ಜಿಲ್ಲಾಸುದ್ದಿಶಿಕ್ಷಣ

ಆಳಂದದಲ್ಲಿ ₹13.26 ಕೋಟಿ ವೆಚ್ಚದ ಎರಡು ಕಾಲೇಜು ಕಟ್ಟಡಗಳ ಉದ್ಘಾಟನೆ

ಉನ್ನತ ಶಿಕ್ಷಣಕ್ಕೆ ಆದ್ಯತೆ: ಖಾಲಿ ಇರುವ 2,000 ಬೋಧಕ ಹುದ್ದೆ, 320 ಪ್ರಾಂಶುಪಾಲರ ಹುದ್ದೆ ಶೀಘ್ರ ಭರ್ತಿ – ಸಚಿವ ಬಸವರಾಜ ರಾಯರೆಡ್ಡಿ

ಕಲಬುರಗಿ, ನ. 7: ಆಳಂದ ತಾಲೂಕಿನಲ್ಲಿ ಉನ್ನತ ಶಿಕ್ಷಣ ಮತ್ತು ತಾಂತ್ರಿಕ ಶಿಕ್ಷಣಕ್ಕೆ ಉತ್ತೇಜನ ನೀಡುವ ಉದ್ದೇಶದಿಂದ ಒಟ್ಟು ₹13.26 ಕೋಟಿ ವೆಚ್ಚದಲ್ಲಿ ನಿರ್ಮಿಸಲಾಗಿರುವ ಸರ್ಕಾರಿ ಪಾಲಿಟೆಕ್ನಿಕ್ ಕಾಲೇಜು ಹಾಗೂ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ನೂತನ ಕಟ್ಟಡಗಳನ್ನು ಉನ್ನತ ಶಿಕ್ಷಣ ಸಚಿವ ಬಸವರಾಜ ರಾಯರೆಡ್ಡಿ ಅವರು ಉದ್ಘಾಟಿಸಿದರು.

ಆಳಂದ ಕಾಲೇಜು ಆವರಣದಲ್ಲಿ 2017-18ನೇ ಸಾಲಿನ ತಾಂತ್ರಿಕ ಶಿಕ್ಷಣ ಯೋಜನೆಯಡಿ ₹8 ಕೋಟಿ ವೆಚ್ಚದಲ್ಲಿ ನಿರ್ಮಿಸಲಾದ ಸರ್ಕಾರಿ ಪಾಲಿಟೆಕ್ನಿಕ್ ಕಾಲೇಜಿನ ಕಟ್ಟಡ ಹಾಗೂ ಕಾಲೇಜು ಶಿಕ್ಷಣ ಇಲಾಖೆಯ 2023-24ನೇ ಸಾಲಿನ ಕೆಕೆಆರ್‌ಡಿಬಿ ಮ್ಯಾಕ್ರೋ ಮತ್ತು ಮೈಕ್ರೋ ಯೋಜನೆಯಡಿ ₹5.26 ಕೋಟಿ ವೆಚ್ಚದಲ್ಲಿ ನಿರ್ಮಿಸಲಾದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ನೂತನ ಕಟ್ಟಡಗಳನ್ನು ರಿಬ್ಬನ್ ಕತ್ತರಿಸುವ ಮೂಲಕ ಲೋಕಾರ್ಪಣೆ ಮಾಡಿದರು.

ಈ ಸಂದರ್ಭದಲ್ಲಿ ಮಾತನಾಡಿದ ಸಚಿವ ಬಸವರಾಜ ರಾಯರೆಡ್ಡಿ, ರಾಜ್ಯದ ಒಟ್ಟು ₹4.48 ಲಕ್ಷ ಕೋಟಿ ಬಜೆಟ್‌ನಲ್ಲಿ ಶಿಕ್ಷಣ ಕ್ಷೇತ್ರಕ್ಕೆ ₹55 ಸಾವಿರ ಕೋಟಿ ಅನುದಾನ ಮೀಸಲಿಡಲಾಗಿದೆ. ಇದು ಒಟ್ಟು ಬಜೆಟ್‌ನ ಶೇ.11.6ರಷ್ಟಿದ್ದು, ಗುಣಮಟ್ಟದ ಶಿಕ್ಷಣ ಒದಗಿಸಲು ಸರ್ಕಾರ ಬದ್ಧವಾಗಿದೆ ಎಂದರು.

ರಾಜ್ಯದ ವಿವಿಧ ಕಾಲೇಜುಗಳಲ್ಲಿ ಖಾಲಿ ಇರುವ 1,000 ಬೋಧಕ ಹುದ್ದೆಗಳು, ವಿಶ್ವವಿದ್ಯಾಲಯಗಳಲ್ಲಿ 1,000 ಪ್ರಾಧ್ಯಾಪಕ ಹಾಗೂ ಉಪನ್ಯಾಸಕ ಹುದ್ದೆಗಳು ಮತ್ತು 320 ಪ್ರಾಂಶುಪಾಲರ ಹುದ್ದೆಗಳನ್ನು ಶೀಘ್ರದಲ್ಲೇ ಮೆರಿಟ್ ಆಧಾರದ ಮೇಲೆ ಭರ್ತಿ ಮಾಡಲಾಗುವುದು. ಪಾಲಿಟೆಕ್ನಿಕ್ ಕಾಲೇಜುಗಳಿಗೂ ಅಗತ್ಯ ಸಿಬ್ಬಂದಿ ನೇಮಕ ಮಾಡಿಕೊಳ್ಳಲಾಗುವುದು. ಯಾವುದೇ ಭ್ರಷ್ಟಾಚಾರಕ್ಕೆ ಅವಕಾಶ ನೀಡದೆ ಪಾರದರ್ಶಕವಾಗಿ ನೇಮಕಾತಿ ಪ್ರಕ್ರಿಯೆ ನಡೆಸಲಾಗುವುದು ಎಂದು ಭರವಸೆ ನೀಡಿದರು.

ಕಲ್ಯಾಣ ಕರ್ನಾಟಕದ ಅಭಿವೃದ್ಧಿಗೆ ಸರ್ಕಾರ ವಿಶೇಷ ಆದ್ಯತೆ ನೀಡುತ್ತಿದೆ. ಕಲ್ಯಾಣ ಕರ್ನಾಟಕ ಪ್ರದೇಶಾಭಿವೃದ್ಧಿ ಮಂಡಳಿಗೆ ಪ್ರತಿವರ್ಷ ₹5,000 ಕೋಟಿ ಅನುದಾನ ನೀಡಲಾಗುತ್ತಿದೆ. ಸಂವಿಧಾನದ 371(ಜೆ) ವಿಧಿಯ ಅನುಷ್ಠಾನದಿಂದ ಈ ಭಾಗದ ಯುವಕರಿಗೆ ಶಿಕ್ಷಣ ಮತ್ತು ಉದ್ಯೋಗದಲ್ಲಿ ಹೆಚ್ಚಿನ ಮೀಸಲಾತಿ ದೊರೆಯುತ್ತಿದೆ. ಲೋಕೋಪಯೋಗಿ ಇಲಾಖೆಯ ಅನುಬಂಧ ಯೋಜನೆಯಡಿ ₹50 ಕೋಟಿ, ಎಚ್‌ಎಚ್‌ಡಿಪಿ ಅಡಿಯಲ್ಲಿ ₹50 ಕೋಟಿ ಹಾಗೂ ಗ್ರಾಮೀಣಾಭಿವೃದ್ಧಿ ಇಲಾಖೆಯಿಂದ ರಸ್ತೆ ಮತ್ತು ಗ್ರಾಮ ಪಂಚಾಯಿತಿ ಅಭಿವೃದ್ಧಿಗೆ ವಿಶೇಷ ಅನುದಾನ ಒದಗಿಸಲಾಗುತ್ತಿದೆ ಎಂದು ತಿಳಿಸಿದರು.

₹5 ಕೋಟಿ ವೆಚ್ಚದ ವಿದ್ಯಾರ್ಥಿ ವಸತಿ ನಿಲಯಕ್ಕೆ ಶಂಕುಸ್ಥಾಪನೆ

ಇದಕ್ಕೂ ಮುನ್ನ ಜಿಲ್ಲಾಡಳಿತ ಹಾಗೂ ಜಿಲ್ಲಾ ಪಂಚಾಯಿತಿ ಕಲಬುರಗಿ ಸಂಯುಕ್ತ ಆಶ್ರಯದಲ್ಲಿ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಮತ್ತು ಕಲ್ಯಾಣ ಕರ್ನಾಟಕ ಪ್ರದೇಶಾಭಿವೃದ್ಧಿ ಮಂಡಳಿಯ ಸಹಭಾಗಿತ್ವದಲ್ಲಿ ಆಳಂದ ಪಟ್ಟಣದಲ್ಲಿ ₹5 ಕೋಟಿ ವೆಚ್ಚದಲ್ಲಿ ನಿರ್ಮಿಸಲಿರುವ ಮೆಟ್ರಿಕ್ ನಂತರದ ಬಾಲಕರ ವಸತಿ ನಿಲಯಕ್ಕೆ ಸಚಿವರು ಶಂಕುಸ್ಥಾಪನೆ ನೆರವೇರಿಸಿದರು.

ಶಿಕ್ಷಣ ಕ್ಷೇತ್ರದ ಅಭಿವೃದ್ಧಿಗೆ ಆದ್ಯತೆ: ಬಿ.ಆರ್. ಪಾಟೀಲ

ಕರ್ನಾಟಕ ರಾಜ್ಯ ನೀತಿ ಮತ್ತು ಯೋಜನಾ ಆಯೋಗದ ಉಪಾಧ್ಯಕ್ಷ ಬಿ.ಆರ್. ಪಾಟೀಲ ಮಾತನಾಡಿ, ಉನ್ನತ ಶಿಕ್ಷಣ ಸಚಿವ ಬಸವರಾಜ ರಾಯರೆಡ್ಡಿ ಅವರ ನೇತೃತ್ವದಲ್ಲಿ ಆಳಂದ ತಾಲೂಕಿನಲ್ಲಿ ಎರಡು ಕಾಲೇಜುಗಳ ನೂತನ ಕಟ್ಟಡಗಳನ್ನು ಉದ್ಘಾಟಿಸಿರುವುದು ಸಂತಸದ ಸಂಗತಿ. ಹಿಂದೆ ಮಂಜೂರಾಗಿದ್ದ ಕಾಲೇಜುಗಳಿಗೆ ಸೂಕ್ತ ಕಟ್ಟಡಗಳ ಕೊರತೆಯಿತ್ತು. ಈಗ ಅತ್ಯುತ್ತಮ ಸೌಲಭ್ಯಗಳೊಂದಿಗೆ ಹೊಸ ಕಟ್ಟಡಗಳನ್ನು ನಿರ್ಮಿಸಿ ವಿದ್ಯಾರ್ಥಿಗಳ ಬಳಕೆಗೆ ಒದಗಿಸಲಾಗಿದೆ ಎಂದರು.

ಶಿಕ್ಷಣ ಮತ್ತು ಅಭಿವೃದ್ಧಿಗೆ ಒತ್ತು: ಸಾಗರ ಖಂಡ್ರೆ

ಬೀದರ್ ಲೋಕಸಭಾ ಕ್ಷೇತ್ರದ ಸಂಸದ ಸಾಗರ ಈಶ್ವರ ಖಂಡ್ರೆ ಮಾತನಾಡಿ, ಶಿಕ್ಷಣ ಕ್ಷೇತ್ರದಲ್ಲಿ ಇನ್ನಷ್ಟು ಸುಧಾರಣೆಗಳಾಗಬೇಕು. ಕಾಲೇಜುಗಳ ನಿರ್ಮಾಣದ ಜತೆಗೆ ಗುಣಮಟ್ಟದ ಬೋಧಕ ಸಿಬ್ಬಂದಿ ನೇಮಕಾತಿಗೂ ಆದ್ಯತೆ ನೀಡಬೇಕು. ಈಗಾಗಲೇ ಬರಗಾಲ ಘೋಷಣೆಯಾಗಿದ್ದು, ಸಂತ್ರಸ್ತರಿಗೆ ಕೇಂದ್ರ ಮತ್ತು ರಾಜ್ಯ ಸರ್ಕಾರಗಳಿಂದ ಸೂಕ್ತ ಪರಿಹಾರ ಹಾಗೂ ಬೆಳೆ ವಿಮೆ ದೊರೆಯುವಂತೆ ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ತಿಳಿಸಿದರು.

ಬಿ.ಆರ್. ಪಾಟೀಲ ಅಭಿವೃದ್ಧಿ ಕಾರ್ಯಗಳಿಗೆ ಮೆಚ್ಚುಗೆ

ವಿಧಾನ ಪರಿಷತ್ ಸದಸ್ಯ ತಿಪ್ಪಣ್ಣಪ್ಪ ಕಮಕನೂರ ಮಾತನಾಡಿ, ರಾಜ್ಯ ರಾಜಕಾರಣದಲ್ಲಿ ಎಂಟು ಬಾರಿ ಶಾಸಕರಾಗಿ, ಸಂಸದರು ಹಾಗೂ ಸಚಿವರಾಗಿ ಸೇವೆ ಸಲ್ಲಿಸಿರುವ ಬಸವರಾಜ ರಾಯರೆಡ್ಡಿ ಅವರ ಆಡಳಿತಾತ್ಮಕ ಅನುಭವ ಮತ್ತು ಕೊಡುಗೆ ಅಪಾರವಾಗಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನೇತೃತ್ವದ ಬಜೆಟ್‌ಗಳಲ್ಲಿಯೂ ರಾಯರೆಡ್ಡಿ ಅವರ ಪಾತ್ರ ಮಹತ್ವದ್ದಾಗಿದೆ ಎಂದರು.

ಆಳಂದ ಕ್ಷೇತ್ರದ ಶಾಸಕ ಬಿ.ಆರ್. ಪಾಟೀಲ ಅವರು ಕ್ಷೇತ್ರದಲ್ಲಿ ಕೈಗೊಂಡಿರುವ ಅಭಿವೃದ್ಧಿ ಕಾರ್ಯಗಳನ್ನು ಶ್ಲಾಘಿಸಿದ ಅವರು, ಕಲಬುರಗಿ ಜಿಲ್ಲೆಯಲ್ಲಿ ಹೆಚ್ಚಿನ ಶಿಕ್ಷಣ ಸಂಸ್ಥೆಗಳನ್ನು ಸ್ಥಾಪಿಸುವ ಮೂಲಕ ಬಾಬಾಸಾಹೇಬ ಅಂಬೇಡ್ಕರ್ ಅವರ ಶಿಕ್ಷಣದ ಕನಸನ್ನು ನನಸು ಮಾಡಲು ಬಿ.ಆರ್. ಪಾಟೀಲ ಮತ್ತು ಸಚಿವ ಪ್ರಿಯಾಂಕ್ ಖರ್ಗೆ ಶ್ರಮಿಸುತ್ತಿದ್ದಾರೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.

ಕಷ್ಟದ ಸಂದರ್ಭಗಳಲ್ಲಿಯೂ ಸುಮಾರು ₹650 ಕೋಟಿಗೂ ಅಧಿಕ ಅನುದಾನ ತಂದು ಕ್ಷೇತ್ರದ ಅಭಿವೃದ್ಧಿಗೆ ಶ್ರಮಿಸಿರುವ ಬಿ.ಆರ್. ಪಾಟೀಲ ಅವರ ಕಾರ್ಯವೈಖರಿಯನ್ನು ಸ್ಮರಿಸಿದರು.

ಗ್ರಾಮೀಣ ವಿದ್ಯಾರ್ಥಿಗಳಿಗೆ ತಾಂತ್ರಿಕ ಶಿಕ್ಷಣದ ಅವಕಾಶ

ಸರ್ಕಾರಿ ಪಾಲಿಟೆಕ್ನಿಕ್ ಕಾಲೇಜಿನ ಪ್ರಾಂಶುಪಾಲ ಪ್ರಕಾಶ್ ಬುರೆ ಪ್ರಾಸ್ತಾವಿಕವಾಗಿ ಮಾತನಾಡಿ, ಕಾಲೇಜಿನಲ್ಲಿ ಈಗಾಗಲೇ ಸುಮಾರು 240 ವಿದ್ಯಾರ್ಥಿಗಳು ಪ್ರವೇಶ ಪಡೆದಿದ್ದಾರೆ. ಕಡಿಮೆ ವೆಚ್ಚದಲ್ಲಿ ಗುಣಮಟ್ಟದ ತಾಂತ್ರಿಕ ಶಿಕ್ಷಣ ಒದಗಿಸುವ ಮೂಲಕ ಗ್ರಾಮೀಣ ಪ್ರದೇಶದ ಬಡ ವಿದ್ಯಾರ್ಥಿಗಳ ಭವಿಷ್ಯ ರೂಪಿಸಲು ನೂತನ ಕಟ್ಟಡ ಮತ್ತು ಸೌಲಭ್ಯಗಳು ಸಹಕಾರಿಯಾಗಲಿವೆ ಎಂದು ತಿಳಿಸಿದರು.

ಕಾರ್ಯಕ್ರಮದಲ್ಲಿ ಕಾಲೇಜು ಶಿಕ್ಷಣ ಇಲಾಖೆಯ ಜಂಟಿ ನಿರ್ದೇಶಕ ಪಂಡಿತ ಬೆಳಮಗಿ, ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿ ಡಾ. ವಿ. ಅಶೋಕ್, ತಹಶೀಲ್ದಾರ್ ಅಣ್ಣಾರಾವ ಪಾಟೀಲ, ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲೆ ಪ್ರೇಮಿಳಾ ಅಂಬರಾಯ, ಸಿದ್ಧರಾಮ ಪ್ಯಾಟಿ, ಗುರುಶರಣ ಪಾಟೀಲ, ಸೈಯದ್ ಮಜರ್ ಹುಸೇನ್, ಸುಭಾಷ್ ಮುರುಡ, ಸಲಾಂ ಸಗರಿ, ನಾಗೇಂದ್ರಪ್ಪ ತಂಬೆ, ರಾಜಶೇಖರ ಪಾಟೀಲ, ಸುನೀಲಗೌಡ ಪಾಟೀಲ, ಬಸವರಾಜ ಪವಾಡಶೆಟ್ಟಿ, ದಶವಂತ ಸೇರಿದಂತೆ ಕಾಲೇಜಿನ ಬೋಧಕ ಮತ್ತು ಬೋಧಕೇತರ ಸಿಬ್ಬಂದಿ, ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರು ಉಪಸ್ಥಿತರಿದ್ದರು.

Related Articles

Leave a Reply

Your email address will not be published. Required fields are marked *

Back to top button