ರಾಜಕೀಯಶಿಕ್ಷಣ

ವಿದ್ಯಾರ್ಥಿಗಳ ಮೇಲೆ ಲಾಠಿ ಹಾಗೂ ಅಶ್ರುವಾಯು ಪ್ರಯೋಗ ಖಂಡನೀಯ: ಸಿದ್ದು ಕೇರೂರ್

ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣದ ಪ್ರತಿಭಟನಾಕಾರರ ಮೇಲೆ ಪೊಲೀಸ್ ಕ್ರಮಕ್ಕೆ ಆಕ್ರೋಶ; ಪಾರದರ್ಶಕ ತನಿಖೆಗೆ ಒತ್ತಾಯ

ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ನ್ಯಾಯ ಒದಗಿಸುವಂತೆ ಆಗ್ರಹಿಸಿ ದೆಹಲಿಯಲ್ಲಿ ಪ್ರತಿಭಟನೆ ನಡೆಸುತ್ತಿದ್ದ ವಿದ್ಯಾರ್ಥಿಗಳ ಮೇಲೆ ಲಾಠಿ ಚಾರ್ಜ್ ಹಾಗೂ ಅಶ್ರುವಾಯು ಪ್ರಯೋಗ ನಡೆಸಿರುವುದನ್ನು ಕರ್ನಾಟಕ ದಲಿತ ಸಂಘರ್ಷ ಸಮಿತಿ (ಅಂಬೇಡ್ಕರ್ ವಾದ) ತಾಲೂಕು ಸಂಚಾಲಕ ಸಿದ್ದು ಕೇರೂರ್ ತೀವ್ರವಾಗಿ ಖಂಡಿಸಿದ್ದಾರೆ.

ಈ ಕುರಿತು ಪ್ರಕಟಣೆ ನೀಡಿರುವ ಅವರು, ವಿದ್ಯಾರ್ಥಿಗಳು ಸುಮಾರು 20 ದಿನಗಳಿಂದ ಶಾಂತಿಯುತವಾಗಿ ಪ್ರತಿಭಟನೆ ನಡೆಸುತ್ತಿದ್ದರು. ನಂತರ ಆಯೋಜಿಸಲಾದ ಪ್ರತಿಭಟನಾ ಮೆರವಣಿಗೆಯ ವೇಳೆ ಸಾವಿರಾರು ವಿದ್ಯಾರ್ಥಿಗಳು ಮತ್ತು ಯುವಜನರ ಮೇಲೆ ಲಾಠಿ ಚಾರ್ಜ್ ಹಾಗೂ ಅಶ್ರುವಾಯು ಪ್ರಯೋಗ ನಡೆಸಿರುವುದು ಪ್ರಜಾಪ್ರಭುತ್ವದ ಮೌಲ್ಯಗಳಿಗೆ ವಿರುದ್ಧವಾಗಿದೆ ಎಂದು ಆರೋಪಿಸಿದರು.

ಯುವಜನರ ಪ್ರಶ್ನೆಗಳಿಗೆ ಉತ್ತರ ನೀಡುವ ಬದಲು ಅವರ ಧ್ವನಿಯನ್ನು ಹತ್ತಿಕ್ಕುವ ಪ್ರಯತ್ನ ನಡೆಯುತ್ತಿದೆ. ನೀಟ್ ಪರೀಕ್ಷೆಯ ಪ್ರಶ್ನೆಪತ್ರಿಕೆ ಸೋರಿಕೆಯಿಂದ ವಿದ್ಯಾರ್ಥಿಗಳ ಭವಿಷ್ಯ ಮಾತ್ರವಲ್ಲ, ದೇಶದ ಪರೀಕ್ಷಾ ವ್ಯವಸ್ಥೆಯ ಮೇಲಿನ ಸಾರ್ವಜನಿಕರ ನಂಬಿಕೆಯೂ ಕುಸಿದಿದೆ. ಲಕ್ಷಾಂತರ ವಿದ್ಯಾರ್ಥಿಗಳಿಗೆ ನೀಟ್ ಪರೀಕ್ಷೆ ಹಲವು ವರ್ಷಗಳ ಪರಿಶ್ರಮ, ಕುಟುಂಬದ ಕನಸು ಹಾಗೂ ಭವಿಷ್ಯದ ಆಶಾಕಿರಣವಾಗಿದೆ ಎಂದು ಅವರು ಹೇಳಿದರು.

ಪ್ರಶ್ನೆಪತ್ರಿಕೆ ಸೋರಿಕೆ, ಆಡಳಿತ ವೈಫಲ್ಯ ಹಾಗೂ ಹೊಣೆಗಾರಿಕೆಯ ಕೊರತೆಯಿಂದ ವಿದ್ಯಾರ್ಥಿಗಳಲ್ಲಿ ನಿರಾಸೆ ಹೆಚ್ಚಾಗಿದೆ. ಈ ಸಂದರ್ಭದಲ್ಲಿ ಕೇಂದ್ರ ಸರ್ಕಾರ ದಮನದ ಮಾರ್ಗವನ್ನು ಅನುಸರಿಸುವ ಬದಲು ಪಾರದರ್ಶಕ ತನಿಖೆ ನಡೆಸಿ, ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಂಡು ವಿದ್ಯಾರ್ಥಿಗಳ ವಿಶ್ವಾಸವನ್ನು ಮರುಸ್ಥಾಪಿಸಬೇಕು ಎಂದು ಒತ್ತಾಯಿಸಿದರು.

ಈ ಪ್ರಕರಣದ ನೈತಿಕ ಹೊಣೆಗಾರಿಕೆಯನ್ನು ಕೇಂದ್ರ ಸರ್ಕಾರ ಹಾಗೂ ಸಂಬಂಧಪಟ್ಟ ಸಚಿವರು ಹೊತ್ತುಕೊಳ್ಳಬೇಕು. ದೇಶದ ವಿದ್ಯಾರ್ಥಿಗಳಿಗೆ ನ್ಯಾಯ ದೊರಕುವಂತೆ ಕ್ರಮವಹಿಸಬೇಕು. ವಿದ್ಯಾರ್ಥಿ ನಾಯಕರೊಂದಿಗೆ ಚರ್ಚೆ ನಡೆಸಿ ಅವರ ಸಮಸ್ಯೆಗಳಿಗೆ ಪರಿಹಾರ ಕಲ್ಪಿಸುವ ಮೂಲಕ ಪರಿಸ್ಥಿತಿಯನ್ನು ಶಾಂತಿಯುತವಾಗಿ ಬಗೆಹರಿಸಬೇಕು ಎಂದು ಸಿದ್ದು ಕೇರೂರ್ ಆಗ್ರಹಿಸಿದರು.

Related Articles

Leave a Reply

Your email address will not be published. Required fields are marked *

Back to top button