ರಾಜ್ಯಶಿಕ್ಷಣ

ಕೇಂದ್ರ ಶಿಕ್ಷಣ ಸಚಿವರ ರಾಜೀನಾಮೆಗೆ ಆಗ್ರಹಿಸಿ ಪ್ರಧಾನಿ ಮೋದಿ ಅವರಿಗೆ ಪತ್ರ ಚಳವಳಿ: ಡಾ. ಡಿ.ಜಿ. ಸಾಗರ್

ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ಖಂಡನೆ • ಪರೀಕ್ಷಾ ವ್ಯವಸ್ಥೆ ಸುಧಾರಣೆಗೆ ಒತ್ತಾಯ • ರಾಜ್ಯದ ಎಲ್ಲ ಜಿಲ್ಲೆಗಳಿಂದ ಪ್ರಧಾನಿ ಅವರಿಗೆ ಪತ್ರ ರವಾನೆ ಅಭಿಯಾನ

ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣವನ್ನು ಖಂಡಿಸಿ ಹಾಗೂ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿ ರಾಜ್ಯದ ಎಲ್ಲ ಜಿಲ್ಲೆಗಳಿಂದ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆಯುವ ಚಳವಳಿ ಆರಂಭಿಸಲಾಗುತ್ತಿದೆ ಎಂದು ಕರ್ನಾಟಕ ರಾಜ್ಯ ದಲಿತ ಸಂಘರ್ಷ ಸಮಿತಿಯ ರಾಜ್ಯ ಸಂಚಾಲಕ ಡಾ. ಡಿ.ಜಿ. ಸಾಗರ್ ತಿಳಿಸಿದರು.

ನಗರದ ಪತ್ರಿಕಾ ಭವನದಲ್ಲಿ ಶನಿವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ದೇಶದಲ್ಲಿ ಶಿಕ್ಷಣ ವ್ಯವಸ್ಥೆಯ ಮೇಲಿನ ಸಾರ್ವಜನಿಕರ ನಂಬಿಕೆಯನ್ನು ಉಳಿಸಿಕೊಳ್ಳಲು ಪರೀಕ್ಷಾ ವ್ಯವಸ್ಥೆಯಲ್ಲಿ ಪಾರದರ್ಶಕತೆ ಮತ್ತು ಉತ್ತರದಾಯಿತ್ವ ಅತ್ಯಗತ್ಯವಾಗಿದೆ. ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣಗಳ ಹಿನ್ನೆಲೆಯಲ್ಲಿ ಸಮಗ್ರ ಸುಧಾರಣೆ ಅಗತ್ಯವಿದೆ ಎಂದು ಹೇಳಿದರು.

ದೇಶದ ಇತಿಹಾಸದಲ್ಲಿ ಸ್ವಾತಂತ್ರ್ಯ, ಸಮಾನತೆ ಹಾಗೂ ಸಾಮಾಜಿಕ ನ್ಯಾಯಕ್ಕಾಗಿ ಅನೇಕ ಅಹಿಂಸಾತ್ಮಕ ಹೋರಾಟಗಳು ನಡೆದಿವೆ. ಈಗ ಶಿಕ್ಷಣ ಕ್ಷೇತ್ರದಲ್ಲಿ ಉಂಟಾಗಿರುವ ಸಮಸ್ಯೆಗಳ ವಿರುದ್ಧವೂ ಅಹಿಂಸಾತ್ಮಕ ಹೋರಾಟದ ಅಗತ್ಯವಿದೆ ಎಂದು ಅವರು ಅಭಿಪ್ರಾಯಪಟ್ಟರು.

ನೀಟ್ ಸೇರಿದಂತೆ ವಿವಿಧ ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿನ ಅಕ್ರಮಗಳ ವಿರುದ್ಧ ಕಳೆದ 19 ದಿನಗಳಿಂದ ನಡೆಯುತ್ತಿರುವ ಹೋರಾಟಕ್ಕೆ ಬೆಂಬಲ ವ್ಯಕ್ತಪಡಿಸಿದ ಅವರು, ವಿದ್ಯಾರ್ಥಿಗಳ ಭವಿಷ್ಯಕ್ಕೆ ಧಕ್ಕೆ ಉಂಟುಮಾಡುತ್ತಿರುವ ಪರೀಕ್ಷಾ ಅಕ್ರಮಗಳ ಕುರಿತು ಕೇಂದ್ರ ಸರ್ಕಾರ ಗಂಭೀರವಾಗಿ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು.

ಕೇಂದ್ರ ಶಿಕ್ಷಣ ಸಚಿವರು ರಾಜೀನಾಮೆ ನೀಡದಿದ್ದರೆ ಅವರನ್ನು ಸಚಿವ ಸಂಪುಟದಿಂದ ವಜಾಗೊಳಿಸುವಂತೆ ಪ್ರಧಾನಿ ನರೇಂದ್ರ ಮೋದಿ ಅವರಿಗೆ ರಾಜ್ಯದ ಎಲ್ಲಾ ಜಿಲ್ಲೆಗಳಿಂದ ಪತ್ರ ಬರೆಯಲು ತೀರ್ಮಾನಿಸಲಾಗಿದೆ ಎಂದು ತಿಳಿಸಿದರು.

ಸುದ್ದಿಗೋಷ್ಠಿಯಲ್ಲಿ ಬಿ.ಸಿ. ವಾಲಿ, ಸುರೇಶ್ ಹಾದಿಮನಿ, ಹೆಚ್. ಶಂಕರ್, ಎಸ್.ಪಿ. ಸುಳ್ಳದ್ ಸೇರಿದಂತೆ ಹಲವು ಮುಖಂಡರು ಉಪಸ್ಥಿತರಿದ್ದರು.

Related Articles

Leave a Reply

Your email address will not be published. Required fields are marked *

Back to top button