ರಾಜ್ಯ

ಅಕ್ರಮ ಮರಳು ಗಣಿಗಾರಿಕೆಗೆ ಕಠಿಣ ಕಡಿವಾಣ: ರಾಜ್ಯಾದ್ಯಂತ ಪೊಲೀಸ್ ಅಧಿಕಾರಿಗಳಿಗೆ ಸಚಿವ ಪ್ರಿಯಾಂಕ್ ಖರ್ಗೆ ಕಟ್ಟುನಿಟ್ಟಿನ ನಿರ್ದೇಶನ

ಅಕ್ರಮ ಗಣಿಗಾರಿಕೆ, ಸಂಗ್ರಹಣೆ ಹಾಗೂ ಸಾಗಾಣಿಕೆ ತಡೆಗೆ ವಿಶೇಷ ಕಾರ್ಯಾಚರಣೆ; ನಿರ್ಲಕ್ಷ್ಯ ತೋರಿದ ಅಧಿಕಾರಿಗಳ ವಿರುದ್ಧವೂ ಶಿಸ್ತು ಕ್ರಮದ ಎಚ್ಚರಿಕೆ

ಕಲಬುರಗಿ, ಜು.28: ರಾಜ್ಯದಲ್ಲಿ ಅಕ್ರಮ ಮರಳು ಗಣಿಗಾರಿಕೆ, ಸಂಗ್ರಹಣೆ ಹಾಗೂ ಸಾಗಾಣಿಕೆಯನ್ನು ಸಂಪೂರ್ಣವಾಗಿ ತಡೆಯುವ ಉದ್ದೇಶದಿಂದ ಗೃಹ, ಮಾಹಿತಿ ತಂತ್ರಜ್ಞಾನ, ಜೈವಿಕ ತಂತ್ರಜ್ಞಾನ ಹಾಗೂ ಇ-ಆಡಳಿತ ಸಚಿವ ಪ್ರಿಯಾಂಕ್ ಖರ್ಗೆ ಅವರ ನಿರ್ದೇಶನದ ಮೇರೆಗೆ ರಾಜ್ಯ ಪೊಲೀಸ್ ಮಹಾನಿರ್ದೇಶಕರು (ಡಿಜಿ ಮತ್ತು ಐಜಿಪಿ) ರಾಜ್ಯದ ಎಲ್ಲಾ ಪೊಲೀಸ್ ಆಯುಕ್ತರು, ಪೊಲೀಸ್ ಮಹಾನಿರೀಕ್ಷಕರು, ಉಪ ಮಹಾನಿರೀಕ್ಷಕರು ಹಾಗೂ ಜಿಲ್ಲಾ ಪೊಲೀಸ್ ಅಧೀಕ್ಷಕರಿಗೆ ಸಮಗ್ರ ಸುತ್ತೋಲೆ ಹೊರಡಿಸಿದ್ದಾರೆ.

ಅಕ್ರಮ ಮರಳು ಗಣಿಗಾರಿಕೆ ಪರಿಸರಕ್ಕೆ ಹಾನಿ ಉಂಟುಮಾಡುವುದಲ್ಲದೆ, ಕಾನೂನು ಸುವ್ಯವಸ್ಥೆ ಹಾಗೂ ಸರ್ಕಾರದ ಆದಾಯಕ್ಕೂ ಧಕ್ಕೆ ತರುತ್ತಿದೆ. ಇಂತಹ ಅಕ್ರಮ ಚಟುವಟಿಕೆಗಳ ವಿರುದ್ಧ ಸರ್ಕಾರ ಶೂನ್ಯ ಸಹಿಷ್ಣುತೆ ನೀತಿಯನ್ನು ಅನುಸರಿಸುತ್ತಿದ್ದು, ರಾಜ್ಯಾದ್ಯಂತ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುವಂತೆ ಸೂಚನೆ ನೀಡಲಾಗಿದೆ.

ಅಕ್ರಮ ಮರಳು ಗಣಿಗಾರಿಕೆ ಹಾಗೂ ಸಾಗಾಣಿಕೆ ಕೇವಲ ನೈಸರ್ಗಿಕ ಸಂಪತ್ತಿನ ಲೂಟಿಯಲ್ಲ, ಅದು ಗಂಭೀರ ಅಪರಾಧವಾಗಿದೆ. ಯಾವುದೇ ಅಕ್ರಮ ಚಟುವಟಿಕೆಯನ್ನು ಸಹಿಸುವ ಪ್ರಶ್ನೆಯೇ ಇಲ್ಲ. ಕಾನೂನು ಉಲ್ಲಂಘಿಸುವವರ ವಿರುದ್ಧ ನಿರ್ದಾಕ್ಷಿಣ್ಯವಾಗಿ ಕ್ರಮ ಕೈಗೊಳ್ಳುವಂತೆ ಪೊಲೀಸ್ ಇಲಾಖೆಗೆ ಸ್ಪಷ್ಟ ನಿರ್ದೇಶನ ನೀಡಲಾಗಿದೆ ಎಂದು ಸಚಿವ ಪ್ರಿಯಾಂಕ್ ಖರ್ಗೆ ತಿಳಿಸಿದ್ದಾರೆ.

ಸುತ್ತೋಲೆಯಲ್ಲಿ ಜಿಲ್ಲಾ ಹಾಗೂ ತಾಲೂಕು ಮಟ್ಟದಲ್ಲಿ ಈಗಾಗಲೇ ರಚನೆಯಾಗಿರುವ ಟಾಸ್ಕ್‌ಫೋರ್ಸ್‌ಗಳನ್ನು ಇನ್ನಷ್ಟು ಪರಿಣಾಮಕಾರಿಯಾಗಿ ಕಾರ್ಯನಿರ್ವಹಿಸುವಂತೆ ಸೂಚಿಸಲಾಗಿದೆ. ಅಕ್ರಮ ಮರಳು ಗಣಿಗಾರಿಕೆ ನಡೆಯುವ ಪ್ರದೇಶಗಳನ್ನು ಗುರುತಿಸಿ ನಿರಂತರ ನಿಗಾ ವಹಿಸುವುದು, ಅಕ್ರಮ ಸಂಗ್ರಹಣೆ ಮತ್ತು ಸಾಗಾಣಿಕೆಯನ್ನು ತಡೆಯುವುದು ಸಂಬಂಧಿತ ಪೊಲೀಸ್ ಅಧಿಕಾರಿಗಳ ಜವಾಬ್ದಾರಿಯಾಗಿದೆ ಎಂದು ತಿಳಿಸಲಾಗಿದೆ.

ರಾಜ್ಯದ ಗಡಿ ಪ್ರದೇಶಗಳು ಹಾಗೂ ಅಂತರರಾಜ್ಯ ಮಾರ್ಗಗಳಲ್ಲಿ ಅಕ್ರಮ ಸಾಗಾಣಿಕೆ ತಡೆಯಲು ಗಣಿ ಮತ್ತು ಭೂವಿಜ್ಞಾನ ಇಲಾಖೆ, ಕಂದಾಯ ಇಲಾಖೆ ಹಾಗೂ ಅರಣ್ಯ ಇಲಾಖೆಯೊಂದಿಗೆ ಸಮನ್ವಯ ಸಾಧಿಸಿ ಕಾರ್ಯಾಚರಣೆ ನಡೆಸುವಂತೆ ಸೂಚಿಸಲಾಗಿದೆ. ತಪಾಸಣಾ ಕೇಂದ್ರಗಳನ್ನು ಪರಿಣಾಮಕಾರಿಯಾಗಿ ನಿರ್ವಹಿಸುವುದರ ಜೊತೆಗೆ ಅಗತ್ಯ ಮೂಲಸೌಕರ್ಯಗಳ ಕೊರತೆ ಕಂಡುಬಂದರೆ ಸಂಬಂಧಿತ ಇಲಾಖೆಯ ಗಮನಕ್ಕೆ ತರಬೇಕೆಂದು ನಿರ್ದೇಶಿಸಲಾಗಿದೆ.

ಅಕ್ರಮ ಮರಳು ದಂಧೆಯಲ್ಲಿ ತೊಡಗಿರುವವರ ವಿರುದ್ಧ ಕಾನೂನು ಪ್ರಕಾರ ಕಠಿಣ ಕ್ರಮ ಕೈಗೊಳ್ಳಲಾಗುವುದು. ಕರ್ತವ್ಯ ಲೋಪ ಎಸಗುವ ಅಧಿಕಾರಿಗಳ ವಿರುದ್ಧವೂ ಶಿಸ್ತು ಕ್ರಮ ಜರುಗಿಸಲಾಗುವುದು. ನೈಸರ್ಗಿಕ ಸಂಪತ್ತಿನ ಸಂರಕ್ಷಣೆ ಹಾಗೂ ಕಾನೂನು ಸುವ್ಯವಸ್ಥೆ ಕಾಪಾಡುವುದು ಸರ್ಕಾರದ ಪ್ರಮುಖ ಆದ್ಯತೆಯಾಗಿದೆ ಎಂದು ಸಚಿವರು ಹೇಳಿದ್ದಾರೆ.

ಪ್ರತಿ ಪೊಲೀಸ್ ಘಟಕವು ತನ್ನ ವ್ಯಾಪ್ತಿಯಲ್ಲಿನ ಅಕ್ರಮ ಮರಳು ಚಟುವಟಿಕೆಗಳ ಬಗ್ಗೆ ಗುಪ್ತಚರ ಮಾಹಿತಿ ಸಂಗ್ರಹಿಸಿ, ಅಗತ್ಯವಿದ್ದಲ್ಲಿ ದಿಢೀರ್ ದಾಳಿ ನಡೆಸಬೇಕು. ನಿರಂತರವಾಗಿ ಅಕ್ರಮದಲ್ಲಿ ತೊಡಗಿರುವವರ ವಿರುದ್ಧ ಗೂಂಡಾ ಕಾಯ್ದೆಯಡಿ ಕ್ರಮ ಕೈಗೊಳ್ಳುವಂತೆಯೂ ಸೂಚಿಸಲಾಗಿದೆ.

ಪ್ರತಿ ತಿಂಗಳ ಅಪರಾಧ ಪರಿಶೀಲನಾ ಸಭೆಯಲ್ಲಿ ಅಕ್ರಮ ಮರಳು ಗಣಿಗಾರಿಕೆ, ಸಾಗಾಣಿಕೆ ಹಾಗೂ ಸಂಗ್ರಹಣೆ ಪ್ರಕರಣಗಳ ಪ್ರಗತಿಯನ್ನು ಪರಿಶೀಲಿಸಿ ಅಗತ್ಯ ಸೂಚನೆಗಳನ್ನು ನೀಡಬೇಕು. ಜಿಲ್ಲಾ ಹಾಗೂ ತಾಲೂಕು ಮಟ್ಟದ ಟಾಸ್ಕ್‌ಫೋರ್ಸ್ ಸಭೆಗಳನ್ನು ನಿಯಮಿತವಾಗಿ ನಡೆಸಿ ಎಲ್ಲ ಇಲಾಖೆಗಳ ಸಮನ್ವಯದೊಂದಿಗೆ ಅಕ್ರಮ ಚಟುವಟಿಕೆಗಳನ್ನು ನಿಯಂತ್ರಿಸುವಂತೆ ಸುತ್ತೋಲೆಯಲ್ಲಿ ಸೂಚಿಸಲಾಗಿದೆ.

ಯಾವುದೇ ಪೊಲೀಸ್ ಘಟಕವು ತನ್ನ ವ್ಯಾಪ್ತಿಯಲ್ಲಿ ಅಕ್ರಮ ಮರಳು ಗಣಿಗಾರಿಕೆ ಹಾಗೂ ಸಾಗಾಣಿಕೆ ತಡೆಯುವಲ್ಲಿ ವಿಫಲವಾದರೆ ಸಂಬಂಧಿತ ಅಧಿಕಾರಿಗಳ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳಲಾಗುವುದು ಎಂದು ಸುತ್ತೋಲೆಯಲ್ಲಿ ಎಚ್ಚರಿಕೆ ನೀಡಲಾಗಿದೆ.

Related Articles

Leave a Reply

Your email address will not be published. Required fields are marked *

Back to top button