ರಾಜಕೀಯ

ಅಂಬೇಡ್ಕರ್ ಭವನದ ಸ್ಥಳದಲ್ಲಿ ನೀಲಿ ಧ್ವಜ ತೆರವು: ಅಂಗನವಾಡಿ ಕಾರ್ಯಕರ್ತೆಯನ್ನು ಅಮಾನತುಗೊಳಿಸಲು ಆಗ್ರಹ

ಕುಂಬರವಾಡ ಸರ್ವೆ ನಂ.51/1ರಲ್ಲಿ ಅಂಬೇಡ್ಕರ್ ಭವನ ನಿರ್ಮಾಣಕ್ಕೆ ₹1 ಕೋಟಿ ಮಂಜೂರು ಮಾಡುವಂತೆ ಒತ್ತಾಯ

ನಗರದ ಕುಂಬರವಾಡ ಸರ್ವೆ ನಂ.51/1ರಲ್ಲಿ ಕಳೆದ 25 ವರ್ಷಗಳಿಂದ ಡಾ. ಬಿ.ಆರ್. ಅಂಬೇಡ್ಕರ್ ಜಯಂತಿ ಸೇರಿದಂತೆ ವಿವಿಧ ಸಾಮಾಜಿಕ ಕಾರ್ಯಕ್ರಮಗಳು ನಡೆಯುತ್ತಿರುವ ಸ್ಥಳದಲ್ಲಿ ಅಳವಡಿಸಿದ್ದ ನೀಲಿ ಧ್ವಜವನ್ನು ತೆರವುಗೊಳಿಸಿರುವುದನ್ನು ಖಂಡಿಸಿ, ಸಂಬಂಧಿಸಿದ ಅಂಗನವಾಡಿ ಕಾರ್ಯಕರ್ತೆ ಶೋಭಾರಾಣಿ ಕೊಡೇಕರ್ ಅವರನ್ನು ಸೇವೆಯಿಂದ ಅಮಾನತುಗೊಳಿಸಬೇಕು ಎಂದು ವೀರ ಕನ್ನಡಿಗರ ಸೇನೆಯ ರಾಜ್ಯಾಧ್ಯಕ್ಷ ಅಮೃತ ಪಾಟೀಲ್ ಸಿರನೂರು ಆಗ್ರಹಿಸಿದರು.

ಈ ಕುರಿತು ಪ್ರಾದೇಶಿಕ ಆಯುಕ್ತರಿಗೆ ಮನವಿ ಸಲ್ಲಿಸಿದ ಅವರು, ಕುಂಬರವಾಡದ ಸರ್ವೆ ನಂ.51/1ರಲ್ಲಿ ಸುಮಾರು 75×80 ಅಡಿ ವಿಸ್ತೀರ್ಣದ ಜಾಗದಲ್ಲಿ ಕಳೆದ 25 ವರ್ಷಗಳಿಂದ ಡಾ. ಬಿ.ಆರ್. ಅಂಬೇಡ್ಕರ್ ಜಯಂತಿ, ರಮಾಬಾಯಿ ಅಂಬೇಡ್ಕರ್ ಜಯಂತಿ, ಬುದ್ಧ ಪೂರ್ಣಿಮೆ, ದಸರಾ ಹಾಗೂ ಮಹಾಪರಿನಿರ್ವಾಣ ದಿನಾಚರಣೆ ಸೇರಿದಂತೆ ಹಲವು ಕಾರ್ಯಕ್ರಮಗಳನ್ನು ನಡೆಸಿಕೊಂಡು ಬರಲಾಗುತ್ತಿದೆ ಎಂದು ಹೇಳಿದರು.

ಈ ಸ್ಥಳದಲ್ಲಿ ಅಳವಡಿಸಲಾಗಿದ್ದ ನೀಲಿ ಧ್ವಜವನ್ನು ಅಂಗನವಾಡಿ ಕಾರ್ಯಕರ್ತೆ ಶೋಭಾರಾಣಿ ಕೊಡೇಕರ್ ತೆರವುಗೊಳಿಸಿರುವುದು ಖಂಡನೀಯ. ಈ ಪ್ರಕರಣದಲ್ಲಿ ಪೊಲೀಸರು ವಿಚಾರಣೆ ನಡೆಸಿದ ಬಳಿಕ ಅವರನ್ನು ಬಿಡುಗಡೆ ಮಾಡಿರುವುದು ಅಸಮಾಧಾನಕರವಾಗಿದೆ ಎಂದು ಆರೋಪಿಸಿದರು.

ಕುಂಬರವಾಡದಲ್ಲಿ ಸುಮಾರು 500 ಕುಟುಂಬಗಳು ಹಾಗೂ 2,000ಕ್ಕೂ ಹೆಚ್ಚು ಪರಿಶಿಷ್ಟ ಜಾತಿ ಸಮುದಾಯದ ಜನರು ವಾಸಿಸುತ್ತಿದ್ದು, ಈ ಸ್ಥಳವನ್ನು ಡಾ. ಬಿ.ಆರ್. ಅಂಬೇಡ್ಕರ್ ಸಮುದಾಯ ಭವನ ನಿರ್ಮಾಣಕ್ಕಾಗಿ ಮೀಸಲಿಡುವಂತೆ ಈಗಾಗಲೇ ಸಂಬಂಧಿತ ಅಧಿಕಾರಿಗಳಿಗೆ ಮನವಿ ಸಲ್ಲಿಸಲಾಗಿದೆ ಎಂದು ತಿಳಿಸಿದರು.

ಸರ್ವೆ ನಂ.51/1ರಲ್ಲಿರುವ 75×80 ಅಡಿ ವಿಸ್ತೀರ್ಣದ ಜಾಗದಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ಸಮುದಾಯ ಭವನ ನಿರ್ಮಾಣಕ್ಕೆ ರಾಜ್ಯ ಸರ್ಕಾರ ಸಮಾಜ ಕಲ್ಯಾಣ ಇಲಾಖೆಯ ಮೂಲಕ ₹1 ಕೋಟಿ ಅನುದಾನ ಮಂಜೂರು ಮಾಡಿ ಶೀಘ್ರ ಕಾಮಗಾರಿ ಆರಂಭಿಸಬೇಕು ಎಂದು ಅವರು ಒತ್ತಾಯಿಸಿದರು.

ಈ ಸಂದರ್ಭದಲ್ಲಿ ರವಿ ವಂಟೆ, ಡಾ. ಸುಬ್ಬಣ್ಣ ಕರಕನಳ್ಳಿ, ಅಂಬಾದಾಸ್ ಸೇರಿದಂತೆ ಹಲವರು ಉಪಸ್ಥಿತರಿದ್ದರು.

Related Articles

Leave a Reply

Your email address will not be published. Required fields are marked *

Back to top button