ರಸ್ತೆ ಸುರಕ್ಷತಾ ನಿಯಮ ಪಾಲನೆಗೆ ಚಾಲಕರು ಮುಂದಾಗಬೇಕು: ಡಿವೈಎಸ್ಪಿ ಶಂಕರಗೌಡ ಪಾಟೀಲ
ಸಂಚಾರ ನಿಯಮ ಉಲ್ಲಂಘನೆ ಅಪಘಾತಗಳಿಗೆ ಕಾರಣ; ಮದ್ಯಪಾನ ಮಾಡಿ ವಾಹನ ಚಲಾಯಿಸದಂತೆ ಎಚ್ಚರಿಕೆ

ರಸ್ತೆ ಅಪಘಾತಗಳನ್ನು ತಡೆಗಟ್ಟುವ ನಿಟ್ಟಿನಲ್ಲಿ ಎಲ್ಲ ವಾಹನ ಚಾಲಕರು ರಸ್ತೆ ಸುರಕ್ಷತಾ ನಿಯಮಗಳನ್ನು ಕಟ್ಟುನಿಟ್ಟಾಗಿ ಪಾಲಿಸಬೇಕು ಎಂದು ಶಹಾಬಾದ್ ಡಿವೈಎಸ್ಪಿ ಶಂಕರಗೌಡ ಪಾಟೀಲ ಕರೆ ನೀಡಿದರು.
ಮಾಡಬೂಳ ಪೊಲೀಸ್ ಠಾಣೆಯ ಆವರಣದಲ್ಲಿ ರಸ್ತೆ ಸುರಕ್ಷತಾ ನಿಯಮಗಳ ಕುರಿತು ಆಯೋಜಿಸಿದ್ದ ಜಾಗೃತಿ ಸಭೆಯಲ್ಲಿ ಮಾತನಾಡಿದ ಅವರು, ಜನಸಂದಣಿ ಹೆಚ್ಚಿರುವ ಪ್ರದೇಶಗಳು, ಶಾಲೆಗಳು, ಕಾಲೇಜುಗಳು ಹಾಗೂ ಗ್ರಾಮಗಳ ವ್ಯಾಪ್ತಿಯಲ್ಲಿ ವಾಹನಗಳನ್ನು ನಿಧಾನಗತಿಯಲ್ಲಿ ಚಲಾಯಿಸಬೇಕು ಎಂದು ತಿಳಿಸಿದರು.
ಪ್ರತಿಯೊಬ್ಬ ವಾಹನ ಚಾಲಕರ ಬಳಿ ಕಡ್ಡಾಯವಾಗಿ ಚಾಲನಾ ಪರವಾನಗಿ, ವಾಹನ ನೋಂದಣಿ ಪ್ರಮಾಣಪತ್ರ ಹಾಗೂ ವಿಮೆ ದಾಖಲೆಗಳು ಇರಬೇಕು. ಸಂಚಾರ ನಿಯಮಗಳನ್ನು ಪಾಲಿಸುವುದರಿಂದ ಅಪಘಾತಗಳನ್ನು ಗಣನೀಯವಾಗಿ ತಡೆಗಟ್ಟಬಹುದು ಎಂದು ಹೇಳಿದರು.
ಮದ್ಯಪಾನ ಮಾಡಿ ವಾಹನ ಚಲಾಯಿಸುವುದು ಗಂಭೀರ ಅಪರಾಧವಾಗಿದ್ದು, ಅಂತಹ ಪ್ರಕರಣಗಳು ಕಂಡುಬಂದರೆ ಕಾನೂನು ಪ್ರಕಾರ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಸಿದರು.
ವಾಹನಗಳನ್ನು ರಸ್ತೆ ಬದಿಯಲ್ಲಿ ಅಡ್ಡಾದಿಡ್ಡಿಯಾಗಿ ನಿಲ್ಲಿಸದೇ, ಇತರ ವಾಹನಗಳ ಸಂಚಾರಕ್ಕೆ ತೊಂದರೆಯಾಗದಂತೆ ನಿಗದಿತ ಸ್ಥಳದಲ್ಲಿಯೇ ಪಾರ್ಕಿಂಗ್ ಮಾಡಬೇಕು ಎಂದು ಸಲಹೆ ನೀಡಿದರು.
ರಸ್ತೆ ಮಧ್ಯೆ ವಾಹನ ಕೆಟ್ಟು ನಿಂತರೆ ತಕ್ಷಣ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ (ಎನ್‌ಎಚ್‌ಎಐ) ಅಥವಾ ಸಂಬಂಧಿತ ಅಧಿಕಾರಿಗಳಿಗೆ ಮಾಹಿತಿ ನೀಡಬೇಕು. ವಾಹನದ ಪಾರ್ಕಿಂಗ್ ಲೈಟ್‌ಗಳನ್ನು ಆನ್ ಮಾಡಿ, ಟ್ರಾಫಿಕ್ ಕೋನ್‌ಗಳನ್ನು ಅಳವಡಿಸುವ ಮೂಲಕ ಮತ್ತಷ್ಟು ಅಪಘಾತಗಳನ್ನು ತಪ್ಪಿಸಬಹುದಾಗಿದೆ ಎಂದು ತಿಳಿಸಿದರು.
ಯಾವುದೇ ರಸ್ತೆ ಅಪಘಾತ ಸಂಭವಿಸಿದರೆ ಕೂಡಲೇ ಸಮೀಪದ ಪೊಲೀಸ್ ಠಾಣೆ ಅಥವಾ ತುರ್ತು ಸಹಾಯವಾಣಿ 112ಕ್ಕೆ ಮಾಹಿತಿ ನೀಡಬೇಕು. ಗಾಯಾಳುಗಳಿಗೆ 108 ಆಂಬುಲೆನ್ಸ್ ಸೇವೆಯ ಮೂಲಕ ತ್ವರಿತ ಚಿಕಿತ್ಸೆ ದೊರಕುವಂತೆ ಆಸ್ಪತ್ರೆಗೆ ದಾಖಲಿಸುವುದು ಪ್ರತಿಯೊಬ್ಬ ನಾಗರಿಕನ ಸಾಮಾಜಿಕ ಜವಾಬ್ದಾರಿಯಾಗಿದೆ ಎಂದು ಹೇಳಿದರು.
ಸಭೆಯಲ್ಲಿ ಪಿಎಸ್‌ಐಗಳಾದ ಗೌತಮ್ ಹಾಗೂ ಸಿದ್ದಲಿಂಗ (ತನಿಖೆ), ಪೊಲೀಸ್ ಸಿಬ್ಬಂದಿ, ಚಿತ್ತಾಪುರ, ಮಳಖೇಡ ಮತ್ತು ಸೇಡಂ ಲಾರಿ ಅಸೋಸಿಯೇಷನ್ ಅಧ್ಯಕ್ಷರು, ಲಾರಿ, ಟಿಪ್ಪರ್ ಹಾಗೂ ಬಲ್ಕರ್ ವಾಹನಗಳ ಮಾಲೀಕರು, ಚಾಲಕರು ಮತ್ತು ರಾಷ್ಟ್ರೀಯ ಹೆದ್ದಾರಿ-150ರ ಅಧಿಕಾರಿಗಳು ಉಪಸ್ಥಿತರಿದ್ದರು.



