ಶಿಕ್ಷಕರ ಅರ್ಹತಾ ಪರೀಕ್ಷೆ ಕಡ್ಡಾಯ ವಿಚಾರ: ಸೇವಾನಿರತ ಶಿಕ್ಷಕರ ಹಕ್ಕು ರಕ್ಷಣೆಗೆ ಸಂಸದರಿಗೆ ಮನವಿ
ಸೇವಾನಿರತ ಶಿಕ್ಷಕರ ಉದ್ಯೋಗ ಭದ್ರತೆ ಹಾಗೂ ಹಕ್ಕುಗಳನ್ನು ಕಾಪಾಡಲು ಕೇಂದ್ರ ಸರ್ಕಾರ ಮಧ್ಯಪ್ರವೇಶಿಸಬೇಕೆಂದು ಶಿಕ್ಷಕರ ಸಂಘದ ಒತ್ತಾಯ

ಬೀದರ್, ಜು.11: ಸೇವಾನಿರತ ಶಿಕ್ಷಕರ ಹಕ್ಕು ಹಾಗೂ ಉದ್ಯೋಗ ಭದ್ರತೆಯನ್ನು ಕಾಪಾಡುವ ನಿಟ್ಟಿನಲ್ಲಿ ಕೇಂದ್ರ ಸರ್ಕಾರ ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ಕರ್ನಾಟಕ ರಾಜ್ಯ ಸರ್ಕಾರಿ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಜಿಲ್ಲಾ ಅಧ್ಯಕ್ಷ ರವೀಂದ್ರ ರೆಡ್ಡಿ ಆಗ್ರಹಿಸಿದರು.
ಶಿಕ್ಷಕರ ಸಂಘದ ಜಿಲ್ಲಾ ಘಟಕದ ಪದಾಧಿಕಾರಿಗಳೊಂದಿಗೆ ಶನಿವಾರ ಸಂಸದ ಸಾಗರ್ ಖಂಡ್ರೆ ಅವರಿಗೆ ಮನವಿ ಪತ್ರ ಸಲ್ಲಿಸಿ ಮಾತನಾಡಿದ ಅವರು, ಸೇವಾನಿರತ ಶಿಕ್ಷಕರಿಗೆ ಶಿಕ್ಷಕರ ಅರ್ಹತಾ ಪರೀಕ್ಷೆ (ಟಿಇಟಿ) ಕಡ್ಡಾಯಗೊಳಿಸಿರುವುದರಿಂದ ಗೊಂದಲದ ಪರಿಸ್ಥಿತಿ ನಿರ್ಮಾಣವಾಗಿದೆ ಎಂದು ಹೇಳಿದರು.
ಶಿಕ್ಷಣ ಹಕ್ಕು ಕಾಯ್ದೆ (ಆರ್ಟಿಇ) ಹಾಗೂ ಶಿಕ್ಷಕರ ಅರ್ಹತಾ ಪರೀಕ್ಷೆ (ಟಿಇಟಿ) ಜಾರಿಯಾಗುವ ಮುನ್ನವೇ ಕಾನೂನುಬದ್ಧವಾಗಿ ನೇಮಕಗೊಂಡಿರುವ ಶಿಕ್ಷಕರಿಗೆ ನಂತರದ ಅರ್ಹತಾ ನಿಯಮಗಳಿಂದ ವಿನಾಯಿತಿ ನೀಡಬೇಕು ಎಂದು ಒತ್ತಾಯಿಸಿದರು.
ಶಿಕ್ಷಕರ ಸೇವಾ ಹಕ್ಕು, ಉದ್ಯೋಗ ಭದ್ರತೆ, ಪಿಂಚಣಿ ಹಾಗೂ ಬಡ್ತಿಗೆ ಯಾವುದೇ ರೀತಿಯ ಧಕ್ಕೆಯಾಗದಂತೆ ಕೇಂದ್ರ ಸರ್ಕಾರ ಸೂಕ್ತ ಕಾನೂನು ಹಾಗೂ ಆಡಳಿತಾತ್ಮಕ ಕ್ರಮ ಕೈಗೊಳ್ಳಬೇಕು ಎಂದು ಮನವಿ ಮಾಡಿದರು.
ಶಿಕ್ಷಕರ ಸಂಘಟನೆಗಳು ಹಾಗೂ ಶಿಕ್ಷಣ ತಜ್ಞರೊಂದಿಗೆ ಸಮಾಲೋಚನೆ ನಡೆಸಿ, ನ್ಯಾಯಸಮ್ಮತ ಹಾಗೂ ಮಾನವೀಯ ನೆಲೆಯಲ್ಲಿ ಸಮಸ್ಯೆಗೆ ಪರಿಹಾರ ಕಂಡುಕೊಳ್ಳುವಂತೆ ಕೇಂದ್ರ ಸರ್ಕಾರಕ್ಕೆ ಶಿಫಾರಸು ಮಾಡಬೇಕು ಎಂದು ಅವರು ಸಂಸದರಲ್ಲಿ ಕೋರಿದರು.
ಮನವಿಗೆ ಸ್ಪಂದಿಸಿದ ಸಂಸದ ಸಾಗರ್ ಖಂಡ್ರೆ, ಶಿಕ್ಷಕರ ಬೇಡಿಕೆಗಳನ್ನು ಗಂಭೀರವಾಗಿ ಪರಿಗಣಿಸಲಾಗುವುದು. ಈ ವಿಷಯವನ್ನು ಸಂಸತ್ತಿನಲ್ಲಿ ಹಾಗೂ ಕೇಂದ್ರ ಸರ್ಕಾರದ ಗಮನಕ್ಕೆ ತಂದು ಸೂಕ್ತ ಕ್ರಮ ಕೈಗೊಳ್ಳಲು ಪ್ರಯತ್ನಿಸುವುದಾಗಿ ಭರವಸೆ ನೀಡಿದರು.
ಈ ಸಂದರ್ಭದಲ್ಲಿ ಸಂಘದ ಜಿಲ್ಲಾ ಘಟಕದ ಉಪಾಧ್ಯಕ್ಷ ಅಲ್ಲಾವುದ್ದೀನ್ ಪಟೇಲ್, ಸವಿತಾ ಬೇಗಂ, ಅಶೋಕ್ ಪಾಟೀಲ್, ಶರಣಪ್ಪ ಬಿರಾದಾರ್, ಲಲಿತಾ, ಸೂರ್ಯಕಾಂತ ಸುಂಟೆ, ವೀರಶೆಟ್ಟಿ ಕೆಂಚಾ ಸೇರಿದಂತೆ ಸಂಘದ ಅನೇಕ ಪದಾಧಿಕಾರಿಗಳು ಮತ್ತು ಶಿಕ್ಷಕರು ಉಪಸ್ಥಿತರಿದ್ದರು.



