ರಾಜಕೀಯ

“2028ರಲ್ಲಿ ಪ್ರಿಯಾಂಕ್ ಖರ್ಗೆ ಮುಖ್ಯಮಂತ್ರಿ ಆಗಲಿದ್ದಾರೆ” : ತಿಪ್ಪಣ್ಣಪ್ಪ ಕಮಕನೂರು

ಕಲಬುರಗಿಯಲ್ಲಿ ಸಚಿವ ಪ್ರಿಯಾಂಕ್ ಖರ್ಗೆಗೆ ಕಾಂಗ್ರೆಸ್ ವತಿಯಿಂದ ಭವ್ಯ ಸ್ವಾಗತ; ನಾಯಕರ ಮೆಚ್ಚುಗೆ, ಅಭಿವೃದ್ಧಿ ಕುರಿತು ನಿರೀಕ್ಷೆ

ಗೃಹ, ಇ-ಆಡಳಿತ ಹಾಗೂ ಕಲಬುರಗಿ-ಯಾದಗಿರಿ ಜಿಲ್ಲಾ ಉಸ್ತುವಾರಿ ಸಚಿವರಾಗಿ ಮೊದಲ ಬಾರಿಗೆ ಕಲಬುರಗಿ ನಗರಕ್ಕೆ ಆಗಮಿಸಿದ ಸಚಿವ ಪ್ರಿಯಾಂಕ್ ಖರ್ಗೆ ಅವರಿಗೆ ಜಿಲ್ಲಾ ಕಾಂಗ್ರೆಸ್ ಸಮಿತಿಯ ವತಿಯಿಂದ ಭವ್ಯ ಸ್ವಾಗತ ಹಾಗೂ ಅಭಿನಂದನಾ ಸಮಾರಂಭ ಏರ್ಪಡಿಸಲಾಯಿತು.

ಈ ಸಂದರ್ಭದಲ್ಲಿ ಮಾತನಾಡಿದ ವಿಧಾನ ಪರಿಷತ್ ಸದಸ್ಯ ತಿಪ್ಪಣ್ಣಪ್ಪ ಕಮಕನೂರು, ರಾಜ್ಯ ಸರ್ಕಾರದಲ್ಲಿ ಪ್ರಿಯಾಂಕ್ ಖರ್ಗೆ ಅವರಿಗೆ ಪ್ರಮುಖ ಜವಾಬ್ದಾರಿಗಳು ದೊರೆತಿರುವುದು ಅವರ ಸಾಮರ್ಥ್ಯಕ್ಕೆ ಸಾಕ್ಷಿಯಾಗಿದೆ. ಅವರಿಗೆ ದೊರೆತಿರುವ ಅದ್ದೂರಿ ಸ್ವಾಗತವೂ ಅವರ ಜನಪ್ರಿಯತೆಯನ್ನು ಪ್ರತಿಬಿಂಬಿಸುತ್ತದೆ ಎಂದು ಹೇಳಿದರು.

ಗುಲ್ಬರ್ಗಾದಲ್ಲಿ ನಿಜಶರಣ ಅಂಬಿಗರ ಚೌಡಯ್ಯ ಅವರ ಪ್ರತಿಮೆ ಸ್ಥಾಪನೆಗೆ ಸಚಿವರು ₹17 ಲಕ್ಷ ಅನುದಾನ ಬಿಡುಗಡೆ ಮಾಡಿದ್ದು, ಪ್ರತಿಮೆ ಉದ್ಘಾಟನೆಗೆ ಲಕ್ಷಾಂತರ ಜನರನ್ನು ಸೇರಿಸುವ ಉದ್ದೇಶವಿದೆ ಎಂದು ತಿಳಿಸಿದರು. ಇದೇ ಮಾದರಿಯಲ್ಲಿ ಬೆಂಗಳೂರಿನ ವಿಧಾನಸೌಧದ ಮುಂಭಾಗದಲ್ಲಿಯೂ ಅಂಬಿಗರ ಚೌಡಯ್ಯ ಅವರ ಪ್ರತಿಮೆ ಸ್ಥಾಪಿಸಬೇಕು ಎಂದು ಆಗ್ರಹಿಸಿದರು.

ಪ್ರಿಯಾಂಕ್ ಖರ್ಗೆ ಅವರು ಜನಪ್ರಿಯ ಸಚಿವರಾಗಿದ್ದು, 2028ರ ವಿಧಾನಸಭೆ ಚುನಾವಣೆಯ ಬಳಿಕ ಮುಖ್ಯಮಂತ್ರಿಯಾಗುವ ಎಲ್ಲ ಅರ್ಹತೆಗಳನ್ನು ಹೊಂದಿದ್ದಾರೆ ಎಂದು ಕಮಕನೂರು ಅಭಿಪ್ರಾಯಪಟ್ಟರು. ಕೋಲಿ, ಕಬ್ಬಲಿಗ ಹಾಗೂ ಸಮಾನ ಸಮುದಾಯಗಳನ್ನು ಪರಿಶಿಷ್ಟ ಪಂಗಡಕ್ಕೆ ಸೇರ್ಪಡೆಗೊಳಿಸುವ ಬೇಡಿಕೆಯನ್ನು ಈಡೇರಿಸುವ ಇಚ್ಛಾಶಕ್ತಿ ಅವರಲ್ಲಿದೆ ಎಂದು ಹೇಳಿದರು.

ಇದಕ್ಕೂ ಮುನ್ನ ಗಂಜ್ ಪ್ರದೇಶದ ನಗರೇಶ್ವರ ಶಾಲೆ ಸಮೀಪ ಅಪಾರ ಸಂಖ್ಯೆಯ ಕಾಂಗ್ರೆಸ್ ಕಾರ್ಯಕರ್ತರು, ಮುಖಂಡರು ಹಾಗೂ ಅಭಿಮಾನಿಗಳು ಸಚಿವ ಪ್ರಿಯಾಂಕ್ ಖರ್ಗೆ ಅವರಿಗೆ ಅದ್ದೂರಿ ಸ್ವಾಗತ ಕೋರಿದರು. ಬಳಿಕ ಭವ್ಯ ಮೆರವಣಿಗೆಯ ಮೂಲಕ ಅವರನ್ನು ಜಿಲ್ಲಾ ಕಾಂಗ್ರೆಸ್ ಕಚೇರಿಗೆ ಕರೆತರಲಾಯಿತು.

ಶಾಸಕರಾದ ಎಂ.ವೈ. ಪಾಟೀಲ್ ಹಾಗೂ ಅಲ್ಲಮಪ್ರಭು ಪಾಟೀಲ್ ಮಾತನಾಡಿ, ಪ್ರಿಯಾಂಕ್ ಖರ್ಗೆ ಅವರ ಸಾಮರ್ಥ್ಯವನ್ನು ಗುರುತಿಸಿ ಮುಖ್ಯಮಂತ್ರಿ ಪ್ರಮುಖ ಖಾತೆಗಳನ್ನು ನೀಡಿದ್ದಾರೆ. ಮುಖ್ಯಮಂತ್ರಿ ಹೊರತುಪಡಿಸಿ ಇ-ಆಡಳಿತ ಖಾತೆಯನ್ನು ಮತ್ತೊಬ್ಬ ಸಚಿವರಿಗೆ ನೀಡಿರುವುದು ಇದೇ ಮೊದಲ ಬಾರಿ. ಮಾಹಿತಿ ತಂತ್ರಜ್ಞಾನ ಕ್ಷೇತ್ರದ ಗಣ್ಯರೂ ಅವರ ಸಾಮರ್ಥ್ಯವನ್ನು ಮೆಚ್ಚಿದ್ದು, ಅವರು ಇನ್ನೂ ಉನ್ನತ ಜವಾಬ್ದಾರಿಗಳನ್ನು ನಿರ್ವಹಿಸುವ ಸಾಮರ್ಥ್ಯ ಹೊಂದಿದ್ದಾರೆ ಎಂದು ಹೇಳಿದರು.

ಜಿಲ್ಲೆಯಲ್ಲಿ ಮಳೆ ಕೊರತೆಯಿಂದ ಬರ ಪರಿಸ್ಥಿತಿ ನಿರ್ಮಾಣವಾಗಿದ್ದು, ಕುಡಿಯುವ ನೀರಿನ ಸಮಸ್ಯೆ ತಲೆದೋರಿದೆ. ಮುಖ್ಯಮಂತ್ರಿ ಭೇಟಿ ವೇಳೆ ಜಿಲ್ಲೆಗೆ ಅಗತ್ಯ ನೆರವು ದೊರಕುವಂತೆ ಸಚಿವ ಪ್ರಿಯಾಂಕ್ ಖರ್ಗೆ ಪ್ರಯತ್ನಿಸಬೇಕು ಎಂದು ಅವರು ಮನವಿ ಮಾಡಿದರು.

ಕಾರ್ಯಕ್ರಮದಲ್ಲಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹಾಗೂ ಶಾಸಕ ಜಗದೇವ ಗುತ್ತೇದಾರ, ಶಾಸಕರಾದ ಬಿ.ಆರ್. ಪಾಟೀಲ್, ಎಂ.ವೈ. ಪಾಟೀಲ್, ಅಲ್ಲಮಪ್ರಭು ಪಾಟೀಲ್, ಮಹಾನಗರ ಪಾಲಿಕೆ ಮೇಯರ್ ವರ್ಷಾ ಜಾನೆ, ಮಾಜಿ ಸಚಿವ ಬಾಬುರಾವ್ ಚಿಂಚನಸೂರು, ಮಹೆಬೂಬ್ ಸಾಹೇಬ್ ಚಿಶ್ತಿ, ಮಹಜರ್ ಆಲಂಖಾನ್, ಪ್ರವೀಣ್ ಪಾಟೀಲ್ ಹರವಾಳ, ಶಿವಾನಂದ ಪಾಟೀಲ್, ಆರ್.ಕೆ. ಪಾಟೀಲ್, ನೀಲಕಂಠರಾವ್ ಮೂಲಗೆ, ಸುಭಾಷ್ ರಾಠೋಡ್, ಶರಣಪ್ಪ ಮಟ್ಟೂರು, ಶ್ರೀನಿವಾಸ್ ಸಗರ, ರಾಜಗೋಪಾಲ ಮುದಿರೆಡ್ಡಿ, ಸೋಮಶೇಖರ್ ಗೋನಾಯಕ್, ಡಾ. ಕಿರಣ್ ಪಾಟೀಲ್, ಶರಣು ಪಪ್ಪಾ ಸೇರಿದಂತೆ ಹಲವಾರು ಮುಖಂಡರು ಉಪಸ್ಥಿತರಿದ್ದರು.

Related Articles

Leave a Reply

Your email address will not be published. Required fields are marked *

Back to top button