ಬರ ಹಾಗೂ ನೀರಿನ ಸಮಸ್ಯೆ ನಿರ್ಲಕ್ಷ್ಯ: ಜಿಲ್ಲಾ ಉಸ್ತುವಾರಿ ಸಚಿವರ ವಿರುದ್ಧ ಶಾಸಕ ಬಸವರಾಜ ಮತ್ತಿಮೂಡ ಟೀಕೆ
ರೈತರ ಸಂಕಷ್ಟ, ಕುಡಿಯುವ ನೀರಿನ ಸಮಸ್ಯೆ ಹಾಗೂ ಕಾನೂನು ಸುವ್ಯವಸ್ಥೆ ಕುರಿತು ಸರ್ಕಾರ ತಕ್ಷಣ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹ

ಜಿಲ್ಲೆಯಲ್ಲಿ ಬರ ಪರಿಸ್ಥಿತಿ, ಕುಡಿಯುವ ನೀರಿನ ಸಮಸ್ಯೆ ಹಾಗೂ ಕಾನೂನು ಸುವ್ಯವಸ್ಥೆ ಹದಗೆಟ್ಟಿರುವ ವಿಚಾರದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್ ಖರ್ಗೆ ಮೌನ ವಹಿಸಿದ್ದಾರೆ ಎಂದು ಬಿಜೆಪಿ ರಾಜ್ಯ ಕಾರ್ಯದರ್ಶಿ ಹಾಗೂ ಗ್ರಾಮೀಣ ಕ್ಷೇತ್ರದ ಶಾಸಕ ಬಸವರಾಜ ಮತ್ತಿಮೂಡ ಆರೋಪಿಸಿದ್ದಾರೆ.
ನಗರದಲ್ಲಿ ಬುಧವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಜಿಲ್ಲೆಯ ಹಲವು ಗ್ರಾಮಗಳಲ್ಲಿ ಮಳೆಯ ಕೊರತೆಯಿಂದ ರೈತರು ಸಂಕಷ್ಟಕ್ಕೆ ಸಿಲುಕಿದ್ದು, ಗ್ರಾಮೀಣ ಪ್ರದೇಶಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ದಿನದಿಂದ ದಿನಕ್ಕೆ ತೀವ್ರವಾಗುತ್ತಿದೆ. ಆದರೆ ಜಿಲ್ಲಾ ಉಸ್ತುವಾರಿ ಸಚಿವರು ಈ ಗಂಭೀರ ಸಮಸ್ಯೆಗಳ ಕಡೆ ಸಮರ್ಪಕ ಗಮನ ಹರಿಸುತ್ತಿಲ್ಲ ಎಂದು ಟೀಕಿಸಿದರು.
ಜಿಲ್ಲೆಯ ಅಭಿವೃದ್ಧಿ ಮತ್ತು ಜನರ ಸಮಸ್ಯೆಗಳ ಕುರಿತು ಸಚಿವರು ನಿರಂತರವಾಗಿ ಗಮನಹರಿಸಬೇಕಾಗಿದ್ದರೂ, ಮುಖ್ಯಮಂತ್ರಿಗಳು ಬಂದಾಗ ಮಾತ್ರ ಜಿಲ್ಲೆಗೆ ಭೇಟಿ ನೀಡುವ ಪರಿಸ್ಥಿತಿ ನಿರ್ಮಾಣವಾಗಿದೆ ಎಂದು ಅವರು ಅಸಮಾಧಾನ ವ್ಯಕ್ತಪಡಿಸಿದರು.
ಇತ್ತೀಚೆಗೆ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರಿಗೆ ಜಿಲ್ಲೆಯ ಬರ ಪರಿಸ್ಥಿತಿಯನ್ನು ವಿವರಿಸಿ, ಜಿಲ್ಲೆಯನ್ನು ಬರಪೀಡಿತ ಪ್ರದೇಶವೆಂದು ಘೋಷಿಸುವಂತೆ ಹಾಗೂ ರೈತರಿಗೆ ಪ್ರತಿ ಎಕರೆಗೆ ₹50,000 ಪರಿಹಾರ ನೀಡುವಂತೆ ಮನವಿ ಮಾಡಲಾಗಿತ್ತು. ಆದರೆ ಇದುವರೆಗೆ ಯಾವುದೇ ಸ್ಪಷ್ಟ ಕ್ರಮ ಕೈಗೊಳ್ಳದಿರುವುದರಿಂದ ರೈತರು ಮತ್ತು ಸಾರ್ವಜನಿಕರು ಸಂಕಷ್ಟ ಅನುಭವಿಸುತ್ತಿದ್ದಾರೆ ಎಂದು ಹೇಳಿದರು.
ತಮ್ಮ ಕ್ಷೇತ್ರದ ಅನೇಕ ಗ್ರಾಮಗಳಲ್ಲಿ ಕುಡಿಯುವ ನೀರಿನ ತೀವ್ರ ಅಭಾವವಿದ್ದು, ಬೋರ್ವೆಲ್ಗಳ ದುರಸ್ತಿ ಹಾಗೂ ನೀರು ಪೂರೈಕೆ ವ್ಯವಸ್ಥೆ ಸುಧಾರಣೆಗೆ ಗ್ರಾಮ ಪಂಚಾಯಿತಿಗಳಲ್ಲಿ ಅನುದಾನದ ಕೊರತೆ ಇದೆ ಎಂದು ಅಧಿಕಾರಿಗಳು ತಿಳಿಸುತ್ತಿದ್ದಾರೆ. ಆದ್ದರಿಂದ ಪ್ರತಿ ಕ್ಷೇತ್ರಕ್ಕೂ ಕನಿಷ್ಠ ಒಂದು ಅಥವಾ ಎರಡು ಕೋಟಿ ರೂಪಾಯಿ ಅನುದಾನವನ್ನು ರಾಜ್ಯ ಸರ್ಕಾರ ಬಿಡುಗಡೆ ಮಾಡಿ ಕುಡಿಯುವ ನೀರಿನ ಸಮಸ್ಯೆ ನಿವಾರಿಸಬೇಕು ಎಂದು ಆಗ್ರಹಿಸಿದರು.
ಕಾನೂನು ಸುವ್ಯವಸ್ಥೆ ಕುರಿತು ಮಾತನಾಡಿದ ಅವರು, ಅಫಜಲಪುರದಲ್ಲಿ ಪೋಕ್ಸೋ ಪ್ರಕರಣದ ಆರೋಪಿ ಪರಾರಿಯಾಗಿದ್ದ ಘಟನೆ ಹಾಗೂ ಇತ್ತೀಚೆಗೆ ಕೇಂದ್ರ ಕಾರಾಗೃಹದಿಂದ ಮೂವರು ಕೈದಿಗಳು ಪರಾರಿಯಾದ ಪ್ರಕರಣಗಳನ್ನು ಉಲ್ಲೇಖಿಸಿ, ಜಿಲ್ಲೆಯಲ್ಲಿ ಭದ್ರತಾ ವ್ಯವಸ್ಥೆ ದುರ್ಬಲವಾಗುತ್ತಿದೆ ಎಂದು ಆರೋಪಿಸಿದರು.
ಇದೇ ವೇಳೆ ದಂಡೋತಿ ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ಆಹಾರ ಸೇವಿಸಿ ಸುಮಾರು 60ಕ್ಕೂ ಹೆಚ್ಚು ವಿದ್ಯಾರ್ಥಿಗಳು ಅಸ್ವಸ್ಥಗೊಂಡ ಘಟನೆಗೂ ಸರ್ಕಾರ ಸಮರ್ಪಕ ಸ್ಪಂದನೆ ನೀಡಿಲ್ಲ ಎಂದು ದೂರಿದರು. ಜಿಲ್ಲೆಯ ಜನರ ಸಮಸ್ಯೆಗಳಿಗಿಂತ ಬೇರೆ ವಿಷಯಗಳಿಗೆ ಹೆಚ್ಚು ಆದ್ಯತೆ ನೀಡಲಾಗುತ್ತಿದೆ ಎಂದು ಟೀಕಿಸಿದ ಅವರು, ಜಿಲ್ಲೆಯ ಸಮಸ್ಯೆಗಳ ಕುರಿತು ತುರ್ತು ಕೆಡಿಪಿ ಸಭೆ ಕರೆದು ಪರಿಹಾರ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಒತ್ತಾಯಿಸಿದರು.
ಜಿಲ್ಲೆಯ ಜನರ ಸಮಸ್ಯೆಗಳ ಬಗ್ಗೆ ಸರ್ಕಾರ ತಕ್ಷಣ ಸ್ಪಂದಿಸದಿದ್ದರೆ ಉಗ್ರ ಹೋರಾಟ ನಡೆಸುವುದು ಅನಿವಾರ್ಯವಾಗಲಿದೆ ಎಂದು ಬಸವರಾಜ ಮತ್ತಿಮೂಡ ಎಚ್ಚರಿಕೆ ನೀಡಿದರು.
ಸುದ್ದಿಗೋಷ್ಠಿಯಲ್ಲಿ ಬಿಜೆಪಿ ಗ್ರಾಮಾಂತರ ಜಿಲ್ಲಾ ಘಟಕದ ಅಧ್ಯಕ್ಷ ಅಶೋಕ್ ಬಗಲಿ, ವಿಧಾನ ಪರಿಷತ್ ಸದಸ್ಯ ಡಾ. ಬಿ.ಜಿ. ಪಾಟೀಲ, ಚಿಂಚೋಳಿ ಶಾಸಕ ಡಾ. ಅವಿನಾಶ ಜಾಧವ್ ಸೇರಿದಂತೆ ಪಕ್ಷದ ಹಲವು ಮುಖಂಡರು ಉಪಸ್ಥಿತರಿದ್ದರು.



