ಆರೋಗ್ಯ

ದಂಡೋತಿ ಮೊರಾರ್ಜಿ ವಸತಿ ಶಾಲೆಯಲ್ಲಿ ವಿದ್ಯಾರ್ಥಿಗಳ ಅಸ್ವಸ್ಥತೆ: ಆಹಾರ ವಿಷಬಾಧೆ ಶಂಕೆ, ಆಸ್ಪತ್ರೆಗೆ ದಾಖಲು

ರಾತ್ರಿಯೂಟದ ಬಳಿಕ ಹಲವು ವಿದ್ಯಾರ್ಥಿಗಳಿಗೆ ಹೊಟ್ಟೆನೋವು; ಜಿಲ್ಲಾಧಿಕಾರಿ ಆಸ್ಪತ್ರೆಗೆ ಭೇಟಿ – ತನಿಖೆಗೆ ಆದೇಶ, ರಾಜಕೀಯ ಆರೋಪ-ಪ್ರತ್ಯಾರೋಪಕ್ಕೂ ವೇದಿಕೆ

ಚಿತ್ತಾಪುರ ತಾಲ್ಲೂಕಿನ ದಂಡೋತಿ ಗ್ರಾಮದಲ್ಲಿರುವ ಅಲ್ಪಸಂಖ್ಯಾತರ ಇಲಾಖೆಯ ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ಗುರುವಾರ ರಾತ್ರಿ ಊಟ ಸೇವಿಸಿದ ಬಳಿಕ ಹಲವು ವಿದ್ಯಾರ್ಥಿಗಳು ಹೊಟ್ಟೆನೋವು ಹಾಗೂ ಅಸ್ವಸ್ಥತೆಯಿಂದ ಬಳಲಿದ ಘಟನೆ ನಡೆದಿದೆ.

ಆರಂಭದಲ್ಲಿ ಕೆಲ ವಿದ್ಯಾರ್ಥಿಗಳಿಗೆ ಹೊಟ್ಟೆನೋವು ಕಾಣಿಸಿಕೊಂಡಿದ್ದು, ನಂತರ ಇನ್ನೂ ಹಲವರಲ್ಲಿ ಇದೇ ರೀತಿಯ ಲಕ್ಷಣಗಳು ಕಂಡುಬಂದ ಹಿನ್ನೆಲೆಯಲ್ಲಿ ಶಾಲಾ ಆಡಳಿತ ತಕ್ಷಣವೇ ಅವರನ್ನು ಗ್ರಾಮದ ಸರ್ಕಾರಿ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಕರೆದೊಯ್ದು ಚಿಕಿತ್ಸೆ ನೀಡಿತು. ಬಳಿಕ ಹೆಚ್ಚಿನ ಚಿಕಿತ್ಸೆಗೆ ಚಿತ್ತಾಪುರ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಯಿತು.

ಘಟನೆಯ ಮಾಹಿತಿ ತಿಳಿಯುತ್ತಿದ್ದಂತೆ ಅಲ್ಪಸಂಖ್ಯಾತರ ಇಲಾಖೆ, ಕಂದಾಯ, ಶಿಕ್ಷಣ ಹಾಗೂ ಸಮಾಜ ಕಲ್ಯಾಣ ಇಲಾಖೆಯ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ವಿದ್ಯಾರ್ಥಿಗಳ ಚಿಕಿತ್ಸೆಗೆ ಅಗತ್ಯ ಕ್ರಮ ಕೈಗೊಂಡರು. ಆಂಬುಲೆನ್ಸ್ ಮೂಲಕ ಮಕ್ಕಳನ್ನು ಆಸ್ಪತ್ರೆಗೆ ಸ್ಥಳಾಂತರಿಸಿ ಚಿಕಿತ್ಸೆ ಮುಂದುವರಿಸಲಾಯಿತು.

ಆಹಾರ ಸೇವನೆಯ ಬಳಿಕ ವಿದ್ಯಾರ್ಥಿಗಳು ಅಸ್ವಸ್ಥಗೊಂಡಿರುವುದರಿಂದ ಆಹಾರ ವಿಷಬಾಧೆಯ ಶಂಕೆ ವ್ಯಕ್ತವಾಗಿದ್ದು, ಘಟನೆಯ ನಿಖರ ಕಾರಣ ಪತ್ತೆಹಚ್ಚಲು ಅಧಿಕಾರಿಗಳು ತನಿಖೆ ಆರಂಭಿಸಿದ್ದಾರೆ. ವೈದ್ಯರ ಪ್ರಕಾರ ಚಿಕಿತ್ಸೆ ಬಳಿಕ ವಿದ್ಯಾರ್ಥಿಗಳ ಆರೋಗ್ಯದಲ್ಲಿ ಚೇತರಿಕೆ ಕಂಡುಬಂದಿದ್ದು, ಮುನ್ನೆಚ್ಚರಿಕೆ ಕ್ರಮವಾಗಿ ಎಲ್ಲರ ಆರೋಗ್ಯದ ಮೇಲೆ ನಿರಂತರ ನಿಗಾ ವಹಿಸಲಾಗಿದೆ.

ಘಟನೆಯ ಮಾಹಿತಿ ಪಡೆದ ಜಿಲ್ಲಾಧಿಕಾರಿ ಇಕ್ರಂ ಶರೀಫ್ ಆಸ್ಪತ್ರೆಗೆ ಭೇಟಿ ನೀಡಿ ವಿದ್ಯಾರ್ಥಿಗಳ ಆರೋಗ್ಯ ವಿಚಾರಿಸಿದರು. ಈ ವೇಳೆ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಅಧಿಕಾರಿಗಳೂ ಉಪಸ್ಥಿತರಿದ್ದರು.

ಈ ಘಟನೆಗೆ ಸಂಬಂಧಿಸಿದಂತೆ ಬಿಜೆಪಿ ಮುಖಂಡ ಮಣಿಕಂಠ ರಾಠೋಡ್ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು, ಸರ್ಕಾರದ ಆಡಳಿತ ವೈಫಲ್ಯದಿಂದಲೇ ವಿದ್ಯಾರ್ಥಿಗಳು ಅಸ್ವಸ್ಥರಾಗಿದ್ದಾರೆ ಎಂದು ಆರೋಪಿಸಿದ್ದಾರೆ. ತಪ್ಪಿತಸ್ಥ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಹಾಗೂ ವಿದ್ಯಾರ್ಥಿಗಳಿಗೆ ಅತ್ಯುತ್ತಮ ಚಿಕಿತ್ಸೆ ಒದಗಿಸಬೇಕು ಎಂದು ಅವರು ಒತ್ತಾಯಿಸಿದ್ದಾರೆ.

ಇದೇ ವಿಚಾರವಾಗಿ ಬಿಜೆಪಿ ಕೂಡ ಸಾಮಾಜಿಕ ಜಾಲತಾಣದಲ್ಲಿ ಪ್ರತಿಕ್ರಿಯೆ ನೀಡಿದ್ದು, ವಸತಿ ಶಾಲೆಯ ಆಹಾರ ಗುಣಮಟ್ಟ ಮತ್ತು ಕುಡಿಯುವ ನೀರಿನ ವ್ಯವಸ್ಥೆಯ ಕುರಿತು ಪ್ರಶ್ನೆ ಎತ್ತಿ, ನಿರ್ಲಕ್ಷ್ಯ ತೋರಿದವರ ವಿರುದ್ಧ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿದೆ.

ಇನ್ನೊಂದೆಡೆ, ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್ ಖರ್ಗೆ ಜಿಲ್ಲಾಡಳಿತದಿಂದ ಮಾಹಿತಿ ಪಡೆದಿದ್ದು, ಪ್ರಾಥಮಿಕ ವರದಿ ಪ್ರಕಾರ ರಾತ್ರಿ ತಯಾರಿಸಿದ ಅನ್ನ ಸಮರ್ಪಕವಾಗಿ ಬೇಯದ ಕಾರಣ ಕೆಲ ವಿದ್ಯಾರ್ಥಿಗಳಿಗೆ ಅಜೀರ್ಣದ ಸಮಸ್ಯೆ ಉಂಟಾಗಿರುವ ಸಾಧ್ಯತೆ ಇದೆ ಎಂದು ತಿಳಿಸಿದ್ದಾರೆ. ಅಂತಿಮ ವರದಿ ಬಂದ ಬಳಿಕ ನಿರ್ಲಕ್ಷ್ಯ ವಹಿಸಿದವರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದು ಅವರು ಸ್ಪಷ್ಟಪಡಿಸಿದ್ದಾರೆ.

ವಸತಿ ನಿಲಯಗಳಲ್ಲಿನ ಆಹಾರದ ಗುಣಮಟ್ಟ ಮತ್ತು ವಿದ್ಯಾರ್ಥಿಗಳ ಆರೋಗ್ಯದ ಬಗ್ಗೆ ಯಾವುದೇ ಲೋಪವಾಗದಂತೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸಚಿವರು ನಿರ್ದೇಶನ ನೀಡಿದ್ದಾರೆ.

Related Articles

Leave a Reply

Your email address will not be published. Required fields are marked *

Back to top button