ಸೇವಾಲಾಲ್ ಮಹಾರಾಜರ ಮೂರ್ತಿ ತೆರವು ಖಂಡನೆ: ಜು.21ರಂದು ಜಿಲ್ಲಾಧಿಕಾರಿ ಕಚೇರಿಗೆ ಮುತ್ತಿಗೆ ಎಚ್ಚರಿಕೆ
ಹೊಣೆಗಾರರ ವಿರುದ್ಧ ಕ್ರಮಕ್ಕೆ ಆಗ್ರಹ; ಬೇಡಿಕೆ ಈಡೇರದಿದ್ದರೆ ಶಾಸಕ ನಿವಾಸದ ಎದುರು ಧರಣಿ ಸತ್ಯಾಗ್ರಹದ ಎಚ್ಚರಿಕೆ

ತಾಲ್ಲೂಕಿನ ನಂದೂರು ಗ್ರಾಮದ ಬಾಪು ನಾಯಕ ಹಾಗೂ ಕಾನು ನಾಯಕ ತಾಂಡಾಕ್ಕೆ ಹೋಗುವ ರಸ್ತೆಯಲ್ಲಿ ಸಂತ ಶ್ರೀ ಸೇವಾಲಾಲ್ ಮಹಾರಾಜರ ಮೂರ್ತಿಯನ್ನು ತೆರವುಗೊಳಿಸಿರುವುದನ್ನು ಖಂಡಿಸಿ, ತಪ್ಪಿತಸ್ಥರ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವಂತೆ ಆಗ್ರಹಿಸಿ ಜುಲೈ 21ರಂದು ಜಿಲ್ಲಾಧಿಕಾರಿ ಕಚೇರಿಗೆ ಮುತ್ತಿಗೆ ಹಾಕಲಾಗುವುದು ಎಂದು ರಾಷ್ಟ್ರೀಯ ಗೋರ ಬಂಜಾರಾ ಮಹಾಸಭೆ ಜಿಲ್ಲಾ ಅಧ್ಯಕ್ಷ ಸಂತೋಷ್ ಆಡೆ ತಿಳಿಸಿದ್ದಾರೆ.
ನಗರದಲ್ಲಿ ಶುಕ್ರವಾರ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಈ ಹಿಂದೆ ಮೂರ್ತಿ ತೆರವುಗೊಳಿಸಿರುವುದನ್ನು ಖಂಡಿಸಿ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಲಾಗಿತ್ತು. ಬಳಿಕ ಮೂರ್ತಿಯನ್ನು ಅದೇ ಸ್ಥಳದಲ್ಲಿ ಮರುಸ್ಥಾಪನೆ ಮಾಡಲಾಗಿದೆ ಎಂಬ ಮಾಹಿತಿ ದೊರೆತಿದ್ದರೂ, ಮೂರ್ತಿ ತೆರವುಗೊಳಿಸಿದವರ ವಿರುದ್ಧ ಇದುವರೆಗೆ ಯಾವುದೇ ಕ್ರಮ ಕೈಗೊಳ್ಳಲಾಗಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು.
ಈ ವಿಷಯದ ಕುರಿತು ಜಿಲ್ಲಾಧಿಕಾರಿಗಳು, ರಸ್ತೆ ಗುತ್ತಿಗೆದಾರರು ಹಾಗೂ ಸಂಬಂಧಿತ ಅಧಿಕಾರಿಗಳನ್ನು ಹಲವು ಬಾರಿ ಸಂಪರ್ಕಿಸಿದರೂ ಸ್ಪಷ್ಟ ಉತ್ತರ ದೊರೆತಿಲ್ಲ. ಲೋಕೋಪಯೋಗಿ ಇಲಾಖೆ ಅಧಿಕಾರಿಗಳು ಮತ್ತು ರಸ್ತೆ ಗುತ್ತಿಗೆದಾರರ ವಿರುದ್ಧ ಕಾನೂನು ಕ್ರಮ ಜರುಗಿಸುವಂತೆ ಈಗಾಗಲೇ ಮನವಿ ಸಲ್ಲಿಸಿದ್ದರೂ ಯಾವುದೇ ಕ್ರಮವಾಗಿಲ್ಲ ಎಂದು ಆರೋಪಿಸಿದರು.
ಮೂರ್ತಿ ತೆರವು ಪ್ರಕರಣಕ್ಕೆ ಸಂಬಂಧಿಸಿದ ಗುತ್ತಿಗೆದಾರರ ಪರವಾನಗಿಯನ್ನು ರದ್ದುಪಡಿಸಿ, ಸಂಬಂಧಪಟ್ಟ ಅಧಿಕಾರಿಗಳ ವಿರುದ್ಧವೂ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದ ಅವರು, ಇದೇ ಬೇಡಿಕೆಗಳೊಂದಿಗೆ ಜುಲೈ 21ರಂದು ಬೆಳಿಗ್ಗೆ 11 ಗಂಟೆಗೆ ಜಿಲ್ಲಾಧಿಕಾರಿ ಕಚೇರಿಗೆ ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸಲಾಗುವುದು ಎಂದರು.
ಬೇಡಿಕೆಗಳಿಗೆ ಸ್ಪಂದಿಸದಿದ್ದರೆ ಮುಂದಿನ ಹಂತದಲ್ಲಿ ಸ್ಥಳೀಯ ಶಾಸಕನ ನಿವಾಸದ ಎದುರು ಧರಣಿ ಸತ್ಯಾಗ್ರಹ ಹಮ್ಮಿಕೊಳ್ಳಲಾಗುವುದು ಎಂದು ಎಚ್ಚರಿಕೆ ನೀಡಿದರು.
ಸುದ್ದಿಗೋಷ್ಠಿಯಲ್ಲಿ ನಾರಾಯಣ ಪವಾರ್, ರಾಜು ಪವಾರ್, ಶ್ರೀಮಂತ ಪವಾರ್, ಆಕಾಶ್ ರಾಠೋಡ್, ಶಂಕರ್ ರಾಠೋಡ್, ಸಂತೋಷ್ ಪವಾರ್, ಅಮಿತ್ ರಾಠೋಡ್, ಸಂತೋಷ್ ರಾಠೋಡ್, ವಸಂತ್ ರಾಠೋಡ್, ಶ್ರೀಮಂತ್ ಪವಾರ್ ಸೇರಿದಂತೆ ಹಲವರು ಉಪಸ್ಥಿತರಿದ್ದರು.



