ಜಿಲ್ಲಾಸುದ್ದಿ

ಕನಿಷ್ಠ ವೇತನ ಜಾರಿಗೆ ಆಗ್ರಹಿಸಿ ಆಗಸ್ಟ್ 10ರಂದು ಕಲಬುರಗಿಯಲ್ಲಿ ಬೃಹತ್ ಪ್ರತಿಭಟನೆ

ಸಿಐಟಿಯು ನೇತೃತ್ವದಲ್ಲಿ ಜಿಲ್ಲಾಧಿಕಾರಿ ಕಚೇರಿವರೆಗೆ ಮೆರವಣಿಗೆ; ತಕ್ಷಣವೇ ಪರಿಷ್ಕೃತ ವೇತನ ಜಾರಿಗೆ ಒತ್ತಾಯ

ಕಲಬುರಗಿ, ಆ.6: ಕಾರ್ಮಿಕರಿಗೆ ಪರಿಷ್ಕೃತ ಕನಿಷ್ಠ ವೇತನವನ್ನು ತಕ್ಷಣ ಜಾರಿಗೆ ತರಬೇಕು ಎಂದು ಆಗ್ರಹಿಸಿ ಆಗಸ್ಟ್ 10ರಂದು ನಗರದ ಸರ್ದಾರ್ ವಲ್ಲಭಭಾಯಿ ಪಟೇಲ್ ವೃತ್ತದಿಂದ ಜಿಲ್ಲಾಧಿಕಾರಿ ಕಚೇರಿವರೆಗೆ ಬೃಹತ್ ಪ್ರತಿಭಟನೆ ಹಾಗೂ ಮೆರವಣಿಗೆ ಹಮ್ಮಿಕೊಳ್ಳಲಾಗಿದೆ ಎಂದು ಸಿಐಟಿಯು (ಸೆಂಟರ್ ಆಫ್ ಇಂಡಿಯನ್ ಟ್ರೇಡ್ ಯೂನಿಯನ್ಸ್) ಜಿಲ್ಲಾ ಅಧ್ಯಕ್ಷ ಎಂ.ಬಿ. ಸಜ್ಜನ್ ತಿಳಿಸಿದ್ದಾರೆ.

ನಗರದಲ್ಲಿ ಗುರುವಾರ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕಾರ್ಮಿಕ ಸಂಘಟನೆಗಳ ನಿರಂತರ ಹೋರಾಟದ ಫಲವಾಗಿ ಕಳೆದ ಮೇ 22ರಂದು ಸುಪ್ರೀಂ ಕೋರ್ಟ್ ತೀರ್ಪಿನ ಆಧಾರದ ಮೇಲೆ ವೈಜ್ಞಾನಿಕ ಲೆಕ್ಕಾಚಾರದಂತೆ ಕನಿಷ್ಠ ವೇತನ ಪರಿಷ್ಕರಿಸಿ ಅಂತಿಮ ಅಧಿಸೂಚನೆ ಹೊರಡಿಸಲಾಗಿತ್ತು. ಆದರೆ ಎರಡು ತಿಂಗಳು ಕಳೆದರೂ ಸರ್ಕಾರ ಪರಿಷ್ಕೃತ ವೇತನ ಜಾರಿಗೆ ತರದಿರುವುದರಿಂದ ರಾಜ್ಯದ ಸುಮಾರು ಒಂದು ಕೋಟಿ ಕಾರ್ಮಿಕರು ಸಂಕಷ್ಟ ಎದುರಿಸುತ್ತಿದ್ದಾರೆ ಎಂದು ಆರೋಪಿಸಿದರು.

ರಾಜ್ಯ ಸರ್ಕಾರವು ಉದ್ಯೋಗದಾತರ ಪರವಾಗಿ ನಡೆದುಕೊಳ್ಳದೇ, ತಕ್ಷಣವೇ ಪರಿಷ್ಕೃತ ಕನಿಷ್ಠ ವೇತನ ಜಾರಿಗೆ ತರಬೇಕು ಎಂದು ಅವರು ಒತ್ತಾಯಿಸಿದರು. ದಿನನಿತ್ಯ ಅಗತ್ಯ ವಸ್ತುಗಳಾದ ಪೆಟ್ರೋಲ್, ಡೀಸೆಲ್, ಗ್ಯಾಸ್, ವಿದ್ಯುತ್ ಹಾಗೂ ದಿನಸಿ ವಸ್ತುಗಳ ಬೆಲೆ ಏರಿಕೆಯಿಂದ ಕಾರ್ಮಿಕ ವರ್ಗದ ಬದುಕು ದುಸ್ತರವಾಗಿದೆ. ಆದಾಯ ಕುಸಿಯುತ್ತಿದ್ದು, ಜೀವನ ನಿರ್ವಹಣೆ ಕಷ್ಟಕರವಾಗಿದೆ ಎಂದು ಹೇಳಿದರು.

ಕಾರ್ಮಿಕರ ಹಕ್ಕುಗಳನ್ನು ರಕ್ಷಿಸುವುದು ಸರ್ಕಾರದ ಜವಾಬ್ದಾರಿಯಾಗಿದೆ. ಆದ್ದರಿಂದ ಎಲ್ಲ ಕಾರ್ಮಿಕರು ಒಂದಾಗಿ ತಮ್ಮ ನ್ಯಾಯಯುತ ಬೇಡಿಕೆಗಳಿಗಾಗಿ ಹೋರಾಟದಲ್ಲಿ ಭಾಗವಹಿಸಬೇಕು ಎಂದು ಕರೆ ನೀಡಿದರು.

ಪ್ರತಿಭಟನೆಯಲ್ಲಿ ಪರಿಷ್ಕೃತ ಕನಿಷ್ಠ ವೇತನ ಜಾರಿ, ಕಾರ್ಮಿಕ ಸಂಹಿತೆಗಳ ವಿರೋಧ, ಎಬಿ ಗ್ರಾಮೀಣ ಜಿ ಕಾಯ್ದೆ ಹಿಂಪಡೆಯುವುದು, ವಿದ್ಯುತ್ ತಿದ್ದುಪಡಿ ಕಾಯ್ದೆ–2025 ವಿರೋಧ, ಬೀಜ ಕಾಯ್ದೆ ಹಾಗೂ ಕೃಷಿ ಮಾರುಕಟ್ಟೆ ಕುರಿತ ರಾಷ್ಟ್ರೀಯ ನೀತಿಗಳ ವಿರುದ್ಧ ಸೇರಿದಂತೆ ವಿವಿಧ ಬೇಡಿಕೆಗಳನ್ನು ಮುಂದಿರಿಸಲಾಗುವುದು ಎಂದು ಅವರು ತಿಳಿಸಿದರು.

ಸುದ್ದಿಗೋಷ್ಠಿಯಲ್ಲಿ ನಾಗಯ್ಯಸ್ವಾಮಿ, ಶ್ರೀಮತಿ ಶಾಂತಾ ಘಂಟೆ, ಬಾಬು ಹೂವಿನಹಳ್ಳಿ ಸೇರಿದಂತೆ ಕಾರ್ಮಿಕ ಸಂಘಟನೆಯ ಪದಾಧಿಕಾರಿಗಳು ಉಪಸ್ಥಿತರಿದ್ದರು.

Related Articles

Leave a Reply

Your email address will not be published. Required fields are marked *

Back to top button