ಜಿಲ್ಲಾಸುದ್ದಿ
ಸಾಲದ ಬಾಧೆಗೆ ಯುವ ರೈತ ಆತ್ಮಹತ್ಯೆ; ಕುಟುಂಬಕ್ಕೆ ಸಾಂತ್ವನ ಹೇಳಿದ ಹರ್ಷಾನಂದ ಗುಟ್ಟೇದಾರ್
ಬಾಧಿತ ಕುಟುಂಬಕ್ಕೆ ಸರ್ಕಾರದಿಂದ ಅಗತ್ಯ ಪರಿಹಾರ ಕಲ್ಪಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದ ಬಿಜೆಪಿ ಮುಖಂಡ

ಆಳಂದ, ಜು.11: ಸಾಲದ ಬಾಧೆಯನ್ನು ತಾಳಲಾರದೆ ಆತ್ಮಹತ್ಯೆ ಮಾಡಿಕೊಂಡ ತಾಲೂಕಿನ ಬೆಣ್ಣೆಶಿರೂರು ಗ್ರಾಮದ ಯುವ ರೈತ ಯಲ್ಲಾಲಿಂಗ ಬಂಡಗಾರ ಅವರ ನಿವಾಸಕ್ಕೆ ಬಿಜೆಪಿ ಮುಖಂಡ ಹಾಗೂ ಜಿಲ್ಲಾ ಪಂಚಾಯಿತಿ ಮಾಜಿ ಉಪಾಧ್ಯಕ್ಷ ಹರ್ಷಾನಂದ ಎಸ್. ಗುಟ್ಟೇದಾರ್ ಭೇಟಿ ನೀಡಿ ಕುಟುಂಬಸ್ಥರಿಗೆ ಸಾಂತ್ವನ ಹೇಳಿದರು.
ಈ ಸಂದರ್ಭದಲ್ಲಿ ಮಾತನಾಡಿದ ಅವರು, ಮೃತ ರೈತನ ಕುಟುಂಬಕ್ಕೆ ಧೈರ್ಯ ತುಂಬಿ, ಸರ್ಕಾರದಿಂದ ದೊರೆಯಬೇಕಾದ ಎಲ್ಲಾ ರೀತಿಯ ಪರಿಹಾರ ಹಾಗೂ ನೆರವು ಶೀಘ್ರವಾಗಿ ಸಿಗುವಂತೆ ಕ್ರಮ ಕೈಗೊಳ್ಳಬೇಕೆಂದು ಅಧಿಕಾರಿಗಳಿಗೆ ದೂರವಾಣಿ ಮೂಲಕ ಸೂಚಿಸಿದರು.
ಪರಿಹಾರ ಹಾಗೂ ಸರ್ಕಾರಿ ಸೌಲಭ್ಯಗಳು ವಿಳಂಬವಾಗದಂತೆ ಸಂಬಂಧಿಸಿದ ಅಧಿಕಾರಿಗಳು ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದ ಅವರು, ರೈತನ ಆತ್ಮಕ್ಕೆ ಶಾಂತಿ ದೊರೆಯಲಿ ಹಾಗೂ ದುಃಖದಲ್ಲಿರುವ ಕುಟುಂಬಕ್ಕೆ ಈ ನೋವನ್ನು ಭರಿಸುವ ಶಕ್ತಿ ದೊರೆಯಲಿ ಎಂದು ಪ್ರಾರ್ಥಿಸಿದರು.



