ್ತಾಯಿಸಿದರು.

Related Articles

Leave a Reply

Your email address will not be published. Required fields are marked *

Back to top button