ಬೀದರ್ ಜಿಲ್ಲೆಯನ್ನು ಬರಪೀಡಿತ ಎಂದು ಘೋಷಿಸಲು ಕೃಷಿಕ ಸಮಾಜ ಆಗ್ರಹ
ರೈತರ ಸಂಕಷ್ಟ ನಿವಾರಣೆಗೆ ತುರ್ತು ಕ್ರಮ, ಬೆಳೆ ಹಾನಿಗೆ ಪರಿಹಾರ ನೀಡುವಂತೆ ಮನವಿ

ಬೀದರ್, ಜು.20: ಜಿಲ್ಲೆಯನ್ನು ತಕ್ಷಣವೇ ಬರಪೀಡಿತ ಜಿಲ್ಲೆ ಎಂದು ಘೋಷಿಸಿ ರೈತರ ಸಂಕಷ್ಟ ನಿವಾರಣೆಗೆ ಅಗತ್ಯ ಕ್ರಮ ಕೈಗೊಳ್ಳುವಂತೆ ಕರ್ನಾಟಕ ಪ್ರದೇಶ ಕೃಷಿಕ ಸಮಾಜದ ಜಿಲ್ಲಾ ಅಧ್ಯಕ್ಷ ಸಿದ್ರಾಮಯ್ಯ ಎಸ್. ಸ್ವಾಮಿ ಹಾಗೂ ರಾಜ್ಯ ಪ್ರತಿನಿಧಿ ವಿಶ್ವನಾಥ ಪಾಟೀಲ ಮಾಡಗೋಳ ಅವರು ಆಗ್ರಹಿಸಿದ್ದಾರೆ.
ಜಿಲ್ಲಾಧಿಕಾರಿಗಳ ಮೂಲಕ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಿದ ಅವರು, ಜಿಲ್ಲೆಯ ಸುಮಾರು ಶೇ.90ರಷ್ಟು ಕೃಷಿಯು ಮಳೆಯನ್ನೇ ಅವಲಂಬಿಸಿದ್ದು, ಸಮರ್ಪಕ ನೀರಾವರಿ ಸೌಲಭ್ಯಗಳ ಕೊರತೆಯಿಂದ ರೈತರು ತೀವ್ರ ಸಂಕಷ್ಟ ಎದುರಿಸುತ್ತಿದ್ದಾರೆ ಎಂದು ತಿಳಿಸಿದರು.
ಜಿಲ್ಲೆಯಲ್ಲಿರುವ ಕಾರಂಜಾ ಜಲಾಶಯದ ನೀರಿನ ಪ್ರಯೋಜನ ಬಹುತೇಕ ರೈತರಿಗೆ ದೊರೆಯುತ್ತಿಲ್ಲ. ಮಳೆಯ ಕೊರತೆಯಿಂದ ಕೆರೆ, ಬಾವಿ ಹಾಗೂ ಕೊಳವೆಬಾವಿಗಳ ನೀರಿನ ಮಟ್ಟ ದಿನದಿಂದ ದಿನಕ್ಕೆ ಕುಸಿಯುತ್ತಿದ್ದು, ಕೃಷಿ ಚಟುವಟಿಕೆಗಳ ಜೊತೆಗೆ ಜಾನುವಾರು ಸಾಕಾಣಿಕೆಯೂ ಸಂಕಷ್ಟಕ್ಕೆ ಸಿಲುಕಿದೆ ಎಂದು ಕಳವಳ ವ್ಯಕ್ತಪಡಿಸಿದರು.
ರಾಜ್ಯ ಸರ್ಕಾರ ಕೂಡಲೇ ಜಿಲ್ಲೆಯ ವಾಸ್ತವ ಸ್ಥಿತಿಯನ್ನು ಪರಿಶೀಲಿಸಿ ಜಿಲ್ಲೆಯನ್ನು ಬರಪೀಡಿತ ಎಂದು ಘೋಷಿಸಬೇಕು. ರೈತರ ಕೃಷಿ ಸಾಲಗಳನ್ನು ಸಂಪೂರ್ಣ ಮನ್ನಾ ಮಾಡಬೇಕು. ಬೆಳೆ ಹಾನಿಗೆ ತಕ್ಷಣ ಸೂಕ್ತ ಪರಿಹಾರ ಬಿಡುಗಡೆ ಮಾಡಬೇಕು. ಮರುಬಿತ್ತನೆಗೆ ಉಚಿತವಾಗಿ ಅಥವಾ ಸಹಾಯಧನದ ಆಧಾರದಲ್ಲಿ ಬೀಜ ಮತ್ತು ರಸಗೊಬ್ಬರ ವಿತರಿಸಬೇಕು. ಜೊತೆಗೆ ಕುಡಿಯುವ ನೀರು ಹಾಗೂ ಜಾನುವಾರುಗಳಿಗೆ ಮೇವು ಮತ್ತು ನೀರಿನ ವ್ಯವಸ್ಥೆಯನ್ನು ತುರ್ತಾಗಿ ಕಲ್ಪಿಸಬೇಕು ಎಂದು ಮನವಿಯಲ್ಲಿ ಒತ್ತಾಯಿಸಲಾಗಿದೆ.



