ಶಿಕ್ಷಣದಲ್ಲಿ ಭಾರತೀಯ ಸಂಸ್ಕೃತಿ ಮತ್ತು ಪರಂಪರೆಯ ಅಳವಡಿಕೆ ಅಗತ್ಯ: ಪ್ರೊ. ಬಸವರಾಜ ಡೋಣೂರ
ಮಕ್ಕಳ ಸರ್ವಾಂಗೀಣ ಬೆಳವಣಿಗೆಗೆ ಸಂಸ್ಕೃತಿ, ಸಂಸ್ಕಾರ ಮತ್ತು ಭಾರತೀಯ ಮೌಲ್ಯಗಳ ಶಿಕ್ಷಣ ಅಗತ್ಯ ಎಂದು ಪ್ರೊ. ಬಸವರಾಜ ಡೋಣೂರ ಅಭಿಪ್ರಾಯ

ಕಲಬುರಗಿ, ಜು.13: ಶಿಕ್ಷಣವು ಕೇವಲ ಪಠ್ಯಪುಸ್ತಕಗಳ ಜ್ಞಾನಕ್ಕೆ ಸೀಮಿತವಾಗದೆ, ಭಾರತೀಯ ಸಂಸ್ಕೃತಿ, ಪರಂಪರೆ ಮತ್ತು ಮೌಲ್ಯಗಳನ್ನು ಒಳಗೊಂಡಿರಬೇಕು ಎಂದು ಭಾರತೀಯ ಶಿಕ್ಷಣ ಮಂಡಳಿಯ ಕರ್ನಾಟಕ ಉತ್ತರ ಪ್ರಾಂತದ ಉಪಾಧ್ಯಕ್ಷ ಪ್ರೊ. ಬಸವರಾಜ ಡೋಣೂರ ಹೇಳಿದರು.
ನಗರದ ಶರಣಬಸವ ವಿಶ್ವವಿದ್ಯಾಲಯದ ಆವರಣದಲ್ಲಿ ಭಾರತೀಯ ಶಿಕ್ಷಣ ಮಂಡಳಿ ಕರ್ನಾಟಕ ಉತ್ತರ ಪ್ರಾಂತದ ಜಿಲ್ಲಾ ಕಾರ್ಯಕಾರಿಣಿ ಪದಗ್ರಹಣ ಸಮಾರಂಭವನ್ನು ಉದ್ಘಾಟಿಸಿ ಅವರು ಮಾತನಾಡಿದರು. ರಾಷ್ಟ್ರದ ಅಭಿವೃದ್ಧಿ ಹಾಗೂ ಮಕ್ಕಳ ಸರ್ವಾಂಗೀಣ ಬೆಳವಣಿಗೆಗೆ ಭಾರತೀಯತೆಯನ್ನು ಆಧರಿಸಿದ ಶಿಕ್ಷಣ ವ್ಯವಸ್ಥೆ ಅಗತ್ಯವಾಗಿದೆ. ಪ್ರತಿಯೊಬ್ಬ ಭಾರತೀಯನು ತನ್ನ ದೇಶದ ಜೀವನ ಮೌಲ್ಯಗಳು, ಸಂಸ್ಕೃತಿ ಮತ್ತು ಪರಂಪರೆಯನ್ನು ಗೌರವಿಸಿ ಮುಂದಿನ ಪೀಳಿಗೆಗೆ ಪರಿಚಯಿಸಬೇಕೆಂದು ಅವರು ತಿಳಿಸಿದರು.
ದೇಶದ ಅಭಿವೃದ್ಧಿಯಲ್ಲಿ ಶಿಕ್ಷಕರು, ಪೋಷಕರು, ಶಿಕ್ಷಣ ಸಂಸ್ಥೆಗಳು ಹಾಗೂ ಸಮಾಜದ ವಿವಿಧ ಸಂಘಟನೆಗಳು ಪರಸ್ಪರ ಸಹಕಾರದಿಂದ ಕಾರ್ಯನಿರ್ವಹಿಸಿದಾಗ ಮಾತ್ರ ವಿದ್ಯಾರ್ಥಿಗಳಲ್ಲಿ ಉತ್ತಮ ವ್ಯಕ್ತಿತ್ವ ನಿರ್ಮಾಣ ಸಾಧ್ಯವಾಗುತ್ತದೆ. ಮಕ್ಕಳ ಶಿಕ್ಷಣದ ಜೊತೆಗೆ ಸಂಸ್ಕಾರಕ್ಕೂ ಸಮಾನ ಆದ್ಯತೆ ನೀಡಬೇಕೆಂದು ಅವರು ಅಭಿಪ್ರಾಯಪಟ್ಟರು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಭಾರತೀಯ ಶಿಕ್ಷಣ ಮಂಡಳಿಯ ಜಿಲ್ಲಾ ಅಧ್ಯಕ್ಷ ಬಸವರಾಜ ದೇಶಮುಖ ಮಾತನಾಡಿ, ಜಿಲ್ಲೆಯ ಶೈಕ್ಷಣಿಕ ಅಭಿವೃದ್ಧಿಗೆ ಎಲ್ಲರೂ ಕೈಜೋಡಿಸಬೇಕು ಎಂದು ಕರೆ ನೀಡಿದರು. ಎಸ್ಎಸ್ಎಲ್ಸಿ ಹಾಗೂ ಪಿಯುಸಿ ವಿದ್ಯಾರ್ಥಿಗಳಲ್ಲಿರುವ ಪರೀಕ್ಷಾ ಭಯವನ್ನು ನಿವಾರಿಸಲು ಮುಂದಿನ ದಿನಗಳಲ್ಲಿ ಆತ್ಮಸ್ಥೈರ್ಯ ತುಂಬುವ ಕಾರ್ಯಕ್ರಮಗಳು ಮತ್ತು ಕಾರ್ಯಾಗಾರಗಳನ್ನು ಆಯೋಜಿಸಲಾಗುವುದು ಎಂದು ತಿಳಿಸಿದರು.
ಭಾರತೀಯ ಶಿಕ್ಷಣ ಮಂಡಳಿಯ ಪ್ರಾಂತ ಸಹ ಕಾರ್ಯದರ್ಶಿ ಡಾ. ಪಲ್ಲವಿ ಪಾಟೀಲ ಸೇಡಂ ಮಾತನಾಡಿ, ಶಿಕ್ಷಕರ ಪಾತ್ರ ರಾಷ್ಟ್ರ ನಿರ್ಮಾಣದಲ್ಲಿ ಅತ್ಯಂತ ಮಹತ್ವದ್ದಾಗಿದೆ. ಶಿಕ್ಷಕರು ಕೇವಲ ಪಾಠ ಬೋಧಿಸುವವರಾಗಿರದೆ, ವಿದ್ಯಾರ್ಥಿಗಳಿಗೆ ಮಾರ್ಗದರ್ಶಕರಾಗಬೇಕು ಎಂದು ಹೇಳಿದರು.
ಮಕ್ಕಳಲ್ಲಿರುವ ಪ್ರತಿಭೆಯನ್ನು ಗುರುತಿಸಿ ಪ್ರೋತ್ಸಾಹಿಸುವುದು ಶಿಕ್ಷಣದ ಪ್ರಮುಖ ಗುರಿಯಾಗಬೇಕು. ಅಂಕಗಳಿಗೆ ಮಾತ್ರ ಹೆಚ್ಚಿನ ಮಹತ್ವ ನೀಡುವ ಪ್ರವೃತ್ತಿಯಿಂದ ಶಿಕ್ಷಣ ವಿದ್ಯಾರ್ಥಿಗಳಿಗೆ ಒತ್ತಡದ ಕಾರಣವಾಗುತ್ತಿದೆ. ಶಿಕ್ಷಣದ ಜೊತೆಗೆ ಕ್ರೀಡೆ, ಕಲೆ, ಸಂಗೀತ ಹಾಗೂ ಸಾಹಿತ್ಯಕ್ಕೂ ಸಮಾನ ಅವಕಾಶ ಕಲ್ಪಿಸಿದರೆ ವಿದ್ಯಾರ್ಥಿಗಳ ದೈಹಿಕ ಮತ್ತು ಮಾನಸಿಕ ಬೆಳವಣಿಗೆ ಸಾಧ್ಯವಾಗುತ್ತದೆ ಎಂದು ಅವರು ಅಭಿಪ್ರಾಯಪಟ್ಟರು.
ಜಿಲ್ಲಾ ಉಪಾಧ್ಯಕ್ಷ ಶಿವಾನಂದ ಖಜೂರಿ ಮಾತನಾಡಿ, ಶಿಕ್ಷಣದಲ್ಲಿ ಭಾರತೀಯತೆಯನ್ನು ಅಳವಡಿಸುವುದು ಎಂದರೆ ಸ್ಥಳೀಯ ಕಲೆ, ಸಂಗೀತ, ಸಾಹಿತ್ಯ, ಜಾನಪದ ಸಂಸ್ಕೃತಿ, ಯೋಗ ಹಾಗೂ ಭಾರತೀಯ ಜೀವನಶೈಲಿಯ ಮೌಲ್ಯಗಳನ್ನು ವಿದ್ಯಾರ್ಥಿಗಳಿಗೆ ಪರಿಚಯಿಸುವುದಾಗಿದೆ ಎಂದು ಹೇಳಿದರು.
ಕಾರ್ಯಕ್ರಮದಲ್ಲಿ ಭಾರತೀಯ ಶಿಕ್ಷಣ ಮಂಡಳಿಯ ಕರ್ನಾಟಕ ಉತ್ತರ ಪ್ರಾಂತದ ವಿವಿಧ ಪದಾಧಿಕಾರಿಗಳು, ಶಿಕ್ಷಣ ತಜ್ಞರು, ಪ್ರಾಧ್ಯಾಪಕರು ಹಾಗೂ ಸದಸ್ಯರು ಉಪಸ್ಥಿತರಿದ್ದರು. ಪ್ರಾಂತ ವಿದ್ಯಾಲಯ ಗತಿವಿಧಿ ಪ್ರಮುಖ ಶರಣು ಉದನೂರು ಕಾರ್ಯಕ್ರಮ ನಿರೂಪಿಸಿದರು. ಡಾ. ಶರಭಯ್ಯ ಸ್ವಾಮಿ ಸ್ವಾಗತಿಸಿ, ಡಾ. ಉದಯ ಪಾಟೀಲ ವಂದಿಸಿದರು.



