ರಾಜಕೀಯ

ಕೆಐಎಡಿಬಿ ಭೂಮಿಯಲ್ಲೇ ಟೌನ್‌ಶಿಪ್ ನಿರ್ಮಿಸಿ: ರಾಜ್ಯ ಸರ್ಕಾರಕ್ಕೆ ನಿಖಿಲ್ ಕುಮಾರಸ್ವಾಮಿ ಆಗ್ರಹ

ಫಲವತ್ತಾದ ಕೃಷಿ ಭೂಮಿ ಸ್ವಾಧೀನಕ್ಕೆ ವಿರೋಧ; ರೈತರ ಹಿತ ಕಾಪಾಡುವಂತೆ ಸರ್ಕಾರಕ್ಕೆ ಎಚ್ಚರಿಕೆ

ಕಲಬುರಗಿ, ಜು.14: ಕಲ್ಯಾಣ ಕರ್ನಾಟಕ ಭಾಗದಲ್ಲಿ ಟೌನ್‌ಶಿಪ್ ನಿರ್ಮಾಣಕ್ಕೆ ಈಗಾಗಲೇ ಕೆಐಎಡಿಬಿ (KIADB) ವ್ಯಾಪ್ತಿಯಲ್ಲಿ ಸಾವಿರಾರು ಎಕರೆ ಭೂಮಿ ಲಭ್ಯವಿರುವಾಗ, ರೈತರ ಫಲವತ್ತಾದ ಕೃಷಿ ಭೂಮಿಯನ್ನು ಏಕೆ ಸ್ವಾಧೀನಪಡಿಸಿಕೊಳ್ಳಲಾಗುತ್ತಿದೆ ಎಂದು ಜೆಡಿಎಸ್ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ರಾಜ್ಯ ಸರ್ಕಾರವನ್ನು ಪ್ರಶ್ನಿಸಿದರು.

ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೆಐಎಡಿಬಿ ವ್ಯಾಪ್ತಿಯಲ್ಲಿ ಈಗಾಗಲೇ ಲಕ್ಷಾಂತರ ಎಕರೆ ಭೂಮಿ ಲಭ್ಯವಿದೆ. ಇಂತಹ ಸಂದರ್ಭದಲ್ಲಿ ರೈತರ ಕೃಷಿ ಭೂಮಿಯನ್ನೇ ಗುರಿಯಾಗಿಸಿ ಟೌನ್‌ಶಿಪ್ ನಿರ್ಮಾಣಕ್ಕೆ ಮುಂದಾಗಿರುವುದು ಸರಿಯಲ್ಲ ಎಂದು ಹೇಳಿದರು.

ಕಲ್ಯಾಣ ಕರ್ನಾಟಕದಲ್ಲಿಯೇ ಸ್ಮಾರ್ಟ್ ಸಿಟಿ ಅಥವಾ ಇತರೆ ಅಭಿವೃದ್ಧಿ ಯೋಜನೆಗಳನ್ನು ಕೆಐಎಡಿಬಿ ಭೂಮಿಯಲ್ಲೇ ಜಾರಿಗೊಳಿಸಿದರೆ ಸ್ಥಳೀಯರಿಗೆ ಉದ್ಯೋಗ ಹಾಗೂ ಅಭಿವೃದ್ಧಿಯ ಅವಕಾಶಗಳು ಸಿಗುತ್ತವೆ. ಅದನ್ನು ಬಿಟ್ಟು ಫಲವತ್ತಾದ ಕೃಷಿ ಭೂಮಿಯನ್ನು ಸ್ವಾಧೀನಪಡಿಸಿಕೊಳ್ಳುವ ಅಗತ್ಯವೇನು ಎಂದು ಅವರು ಪ್ರಶ್ನಿಸಿದರು.

ಬಿಡದಿ ಟೌನ್‌ಶಿಪ್ ಯೋಜನೆಯ ಹೆಸರಿನಲ್ಲಿ ರೈತರ ಬದುಕಿನೊಂದಿಗೆ ಸರ್ಕಾರ ಚೆಲ್ಲಾಟವಾಡುತ್ತಿದೆ. ಸಣ್ಣ ಮತ್ತು ಅಲ್ಪ ಪ್ರಮಾಣದ ಭೂಮಿ ಹೊಂದಿರುವ ರೈತರು ಕೃಷಿ, ತೋಟಗಾರಿಕೆ ಹಾಗೂ ಹೈನುಗಾರಿಕೆಯನ್ನು ಅವಲಂಬಿಸಿ ಜೀವನ ಸಾಗಿಸುತ್ತಿದ್ದಾರೆ. ಇಂತಹ ರೈತರ ಬದುಕಿಗೆ ಧಕ್ಕೆ ತರುವುದು ಅಭಿವೃದ್ಧಿಯಲ್ಲ, ವಿನಾಶ ಎಂದು ಅವರು ಟೀಕಿಸಿದರು.

ಸರ್ಕಾರ ರೈತರ ಒಪ್ಪಿಗೆ ಇಲ್ಲದೆ ಯಾವುದೇ ಸಮೀಕ್ಷೆ ನಡೆಸಬಾರದು. ಯೋಜನೆ ಕುರಿತು ಸಂಪೂರ್ಣ ಮಾಹಿತಿ ನೀಡದೇ ಭೂಮಿ ಸ್ವಾಧೀನ ಪ್ರಕ್ರಿಯೆ ಆರಂಭಿಸಿರುವುದನ್ನು ತೀವ್ರವಾಗಿ ಖಂಡಿಸುತ್ತೇವೆ. ರೈತರ ಅಭಿಪ್ರಾಯವನ್ನು ಗೌರವಿಸಿ, ಅವರ ಹಿತಾಸಕ್ತಿಗೆ ವಿರುದ್ಧವಾದ ಯಾವುದೇ ಕ್ರಮ ಕೈಗೊಳ್ಳಬಾರದು ಎಂದು ಸರ್ಕಾರಕ್ಕೆ ಎಚ್ಚರಿಕೆ ನೀಡಿದರು.

ರೈತರ ಹಕ್ಕು ಮತ್ತು ಬದುಕಿನ ರಕ್ಷಣೆಗೆ ಜೆಡಿಎಸ್ ಸದಾ ರೈತರೊಂದಿಗೆ ನಿಲ್ಲಲಿದೆ. ರೈತ ವಿರೋಧಿ ಎಂದು ಆರೋಪಿಸಲಾಗುತ್ತಿರುವ ಬಿಡದಿ ಟೌನ್‌ಶಿಪ್ ಯೋಜನೆಯನ್ನು ಸರ್ಕಾರ ಸಂಪೂರ್ಣವಾಗಿ ಕೈಬಿಡಬೇಕು ಎಂದು ನಿಖಿಲ್ ಕುಮಾರಸ್ವಾಮಿ ಆಗ್ರಹಿಸಿದರು.

Related Articles

Leave a Reply

Your email address will not be published. Required fields are marked *

Back to top button