ಮತದಾರರ ಪಟ್ಟಿ ಪರಿಷ್ಕರಣೆಗೆ ಸಾರ್ವಜನಿಕರ ಸಹಕಾರ ಅಗತ್ಯ: ರಾಹುಲ್ ಎಸ್. ಸಂಕನೂರ

ಕಲಬುರಗಿ, ಜೂ. 29: ಜಿಲ್ಲೆಯಲ್ಲಿನ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (ಎಸ್ಐಆರ್) ಕಾರ್ಯ ಮೂರನೇ ಹಂತದಲ್ಲಿ ಪ್ರಗತಿಯಲ್ಲಿದ್ದು, ಮನೆ–ಮನೆಗೆ ಭೇಟಿ ನೀಡುತ್ತಿರುವ ಅಧಿಕಾರಿಗಳು ಹಾಗೂ ಸಿಬ್ಬಂದಿಗೆ ಸಾರ್ವಜನಿಕರು ಸಂಪೂರ್ಣ ಸಹಕಾರ ನೀಡಬೇಕು. ಯಾವುದೇ ಅಪಪ್ರಚಾರಗಳಿಗೆ ಕಿವಿಗೊಡಬಾರದು ಎಂದು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ರಾಹುಲ್ ಎಸ್. ಸಂಕನೂರ ಮನವಿ ಮಾಡಿದರು.
ನಗರದ ಜಗತ್ ವೃತ್ತದಲ್ಲಿ ಭಾರತ ಚುನಾವಣಾ ಆಯೋಗ, ಕರ್ನಾಟಕದ ಮುಖ್ಯ ಚುನಾವಣಾಧಿಕಾರಿಗಳ ಕಚೇರಿ, ಜಿಲ್ಲಾಡಳಿತ, ಜಿಲ್ಲಾ ಸ್ವೀಪ್ (SVEEP) ಸಮಿತಿ ಹಾಗೂ ಸರ್ಕಾರಿ ಮಹಾವಿದ್ಯಾಲಯ (ಸ್ವಾಯತ್ತ) ಇವರ ಸಂಯುಕ್ತ ಆಶ್ರಯದಲ್ಲಿ ಸೋಮವಾರ ಹಮ್ಮಿಕೊಂಡಿದ್ದ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ–2026 ಕುರಿತು ಜಾಗೃತಿ ಬೈಕ್ ರ್ಯಾಲಿಗೆ ಚಾಲನೆ ನೀಡಿ ಅವರು ಮಾತನಾಡಿದರು.
ಜಿಲ್ಲೆಯಲ್ಲಿ ಮ್ಯಾಪಿಂಗ್ ಪ್ರಕ್ರಿಯೆ ಯಶಸ್ವಿಯಾಗಿ ಪೂರ್ಣಗೊಂಡಿದ್ದು, ಪ್ರಸ್ತುತ ಎನ್ಯುಮರೇಷನ್ ಫಾರ್ಮ್ಗಳ ಭರ್ತಿ ಕಾರ್ಯ ನಡೆಯುತ್ತಿದೆ. ಊರಿನಲ್ಲಿ ಇಲ್ಲದ ಮತದಾರರನ್ನು ದೂರವಾಣಿ ಮೂಲಕ ಸಂಪರ್ಕಿಸಿ ಮಾಹಿತಿ ಸಂಗ್ರಹಿಸಲಾಗುತ್ತಿದೆ. ಈ ಕಾರ್ಯದಲ್ಲಿ ಶಿಕ್ಷಕರು, ಆಶಾ ಮತ್ತು ಅಂಗನವಾಡಿ ಕಾರ್ಯಕರ್ತೆಯರು ಸಕ್ರಿಯವಾಗಿ ಪಾಲ್ಗೊಂಡಿದ್ದಾರೆ ಎಂದು ತಿಳಿಸಿದರು.
ಭಾರತ ಚುನಾವಣಾ ಆಯೋಗದ ನಿರ್ದೇಶನದಂತೆ ಜೂನ್ 30ರಿಂದ ಜುಲೈ 29ರವರೆಗೆ ನಡೆಯಲಿರುವ ವಿಶೇಷ ಸಮಗ್ರ ಪರಿಷ್ಕರಣೆ ವೇಳೆ ಮತಗಟ್ಟೆ ಮಟ್ಟದ ಅಧಿಕಾರಿಗಳು (ಬಿಎಲ್ಒಗಳು) ಮನೆ–ಮನೆಗೆ ಭೇಟಿ ನೀಡಿ ಎನ್ಯುಮರೇಷನ್ ಹಾಗೂ ಘೋಷಣಾ ನಮೂನೆಗಳನ್ನು ವಿತರಿಸಲಿದ್ದಾರೆ. ಪ್ರತಿಯೊಬ್ಬ ಅರ್ಹ ನಾಗರಿಕರ ಹೆಸರು ಮತದಾರರ ಪಟ್ಟಿಯಲ್ಲಿ ಸೇರ್ಪಡೆಯಾಗುವಂತೆ ನೋಡಿಕೊಳ್ಳುವುದು ಈ ಅಭಿಯಾನದ ಉದ್ದೇಶವಾಗಿದೆ ಎಂದು ಹೇಳಿದರು.
ದೋಷರಹಿತ ಮತದಾರರ ಪಟ್ಟಿ ಪ್ರಜಾಪ್ರಭುತ್ವದ ಬಲವರ್ಧನೆಗೆ ಅಗತ್ಯವಾಗಿದ್ದು, ಯಾವುದೇ ಅರ್ಹ ಮತದಾರರು ಪಟ್ಟಿಯಿಂದ ಹೊರಗುಳಿಯದಂತೆ ಎಲ್ಲರೂ ಸಹಕರಿಸಬೇಕು ಎಂದು ಅವರು ಕರೆ ನೀಡಿದರು.
ಜಾಗೃತಿ ಬೈಕ್ ರ್ಯಾಲಿಯು ಜಗತ್ ವೃತ್ತದಿಂದ ಅನ್ನಪೂರ್ಣ ಕ್ರಾಸ್, ಲಾಹೋಟಿ ಪೆಟ್ರೋಲ್ ಬಂಕ್, ತಿಮ್ಮಾಪುರ ವೃತ್ತ ಮಾರ್ಗವಾಗಿ ಸಂಚರಿಸಿ ಮತ್ತೆ ಜಗತ್ ವೃತ್ತದಲ್ಲಿ ಸಮಾಪ್ತಿಯಾಯಿತು. ರ್ಯಾಲಿಯ ಮೂಲಕ ವಿಶೇಷ ಸಮಗ್ರ ಪರಿಷ್ಕರಣೆ ಕುರಿತು ಸಾರ್ವಜನಿಕರಲ್ಲಿ ಅರಿವು ಮೂಡಿಸಲಾಯಿತು.
ಕಾರ್ಯಕ್ರಮದಲ್ಲಿ ಮಹಾನಗರ ಪಾಲಿಕೆ ಆಯುಕ್ತ ಅವಿನಾಶ ಶಿಂಧೆ, ಜಿಲ್ಲಾ ಸ್ವೀಪ್ ಸಮಿತಿ ನೋಡಲ್ ಅಧಿಕಾರಿ ಹಾಗೂ ಜಿಲ್ಲಾ ಪಂಚಾಯತ್ ಉಪಕಾರ್ಯದರ್ಶಿ ಲಕ್ಷ್ಮಣ ಶೃಂಗೇರಿ, ಯೋಜನಾ ನಿರ್ದೇಶಕ ಜಗದೇವಪ್ಪ, ಸಹಾಯಕ ಕಾರ್ಯದರ್ಶಿ ಚೆನ್ನಪ್ಪ, ತಾಲೂಕು ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿ ಮಾನಪ್ಪ ಕಟ್ಟಿಮನಿ, ಕಾಲೇಜು ಶಿಕ್ಷಣ ಇಲಾಖೆ ಹಾಗೂ ಪದವಿಪೂರ್ವ ಶಿಕ್ಷಣ ಇಲಾಖೆಯ ಅಧಿಕಾರಿಗಳು, ಉಪನ್ಯಾಸಕರು, ಬಿಎಲ್ಒಗಳು, ಅಂಗವಿಕಲರು ಮತ್ತು ವಿವಿಧ ಇಲಾಖೆಗಳ ಅಧಿಕಾರಿಗಳು ಭಾಗವಹಿಸಿದ್ದರು.



