
ಕಲಬುರಗಿ, ಆ.1: ಸರ್ಕಾರಿ ವಸತಿ ಶಾಲೆಗಳಲ್ಲಿ ಕಲುಷಿತ ಆಹಾರ ಸೇವನೆಯಿಂದ ವಿದ್ಯಾರ್ಥಿಗಳು ಅಸ್ವಸ್ಥಗೊಳ್ಳುತ್ತಿರುವ ಘಟನೆಗಳನ್ನು ಖಂಡಿಸಿ, ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಹಾಗೂ ವಿದ್ಯಾರ್ಥಿಗಳಿಗೆ ಸುರಕ್ಷಿತ ಆಹಾರ ಮತ್ತು ಮೂಲಭೂತ ಸೌಲಭ್ಯಗಳನ್ನು ಒದಗಿಸಬೇಕು ಎಂದು ಆಗ್ರಹಿಸಿ ಎಐಡಿಎಸ್ಒ (ಆಲ್ ಇಂಡಿಯಾ ಡೆಮಾಕ್ರಟಿಕ್ ಸ್ಟೂಡೆಂಟ್ಸ್ ಆರ್ಗನೈಸೇಶನ್) ಕಾರ್ಯಕರ್ತರು ಶನಿವಾರ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿದರು.
ಪ್ರತಿಭಟನೆಯನ್ನುದ್ದೇಶಿಸಿ ಮಾತನಾಡಿದ ಎಐಡಿಎಸ್ಒ ಜಿಲ್ಲಾ ಅಧ್ಯಕ್ಷ ತುಳಜಾರಾಮ ಎನ್.ಕೆ., ಕಲ್ಯಾಣ ಕರ್ನಾಟಕ ಭಾಗದ ಕೇಂದ್ರವಾಗಿರುವ ಕಲಬುರಗಿ ಜಿಲ್ಲೆಯಲ್ಲಿ ಸರ್ಕಾರಿ ವಸತಿ ಶಾಲೆಗಳಲ್ಲಿ ಪದೇಪದೇ ಕಲುಷಿತ ಆಹಾರ ಸೇವನೆಯ ಘಟನೆಗಳು ನಡೆಯುತ್ತಿರುವುದು ಅತ್ಯಂತ ಆತಂಕಕಾರಿ ಬೆಳವಣಿಗೆ ಎಂದು ಹೇಳಿದರು.
ಬಡ ಹಾಗೂ ಶೋಷಿತ ವರ್ಗದ ವಿದ್ಯಾರ್ಥಿಗಳಿಗೆ ಆಶ್ರಯವಾಗಬೇಕಾದ ಸರ್ಕಾರಿ ವಸತಿ ಶಾಲೆಗಳು ಇಂದು ವಿದ್ಯಾರ್ಥಿಗಳು ಮತ್ತು ಪೋಷಕರಲ್ಲಿ ಭಯ ಹುಟ್ಟಿಸುವಂತಾಗಿವೆ. ಈ ಪರಿಸ್ಥಿತಿಗೆ ಸಂಬಂಧಿಸಿದ ಅಧಿಕಾರಿಗಳ ನಿರ್ಲಕ್ಷ್ಯವೇ ಮುಖ್ಯ ಕಾರಣ ಎಂದು ಆರೋಪಿಸಿದರು.
ಜಿಲ್ಲೆಯ ಅನೇಕ ಸರ್ಕಾರಿ ವಸತಿ ಶಾಲೆಗಳಲ್ಲಿ ಮೂಲಸೌಕರ್ಯಗಳ ಕೊರತೆ, ಖಾಲಿ ಶಿಕ್ಷಕರ ಹುದ್ದೆಗಳು ಹಾಗೂ ಹಾಳಾಗಿರುವ ಕಟ್ಟಡಗಳ ಸಮಸ್ಯೆಗಳು ಗಂಭೀರವಾಗಿವೆ. ಇತ್ತೀಚೆಗೆ ಚಿತ್ತಾಪುರ ತಾಲ್ಲೂಕಿನ ದಂಡೋತಿ ಗ್ರಾಮದ ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ಕಲುಷಿತ ಆಹಾರ ಸೇವಿಸಿ ವಿದ್ಯಾರ್ಥಿಗಳು ಅಸ್ವಸ್ಥಗೊಂಡ ಘಟನೆ ಮಾಸುವ ಮುನ್ನವೇ, ಅಫಜಲಪುರ ತಾಲ್ಲೂಕಿನ ಕರಜಗಿ ಗ್ರಾಮದ ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ 50ಕ್ಕೂ ಹೆಚ್ಚು ವಿದ್ಯಾರ್ಥಿಗಳು ಅಸ್ವಸ್ಥಗೊಂಡಿರುವುದು ಜಿಲ್ಲಾಡಳಿತದ ನಿರ್ಲಕ್ಷ್ಯವನ್ನು ಬಯಲಿಗೆಳೆದಿದೆ ಎಂದು ಕಿಡಿಕಾರಿದರು.
ಈ ರೀತಿಯ ಘಟನೆಗಳಿಂದ ಪೋಷಕರು ತಮ್ಮ ಮಕ್ಕಳನ್ನು ವಸತಿ ಶಾಲೆಗಳಿಗೆ ಕಳುಹಿಸಲು ಆತಂಕ ವ್ಯಕ್ತಪಡಿಸುತ್ತಿದ್ದು, ಸರ್ಕಾರಿ ಶಾಲೆಗಳ ಮೇಲಿನ ವಿಶ್ವಾಸವೂ ಕುಸಿಯುತ್ತಿದೆ. ಆದ್ದರಿಂದ ಈಗಾಗಲೇ ಘಟನೆ ನಡೆದಿರುವ ಶಾಲೆಗಳಲ್ಲಿ ಸಮಗ್ರ ತನಿಖೆ ನಡೆಸಿ, ಜಿಲ್ಲಾದ್ಯಂತ ಎಲ್ಲಾ ವಸತಿ ಶಾಲೆಗಳಲ್ಲಿ ನೀಡಲಾಗುತ್ತಿರುವ ಆಹಾರ ಹಾಗೂ ಕುಡಿಯುವ ನೀರಿನ ಗುಣಮಟ್ಟವನ್ನು ನಿಯಮಿತವಾಗಿ ಪರಿಶೀಲಿಸಬೇಕು ಎಂದು ಒತ್ತಾಯಿಸಿದರು.
ಪ್ರತಿಯೊಂದು ಸರ್ಕಾರಿ ವಸತಿ ಶಾಲೆಯಲ್ಲೂ ಶುದ್ಧ ಕುಡಿಯುವ ನೀರಿನ ವ್ಯವಸ್ಥೆ, ಸ್ವಚ್ಛ ಅಡುಗೆಮನೆ ಹಾಗೂ ಗುಣಮಟ್ಟದ ಆಹಾರ ವಿತರಣೆಯನ್ನು ಕಡ್ಡಾಯಗೊಳಿಸಬೇಕು. ಮುಂದಿನ ದಿನಗಳಲ್ಲಿ ಇಂತಹ ದುರ್ಘಟನೆಗಳು ಮರುಕಳಿಸದಂತೆ ಸರ್ಕಾರ ಮತ್ತು ಜಿಲ್ಲಾಡಳಿತ ತಕ್ಷಣವೇ ಕಟ್ಟುನಿಟ್ಟಿನ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಆಗ್ರಹಿಸಿದರು.
ಪ್ರತಿಭಟನೆಯಲ್ಲಿ ಜಿಲ್ಲಾ ಉಪಾಧ್ಯಕ್ಷೆ ಪ್ರೀತಿ ದೊಡ್ಡಮನಿ, ಗೋವಿಂದ ಯಳವಾರ, ನಾಗರಾಜ ರಾವೂರ, ಯುವರಾಜ ರಾಠೋಡ್, ಬೃಂದಾ, ಸೃಷ್ಟಿ, ಅನಿತಾ, ಸಂಘರ್ಷ, ಕಾರ್ತಿಕ್, ಅನಿಕೇತ್ ಸೇರಿದಂತೆ ಹಲವರು ಭಾಗವಹಿಸಿದ್ದರು.



