ರಾಜ್ಯ

ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ಖಂಡಿಸಿ ಪ್ರತಿಭಟನೆ; ಲಾಠಿಚಾರ್ಜ್ ವಿರುದ್ಧ ಆಕ್ರೋಶ

ವಿದ್ಯಾರ್ಥಿಗಳ ಮೇಲಿನ ಪೊಲೀಸ್ ಕ್ರಮವನ್ನು ಖಂಡಿಸಿದ ಪ್ರಜಾಸತ್ತಾತ್ಮಕ ಚಿಂತನಾ ವೇದಿಕೆ; ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಕಲಬುರಗಿ, ಜು.24: ನೀಟ್ (NEET) ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣವನ್ನು ಖಂಡಿಸಿ ಪ್ರತಿಭಟನೆ ನಡೆಸುತ್ತಿದ್ದ ಹೋರಾಟಗಾರರು ಹಾಗೂ ವಿದ್ಯಾರ್ಥಿಗಳ ಮೇಲೆ ನಡೆದ ಪೊಲೀಸ್ ಲಾಠಿಚಾರ್ಜ್ ಅನ್ನು ಖಂಡಿಸಿ ಪ್ರಜಾಸತ್ತಾತ್ಮಕ ಚಿಂತನಾ ವೇದಿಕೆಯ ಕಾರ್ಯಕರ್ತರು ಶುಕ್ರವಾರ ಕಲಬುರಗಿಯಲ್ಲಿ ಪ್ರತಿಭಟನೆ ನಡೆಸಿದರು.

ನಗರದ ಸದಾರವಲ್ಲಭಭಾಯಿ ಪಟೇಲ್ ವೃತ್ತದಿಂದ ಜಿಲ್ಲಾಧಿಕಾರಿ ಕಚೇರಿವರೆಗೆ ಪ್ರತಿಭಟನಾ ಮೆರವಣಿಗೆ ನಡೆಸಿದ ಕಾರ್ಯಕರ್ತರು, ನಂತರ ರಾಷ್ಟ್ರಪತಿಗಳಿಗೆ ಉದ್ದೇಶಿಸಿದ ಮನವಿಯನ್ನು ಜಿಲ್ಲಾಧಿಕಾರಿಗಳ ಮೂಲಕ ಸಲ್ಲಿಸಿದರು.

ಪ್ರತಿಭಟನಾಕಾರರು, ವಿದ್ಯಾರ್ಥಿಗಳು ತಮ್ಮ ನ್ಯಾಯಸಮ್ಮತ ಬೇಡಿಕೆಗಳನ್ನು ಮುಂದಿಟ್ಟುಕೊಂಡು ಶಾಂತಿಯುತವಾಗಿ ಪ್ರತಿಭಟನೆ ನಡೆಸುತ್ತಿದ್ದ ವೇಳೆ ಅವರ ಮೇಲೆ ಪೊಲೀಸ್ ಲಾಠಿಚಾರ್ಜ್ ನಡೆಸಿರುವುದು ಖಂಡನೀಯ ಎಂದು ಆರೋಪಿಸಿದರು. ಈ ಘಟನೆಯಲ್ಲಿ ಹಲವಾರು ವಿದ್ಯಾರ್ಥಿಗಳು ಗಾಯಗೊಂಡಿದ್ದು, ವಿದ್ಯಾರ್ಥಿನಿಯರ ಮೇಲೂ ಅನುಚಿತ ವರ್ತನೆ ನಡೆದಿದೆ ಎಂದು ಅವರು ದೂರಿದರು.

ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣದಲ್ಲಿ ಗಂಭೀರ ಅಕ್ರಮಗಳು ನಡೆದಿದ್ದು, ಇದರಿಂದ ಅನೇಕ ವಿದ್ಯಾರ್ಥಿಗಳ ಭವಿಷ್ಯಕ್ಕೆ ಧಕ್ಕೆಯಾಗಿದೆ. ಪ್ರಕರಣದ ಸಂಪೂರ್ಣ ತನಿಖೆ ನಡೆಸಿ ತಪ್ಪಿತಸ್ಥರನ್ನು ಬಂಧಿಸಿ ಕಠಿಣ ಶಿಕ್ಷೆಗೆ ಒಳಪಡಿಸಬೇಕು ಎಂದು ಆಗ್ರಹಿಸಿದರು.

ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್‌ಟಿಎ) ಕಾರ್ಯವೈಖರಿಯನ್ನು ಪ್ರಶ್ನಿಸಿದ ಪ್ರತಿಭಟನಾಕಾರರು, ಶಿಕ್ಷಣ ವ್ಯವಸ್ಥೆಯಲ್ಲಿ ಪಾರದರ್ಶಕತೆ ಹಾಗೂ ವಿಶ್ವಾಸವನ್ನು ಪುನಃಸ್ಥಾಪಿಸಲು ಕೇಂದ್ರ ಸರ್ಕಾರ ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು. ವಿದ್ಯಾರ್ಥಿಗಳ ನ್ಯಾಯಯುತ ಬೇಡಿಕೆಗಳನ್ನು ಕಡೆಗಣಿಸುವ ಬದಲು ಅವರೊಂದಿಗೆ ಸಂವಾದ ನಡೆಸಬೇಕಿತ್ತು ಎಂದು ಅಭಿಪ್ರಾಯಪಟ್ಟರು.

ವಿದ್ಯಾರ್ಥಿಗಳ ಮೇಲಿನ ಲಾಠಿಚಾರ್ಜ್‌ಗೆ ಕಾರಣರಾದ ಪೊಲೀಸ್ ಅಧಿಕಾರಿಗಳು ಹಾಗೂ ಸಂಬಂಧಪಟ್ಟವರ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕು. ಸೋರಿಕೆ ಪ್ರಕರಣದ ಎಲ್ಲಾ ಅಕ್ರಮಗಳನ್ನು ಬಯಲಿಗೆಳೆದು ಹೊಣೆಗಾರರ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ ಜರುಗಿಸಬೇಕು ಎಂದು ಮನವಿಯಲ್ಲಿ ಒತ್ತಾಯಿಸಲಾಯಿತು.

ಪ್ರತಿಭಟನೆಯಲ್ಲಿ ಆರ್.ಕೆ. ಹುಡಗಿ, ಆರ್.ಜಿ. ಶೆಟಗಾರ, ಮೀನಾಕ್ಷಿ ಬಾಳಿ, ಕೆ. ನೀಲಾ, ಮಹೇಶ್ ಎಚ್.ಬಿ., ಎಸ್.ಎಂ. ಶರ್ಮಾ, ಶಿವಶರಣಪ್ಪ ಮೂಳೆಗಾಂವ್ ಸೇರಿದಂತೆ ಹಲವು ಮುಖಂಡರು ಹಾಗೂ ಕಾರ್ಯಕರ್ತರು ಭಾಗವಹಿಸಿದ್ದರು.

Related Articles

Leave a Reply

Your email address will not be published. Required fields are marked *

Back to top button