ಅಪರಾಧ

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ, ಹೆರಿಗೆ ಪ್ರಕರಣ: ಆರೋಪಿಗೆ 20 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆ

ಪೋಕ್ಸೊ ಪ್ರಕರಣದಲ್ಲಿ ವಿಶೇಷ ನ್ಯಾಯಾಲಯದ ತೀರ್ಪು; ಸಂತ್ರಸ್ತೆಗೆ ₹5 ಲಕ್ಷ ಪರಿಹಾರ ನೀಡಲು ಆದೇಶ

ಕಲಬುರಗಿ, ಜು.14: ಜಿಲ್ಲೆಯ ಜೇವರ್ಗಿ ತಾಲೂಕಿನ ನೆಲೋಗಿ ಪೊಲೀಸ್ ಠಾಣೆ ವ್ಯಾಪ್ತಿಯ ಯಾತನೂರ ಗ್ರಾಮದಲ್ಲಿ ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಎಸಗಿ ಆಕೆ ಗರ್ಭಿಣಿಯಾಗಲು ಕಾರಣನಾದ ಪ್ರಕರಣದಲ್ಲಿ ಆರೋಪಿಗೆ 20 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆ ಹಾಗೂ ₹25 ಸಾವಿರ ದಂಡ ವಿಧಿಸಿ ಕಲಬುರಗಿಯ ಅಪರ ಜಿಲ್ಲಾ ಮತ್ತು ಸತ್ರ (ವಿಶೇಷ ಪೋಕ್ಸೊ) ನ್ಯಾಯಾಲಯ ತೀರ್ಪು ನೀಡಿದೆ.

ಯಾತನೂರ ಗ್ರಾಮದ ಭೀಮಪ್ಪ ಅಲಿಯಾಸ್ ಭೀಮಶ್ಯಾ ತಂದೆ ರೇವಣಸಿದ್ದಪ್ಪ ಗಡೆದ್ (45) ಶಿಕ್ಷೆಗೆ ಗುರಿಯಾದ ಆರೋಪಿಯಾಗಿದ್ದು, ವಿಶೇಷ ನ್ಯಾಯಾಧೀಶ ಎಸ್.ಎಲ್. ಚವ್ಹಾಣ್ ಅವರು ತೀರ್ಪು ಪ್ರಕಟಿಸಿದರು.

ಪೋಕ್ಸೊ ಕಾಯ್ದೆಯ ಕಲಂ 6ರಡಿ ಆರೋಪಿಗೆ 20 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆ ಹಾಗೂ ₹25 ಸಾವಿರ ದಂಡ ವಿಧಿಸಲಾಗಿದೆ. ದಂಡ ಪಾವತಿಸದಿದ್ದರೆ 6 ತಿಂಗಳ ಹೆಚ್ಚುವರಿ ಶಿಕ್ಷೆ ಅನುಭವಿಸಬೇಕಾಗಿದೆ. ಅಲ್ಲದೆ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ವತಿಯಿಂದ ಸಂತ್ರಸ್ತ ಬಾಲಕಿಗೆ ಒಂದು ತಿಂಗಳೊಳಗೆ ₹5 ಲಕ್ಷ ಪರಿಹಾರ ನೀಡುವಂತೆ ನ್ಯಾಯಾಲಯ ಆದೇಶಿಸಿದೆ.

ಪ್ರಕರಣದ ಹಿನ್ನೆಲೆ

2024ರ ಸೆಪ್ಟೆಂಬರ್ 10ರಂದು ಬೆಳಿಗ್ಗೆ ಹೊಲದಲ್ಲಿ ಕೂಲಿ ಕೆಲಸಕ್ಕೆ ತೆರಳಿದ್ದ ಅಪ್ರಾಪ್ತ ಬಾಲಕಿಯ ಮೇಲೆ ಆರೋಪಿ ಬಲವಂತವಾಗಿ ಅತ್ಯಾಚಾರ ಎಸಗಿದ್ದನು. ಘಟನೆ ಬಗ್ಗೆ ಯಾರಿಗಾದರೂ ತಿಳಿಸಿದರೆ ಮಾನಹಾನಿ ಮಾಡುವುದಾಗಿ ಬೆದರಿಕೆ ಹಾಕಿದ್ದರಿಂದ ಬಾಲಕಿ ವಿಷಯವನ್ನು ಮುಚ್ಚಿಟ್ಟಿದ್ದಳು.

ಕೆಲವು ತಿಂಗಳ ನಂತರ ಬಾಲಕಿಗೆ ಮಾಸಿಕ ಋತುಸ್ರಾವವಾಗದ ಹಿನ್ನೆಲೆಯಲ್ಲಿ ಕುಟುಂಬಸ್ಥರು ಚಿಕಿತ್ಸೆಗಾಗಿ ವಿವಿಧ ಆಸ್ಪತ್ರೆಗಳಿಗೆ ಕರೆದೊಯ್ದರು. ಬಳಿಕ ವೈದ್ಯಕೀಯ ಪರೀಕ್ಷೆಯಲ್ಲಿ ಬಾಲಕಿ ಎಂಟು ತಿಂಗಳ ಗರ್ಭಿಣಿಯಾಗಿರುವುದು ಬೆಳಕಿಗೆ ಬಂದಿತು.

ನಂತರ 2025ರ ಮೇ 18ರಂದು ವಿಜಯಪುರದ ಖಾಸಗಿ ಆಸ್ಪತ್ರೆಯಲ್ಲಿ ಬಾಲಕಿ ಗಂಡು ಮಗುವಿಗೆ ಜನ್ಮ ನೀಡಿದ್ದಳು. ತನಿಖೆ, ವೈದ್ಯಕೀಯ ಹಾಗೂ ವೈಜ್ಞಾನಿಕ ಸಾಕ್ಷ್ಯಾಧಾರಗಳ ಆಧಾರದ ಮೇಲೆ ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ನ್ಯಾಯಾಲಯ ಶಿಕ್ಷೆ ಪ್ರಕಟಿಸಿದೆ.

ಪ್ರಕರಣದ ತನಿಖೆ ಪೂರ್ಣಗೊಳಿಸಿ ಸಿಪಿಐ ರಾಜೇಸಾಬ್ ನದಾಫ್ ನ್ಯಾಯಾಲಯಕ್ಕೆ ದೋಷಾರೋಪಣಾ ಪತ್ರ ಸಲ್ಲಿಸಿದ್ದರು. ಸರ್ಕಾರದ ಪರವಾಗಿ ವಿಶೇಷ ಸರ್ಕಾರಿ ಅಭಿಯೋಜಕ ಶಾಂತವೀರ ಬಿ. ತುಪ್ಪದ್ ವಾದ ಮಂಡಿಸಿದರು.

Related Articles

Leave a Reply

Your email address will not be published. Required fields are marked *

Back to top button