ಜಿಲ್ಲಾಸುದ್ದಿ

ಕಲ್ಯಾಣ ಕರ್ನಾಟಕ ಬರಪೀಡಿತ ಪ್ರದೇಶ ಘೋಷಣೆಗೆ ಆಗ್ರಹಿಸಿ ಕರವೇ ಪ್ರತಿಭಟನೆ

ಕಲಬುರಗಿ, ಸೆ.19: ಕಲ್ಯಾಣ ಕರ್ನಾಟಕದ ಏಳು ಜಿಲ್ಲೆಗಳನ್ನು ಬರಪೀಡಿತ ಪ್ರದೇಶಗಳೆಂದು ಘೋಷಿಸಿ, ರೈತರಿಗೆ ಅಗತ್ಯ ಪರಿಹಾರ ಕಲ್ಪಿಸಬೇಕು ಎಂದು ಆಗ್ರಹಿಸಿ ಕರ್ನಾಟಕ ರಕ್ಷಣಾ ವೇದಿಕೆ ಕಾರ್ಯಕರ್ತರು ಶನಿವಾರ ನಗರದಲ್ಲಿ ಪ್ರತಿಭಟನಾ ಮೆರವಣಿಗೆ ನಡೆಸಿದರು.

ನಗರದ ಕೇಂದ್ರ ಬಸ್ ನಿಲ್ದಾಣದಿಂದ ಜಿಲ್ಲಾಧಿಕಾರಿ ಕಚೇರಿವರೆಗೆ ನಡೆದ ಪ್ರತಿಭಟನಾ ಮೆರವಣಿಗೆಗೆ ಕರವೇ ಉತ್ತರ ಕರ್ನಾಟಕದ ಅಧ್ಯಕ್ಷ ಶರಣು ಬಿ. ಗದ್ದುಗೆ ನೇತೃತ್ವ ವಹಿಸಿದ್ದರು. ಪ್ರತಿಭಟನೆಯಲ್ಲಿ ಅಭಿಷೇಕ್ ಬಾಲಾಜಿ ಸೇರಿದಂತೆ ಕರವೇ ಕಾರ್ಯಕರ್ತರು ಭಾಗವಹಿಸಿದ್ದರು.

ಪ್ರತಿಭಟನಾಕಾರರು ಜಿಲ್ಲಾಧಿಕಾರಿಗಳ ಮೂಲಕ ರಾಜ್ಯದ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರಿಗೆ ಮನವಿ ಸಲ್ಲಿಸಿ, ಬರದಿಂದ ಸಂಕಷ್ಟಕ್ಕೊಳಗಾಗಿರುವ ರೈತರಿಗೆ ಕೂಡಲೇ ಪ್ರತಿ ಎಕರೆಗೆ ₹25 ಸಾವಿರ ಪರಿಹಾರ ನೀಡಬೇಕು ಎಂದು ಒತ್ತಾಯಿಸಿದರು.

ಕಲ್ಯಾಣ ಕರ್ನಾಟಕದ ಏಳು ಜಿಲ್ಲೆಗಳಲ್ಲಿ ಬರ ಪರಿಸ್ಥಿತಿ ತೀವ್ರವಾಗಿದ್ದು, ರೈತರು ಬೆಳೆ ನಷ್ಟದಿಂದ ಸಂಕಷ್ಟಕ್ಕೆ ಸಿಲುಕಿದ್ದಾರೆ. ಹೀಗಾಗಿ ಸರ್ಕಾರ ತಕ್ಷಣ ಬರಪೀಡಿತ ಪ್ರದೇಶವೆಂದು ಘೋಷಿಸಿ ಪರಿಹಾರ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಆಗ್ರಹಿಸಿದರು.

ಇದೇ ವೇಳೆ ಜಿಲ್ಲೆಯ ಮಲ್ಲಾಬಾದ್ ಏತ ನೀರಾವರಿ ಯೋಜನೆಯ ಕಾಮಗಾರಿಯನ್ನು ಶೀಘ್ರ ಪೂರ್ಣಗೊಳಿಸಬೇಕು. ಸೂಕ್ಷೇತ್ರ ಗಾಣಗಾಪುರದ ಶ್ರೀ ದತ್ತಾತ್ರೇಯ ದೇವಾಲಯ ಹಾಗೂ ಸೂಕ್ಷೇತ್ರ ಘತ್ತರಗಾದ ಶ್ರೀ ಭಾಗ್ಯವಂತಿ ದೇವಾಲಯವನ್ನು ಅಭಿವೃದ್ಧಿಪಡಿಸಬೇಕು ಎಂದು ಮನವಿ ಮಾಡಿದರು.

ಕಲ್ಯಾಣ ಕರ್ನಾಟಕದ ಅಭಿವೃದ್ಧಿಗೆ ಸಂವಿಧಾನದ 371(ಜೆ) ವಿಧಿಯಡಿ ಪ್ರತ್ಯೇಕ ಸಚಿವಾಲಯವನ್ನು ಅಧಿಕೃತವಾಗಿ ಸ್ಥಾಪಿಸಬೇಕು. ರಾಜ್ಯ ಸರ್ಕಾರ ಪ್ರತಿ ಜಿಲ್ಲೆ ಹಾಗೂ ತಾಲ್ಲೂಕಿನಲ್ಲಿ ನಿರ್ಮಿಸುತ್ತಿರುವ ಪ್ರಜಾ ಸೌಧಗಳಲ್ಲಿ ನಾಡದೇವತೆ ಶ್ರೀ ಭುವನೇಶ್ವರಿ ಮೂರ್ತಿ ಪ್ರತಿಷ್ಠಾಪಿಸಬೇಕು ಎಂದು ಪ್ರತಿಭಟನಾಕಾರರು ಒತ್ತಾಯಿಸಿದರು.

Related Articles

Leave a Reply

Your email address will not be published. Required fields are marked *

Back to top button