ಸಿಎಂ ಡಿಕೆ ಶಿವಕುಮಾರ್ ಟೆಂಪಲ್ ರನ್: ದರ್ಗಾದಲ್ಲಿ ಪ್ರಾರ್ಥನೆ, ಬಳಿಕ ವಿಭಾಗೀಯ ಪ್ರಗತಿ ಪರಿಶೀಲನಾ ಸಭೆ

ಕಲಬುರಗಿ: ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಮಂಗಳವಾರ ಕಲಬುರಗಿಯಲ್ಲಿ ಧಾರ್ಮಿಕ ಕ್ಷೇತ್ರಗಳಿಗೆ ಭೇಟಿ ನೀಡುವ ಮೂಲಕ ತಮ್ಮ ಪ್ರವಾಸವನ್ನು ಮುಂದುವರಿಸಿದರು. ಶ್ರೀ ಶರಣಬಸವೇಶ್ವರ ದೇವರ ದರ್ಶನ ಪಡೆದ ಬಳಿಕ ನಗರದ ಪ್ರಸಿದ್ಧ ಸೂಫೀ ಸಂತ ಖ್ವಾಜಾ ಬಂದೇ ನವಾಜ್ ದರ್ಗಾಕ್ಕೆ ಭೇಟಿ ನೀಡಿ ವಿಶೇಷ ಪ್ರಾರ್ಥನೆ ಸಲ್ಲಿಸಿದರು.
ದರ್ಗಾಕ್ಕೆ ಆಗಮಿಸಿದ ಮುಖ್ಯಮಂತ್ರಿ ಅವರನ್ನು ದರ್ಗಾ ಸಮಿತಿಯ ಪದಾಧಿಕಾರಿಗಳು ಆತ್ಮೀಯವಾಗಿ ಬರಮಾಡಿಕೊಂಡು ಸತ್ಕರಿಸಿದರು. ಈ ಸಂದರ್ಭದಲ್ಲಿ ಉಪ ಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ, ಗೃಹ ಸಚಿವ ಪ್ರಿಯಾಂಕ್ ಖರ್ಗೆ, ಸಚಿವರು, ಶಾಸಕರು ಹಾಗೂ ಪಕ್ಷದ ಮುಖಂಡರು ಸಾಥ್ ನೀಡಿದರು.
ಬಳಿಕ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಗುಲ್ಬರ್ಗಾ ವಿಶ್ವವಿದ್ಯಾಲಯ ಆವರಣದ ಡಾ. ಬಿ.ಆರ್. ಅಂಬೇಡ್ಕರ್ ಭವನದಲ್ಲಿ ಕಲಬುರಗಿ ಪ್ರಾದೇಶಿಕ ವಿಭಾಗ ಮಟ್ಟದ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿದರು.
ಸಭೆಯಲ್ಲಿ ಕಲಬುರಗಿ ವಿಭಾಗದ ವಿವಿಧ ಜಿಲ್ಲೆಗಳ ಅಭಿವೃದ್ಧಿ ಕಾಮಗಾರಿಗಳು, ಸರ್ಕಾರದ ಪ್ರಮುಖ ಯೋಜನೆಗಳ ಅನುಷ್ಠಾನ, ಇಲಾಖೆಗಳ ಕಾರ್ಯಕ್ಷಮತೆ ಹಾಗೂ ಬಾಕಿ ಇರುವ ಯೋಜನೆಗಳ ಕುರಿತು ಅಧಿಕಾರಿಗಳಿಂದ ಮಾಹಿತಿ ಪಡೆದು ಪರಿಶೀಲನೆ ನಡೆಸಲಾಯಿತು.
ಸಭೆಯಲ್ಲಿ ಗೃಹ ಸಚಿವ ಪ್ರಿಯಾಂಕ್ ಖರ್ಗೆ, ವೈದ್ಯಕೀಯ ಶಿಕ್ಷಣ ಸಚಿವ ಡಾ. ಶರಣಪ್ರಕಾಶ್ ಪಾಟೀಲ್, ಸಚಿವ ಕೆ.ಎಚ್. ಮುನಿಯಪ್ಪ, ಕೆಕೆಆರ್‌ಡಿಬಿ ಅಧ್ಯಕ್ಷ ಡಾ. ಅಜಯ್ ಸಿಂಗ್ ಸೇರಿದಂತೆ ಶಾಸಕರು, ವಿಧಾನ ಪರಿಷತ್ ಸದಸ್ಯರು ಹಾಗೂ ವಿವಿಧ ಇಲಾಖೆಗಳ ಹಿರಿಯ ಅಧಿಕಾರಿಗಳು ಭಾಗವಹಿಸಿದರು.
ಮುಖ್ಯಮಂತ್ರಿಗಳ ಭೇಟಿ ಹಿನ್ನೆಲೆಯಲ್ಲಿ ಗುಲ್ಬರ್ಗಾ ವಿಶ್ವವಿದ್ಯಾಲಯ ಆವರಣದಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ಕಲ್ಪಿಸಲಾಗಿತ್ತು. ಪ್ರಗತಿ ಪರಿಶೀಲನಾ ಸಭೆಯ ಬಳಿಕ ಮುಖ್ಯಮಂತ್ರಿ ಸುದ್ದಿಗೋಷ್ಠಿ ನಡೆಸುವ ಸಾಧ್ಯತೆ ಇದೆ.



