ಶಿಕ್ಷಣ

ಸೋನಂ ವಾಂಗ್ಚುಕ್ ಸೇರಿ ಉಪವಾಸ ನಿರತ ವಿದ್ಯಾರ್ಥಿಗಳ ರಕ್ಷಣೆಗೆ ಆಗ್ರಹಿಸಿ ಪ್ರತಿಭಟನೆ

ರಾಷ್ಟ್ರಪತಿ ಮಧ್ಯಸ್ಥಿಕೆಗೆ ಒತ್ತಾಯ; ಪರೀಕ್ಷಾ ಅಕ್ರಮಗಳ ಸಮಗ್ರ ತನಿಖೆ ಹಾಗೂ ವಿದ್ಯಾರ್ಥಿಗಳಿಗೆ ನ್ಯಾಯ ನೀಡುವಂತೆ ಆಗ್ರಹ

ಸೋನಂ ವಾಂಗ್ಚುಕ್ ಹಾಗೂ ಉಪವಾಸ ನಿರತ ವಿದ್ಯಾರ್ಥಿಗಳ ಜೀವ ರಕ್ಷಣೆ, ಪರೀಕ್ಷಾ ಅಕ್ರಮಗಳ ಸಮಗ್ರ ತನಿಖೆ ಹಾಗೂ ವಿದ್ಯಾರ್ಥಿಗಳಿಗೆ ನ್ಯಾಯ ದೊರಕಿಸುವಂತೆ ಒತ್ತಾಯಿಸಿ ಸೌಹಾರ್ದ ಕರ್ನಾಟಕ ಸಂಘಟನೆಯ ಕಾರ್ಯಕರ್ತರು ಗುರುವಾರ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿದರು.

ಪ್ರತಿಭಟನಾಕಾರರು ಜಿಲ್ಲಾಧಿಕಾರಿಗಳ ಮೂಲಕ ರಾಷ್ಟ್ರಪತಿಗಳಿಗೆ ಮನವಿ ಸಲ್ಲಿಸಿ, ನವದೆಹಲಿಯ ಜಂತರ್ ಮಂತರ್‌ನಲ್ಲಿ ಖ್ಯಾತ ಶಿಕ್ಷಣ ತಜ್ಞ ಹಾಗೂ ಸಮಾಜಮುಖಿ ಚಿಂತಕರಾದ ಸೋನಂ ವಾಂಗ್ಚುಕ್ ಅವರು ವಿದ್ಯಾರ್ಥಿಗಳೊಂದಿಗೆ ನಡೆಸುತ್ತಿರುವ ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹದ ಹಿನ್ನೆಲೆಯಲ್ಲಿ ತಕ್ಷಣ ಮಧ್ಯಸ್ಥಿಕೆ ವಹಿಸುವಂತೆ ಆಗ್ರಹಿಸಿದರು.

ಪರೀಕ್ಷೆಗಳಲ್ಲಿ ನಡೆದಿರುವ ಅಕ್ರಮಗಳು, ಪ್ರಶ್ನೆಪತ್ರಿಕೆ ಸೋರಿಕೆ, ಪರೀಕ್ಷಾ ವ್ಯವಸ್ಥೆಯ ವೈಫಲ್ಯ ಮತ್ತು ಲಕ್ಷಾಂತರ ವಿದ್ಯಾರ್ಥಿಗಳು ಹಾಗೂ ಅವರ ಕುಟುಂಬಗಳು ಅನುಭವಿಸಿರುವ ಸಂಕಷ್ಟಗಳಿಗೆ ಹೊಣೆಗಾರರನ್ನು ಗುರುತಿಸಿ ಕಾನೂನು ಕ್ರಮ ಕೈಗೊಳ್ಳಬೇಕು. ಪರೀಕ್ಷಾ ಅಕ್ರಮಗಳಿಗೆ ಸಂಬಂಧಿಸಿದಂತೆ ಸ್ವತಂತ್ರ ಹಾಗೂ ನ್ಯಾಯಸಮ್ಮತ ತನಿಖೆ ನಡೆಸಿ, ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಜರುಗಿಸಬೇಕು ಎಂದು ಒತ್ತಾಯಿಸಿದರು.

ಸೋನಂ ವಾಂಗ್ಚುಕ್ ಹಾಗೂ ಉಪವಾಸ ನಿರತ ವಿದ್ಯಾರ್ಥಿಗಳೊಂದಿಗೆ ಸರ್ಕಾರ ತಕ್ಷಣ ಸಂವಾದ ಆರಂಭಿಸಬೇಕು. ಅವರ ಆರೋಗ್ಯ ಮತ್ತು ಜೀವ ರಕ್ಷಣೆಗೆ ಅಗತ್ಯ ವೈದ್ಯಕೀಯ ಸೌಲಭ್ಯ ಕಲ್ಪಿಸಬೇಕು. ವಿದ್ಯಾರ್ಥಿಗಳ ಬೇಡಿಕೆಗಳಿಗೆ ಕಾಲಮಿತಿಯೊಳಗೆ ಸ್ಪಷ್ಟ ಉತ್ತರ ನೀಡುವ ಮೂಲಕ ಸಮಸ್ಯೆಗೆ ಶಾಶ್ವತ ಪರಿಹಾರ ಕಂಡುಹಿಡಿಯಬೇಕು ಎಂದು ಮನವಿಯಲ್ಲಿ ತಿಳಿಸಿದರು.

ಪರೀಕ್ಷಾ ಅಕ್ರಮಗಳಿಂದ ಆತ್ಮಹತ್ಯೆ ಮಾಡಿಕೊಂಡ ಅಥವಾ ತೀವ್ರ ಹಾನಿಗೊಳಗಾದ ವಿದ್ಯಾರ್ಥಿಗಳ ಕುಟುಂಬಗಳಿಗೆ ನ್ಯಾಯಯುತ ಪರಿಹಾರ, ಕಾನೂನು ನೆರವು ಮತ್ತು ಅಗತ್ಯ ಬೆಂಬಲ ನೀಡಬೇಕು. ಭವಿಷ್ಯದಲ್ಲಿ ಇಂತಹ ಘಟನೆಗಳು ಮರುಕಳಿಸದಂತೆ ಪಾರದರ್ಶಕ ಹಾಗೂ ವಿಶ್ವಾಸಾರ್ಹ ಪರೀಕ್ಷಾ ವ್ಯವಸ್ಥೆ ರೂಪಿಸಲು ರಾಷ್ಟ್ರೀಯ ಮಟ್ಟದಲ್ಲಿ ಸಮಗ್ರ ನೀತಿ ಜಾರಿಗೆ ತರಬೇಕು ಎಂದು ಆಗ್ರಹಿಸಿದರು.

ಪರೀಕ್ಷೆಗಳು ರದ್ದಾದ ಅಥವಾ ಮುಂದೂಡಲ್ಪಟ್ಟ ಹಿನ್ನೆಲೆಯಲ್ಲಿ ಸಂಕಷ್ಟಕ್ಕೆ ಸಿಲುಕಿರುವ ವಿದ್ಯಾರ್ಥಿಗಳಿಗೆ ನ್ಯಾಯ ಒದಗಿಸುವ ಕ್ರಮಗಳನ್ನು ಕೈಗೊಳ್ಳಬೇಕು. ಪ್ರತಿಭಟನೆಯಲ್ಲಿ ಭಾಗವಹಿಸಿರುವ ವಿದ್ಯಾರ್ಥಿಗಳು, ಸ್ವಯಂಸೇವಕರು ಹಾಗೂ ನಾಗರಿಕ ಸಮಾಜದ ಸದಸ್ಯರ ವಿರುದ್ಧ ಯಾವುದೇ ಪ್ರತೀಕಾರಾತ್ಮಕ ಕ್ರಮ ಕೈಗೊಳ್ಳಬಾರದು. ಕೇಂದ್ರ ಸರ್ಕಾರ ತಕ್ಷಣ ಈ ಕುರಿತು ಸ್ಪಷ್ಟ ವರದಿ ಪ್ರಕಟಿಸಿ, ಕೈಗೊಂಡಿರುವ ಕ್ರಮಗಳ ವಿವರವನ್ನು ಸಾರ್ವಜನಿಕರಿಗೆ ತಿಳಿಸಬೇಕು ಎಂದು ಪ್ರತಿಭಟನಾಕಾರರು ಒತ್ತಾಯಿಸಿದರು.

Related Articles

Leave a Reply

Your email address will not be published. Required fields are marked *

Back to top button