ಕಲಬುರಗಿಯಲ್ಲಿ ಅಭಿವೃದ್ಧಿ ಕಾಮಗಾರಿಗಳ ಪ್ರಗತಿ ಪರಿಶೀಲಿಸಿದ ಸಂಸದ ರಾಧಾಕೃಷ್ಣ ದೊಡ್ಡಮನಿ
ಅಧಿಕಾರಿಗಳೊಂದಿಗೆ ಸಭೆ; ಕಾಮಗಾರಿಗಳನ್ನು ನಿಗದಿತ ಅವಧಿಯಲ್ಲಿ ಪೂರ್ಣಗೊಳಿಸಲು ಕಟ್ಟುನಿಟ್ಟಿನ ಸೂಚನೆ

ಕಲಬುರಗಿ ಲೋಕಸಭಾ ಕ್ಷೇತ್ರದ ಸಂಸದ ರಾಧಾಕೃಷ್ಣ ದೊಡ್ಡಮನಿ ಅವರು ನಗರದ ತಮ್ಮ ಕಚೇರಿಯಲ್ಲಿ ಜಿಲ್ಲಾ ಮಟ್ಟದ ಅಧಿಕಾರಿಗಳೊಂದಿಗೆ ಪ್ರಗತಿ ಪರಿಶೀಲನಾ ಸಭೆ ನಡೆಸಿ, ಸಂಸದರ ಸ್ಥಳೀಯ ಪ್ರದೇಶಾಭಿವೃದ್ಧಿ ನಿಧಿ (MPLADS) ಅಡಿಯಲ್ಲಿ ಕೈಗೆತ್ತಿಕೊಂಡಿರುವ ಕಾಮಗಾರಿಗಳ ಪ್ರಗತಿಯನ್ನು ಪರಿಶೀಲಿಸಿದರು.
ಸಭೆಯಲ್ಲಿ ಜಿಲ್ಲೆಯ ವಿವಿಧ ರಾಜ್ಯ ಹಾಗೂ ಕೇಂದ್ರ ಪುರಸ್ಕೃತ ಯೋಜನೆಗಳಡಿ ಮಂಜೂರಾಗಿರುವ ಅಭಿವೃದ್ಧಿ ಕಾಮಗಾರಿಗಳ ಪ್ರಗತಿ ಕುರಿತು ಅಧಿಕಾರಿಗಳಿಂದ ಮಾಹಿತಿ ಪಡೆದುಕೊಂಡ ಅವರು, ಯಾವುದೇ ರೀತಿಯ ವಿಳಂಬಕ್ಕೆ ಅವಕಾಶ ನೀಡದೆ ಎಲ್ಲಾ ಕಾಮಗಾರಿಗಳನ್ನು ನಿಗದಿತ ಅವಧಿಯೊಳಗೆ ಗುಣಮಟ್ಟದೊಂದಿಗೆ ಪೂರ್ಣಗೊಳಿಸುವಂತೆ ಕಟ್ಟುನಿಟ್ಟಿನ ಸೂಚನೆ ನೀಡಿದರು.
ಸಭೆಯಲ್ಲಿ ಜಿಲ್ಲಾಧಿಕಾರಿ ಇಕ್ರಮ್ ಷರೀಫ್, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ರಾಹುಲ್ ಸಂಕನೂರು ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.
ಬಳಿಕ ಸಂಸದರು ಕಲಬುರಗಿ ವಿಮಾನ ನಿಲ್ದಾಣದಲ್ಲಿ ವಿಮಾನ ನಿಲ್ದಾಣ ಸಲಹಾ ಸಮಿತಿಯ ಸದಸ್ಯರು ಹಾಗೂ ಅಧಿಕಾರಿಗಳೊಂದಿಗೆ ಸಭೆ ನಡೆಸಿದರು. ಜಿಲ್ಲೆಯ ಪ್ರಯಾಣಿಕರಿಗೆ ಇನ್ನಷ್ಟು ಸುಗಮ ಮತ್ತು ಅನುಕೂಲಕರ ಸೇವೆ ಒದಗಿಸುವ ಉದ್ದೇಶದಿಂದ ಅಗತ್ಯ ಮೂಲಸೌಕರ್ಯ ಕಾಮಗಾರಿಗಳ ಪಟ್ಟಿಯನ್ನು ಸಿದ್ಧಪಡಿಸುವಂತೆ ಅಧಿಕಾರಿಗಳಿಗೆ ಸೂಚಿಸಿದರು. ಸಂಬಂಧಿತ ಇಲಾಖೆಗಳ ಮೂಲಕ ಅಗತ್ಯ ಕಾಮಗಾರಿಗಳನ್ನು ತ್ವರಿತಗತಿಯಲ್ಲಿ ಪೂರ್ಣಗೊಳಿಸಲು ಕ್ರಮ ಕೈಗೊಳ್ಳುವ ನಿರ್ಧಾರವನ್ನೂ ಸಭೆಯಲ್ಲಿ ಕೈಗೊಳ್ಳಲಾಯಿತು.
ಇದಾದ ನಂತರ ನಗರದ ವಿವಿಧ ಭಾಗಗಳಲ್ಲಿ ಪ್ರಗತಿಯಲ್ಲಿರುವ ಅಭಿವೃದ್ಧಿ ಕಾಮಗಾರಿಗಳ ಸ್ಥಳಕ್ಕೆ ಭೇಟಿ ನೀಡಿ ಖುದ್ದಾಗಿ ಪರಿಶೀಲನೆ ನಡೆಸಿದ ಸಂಸದರು, ಕಾಮಗಾರಿಗಳ ಗುಣಮಟ್ಟ ಮತ್ತು ಪ್ರಗತಿಯ ಬಗ್ಗೆ ಅಧಿಕಾರಿಗಳಿಂದ ಮಾಹಿತಿ ಪಡೆದು ಅಗತ್ಯ ಸೂಚನೆಗಳನ್ನು ನೀಡಿದರು.
ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿ ಇಕ್ರಮ್ ಷರೀಫ್, ಜಿಲ್ಲಾ ಪಂಚಾಯಿತಿ ಸಿಇಒ ರಾಹುಲ್ ಸಂಕನೂರು, ನಗರ ಪೊಲೀಸ್ ಆಯುಕ್ತ ಡಾ. ಶರಣಪ್ಪ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.



