ಸೋನಂ ವಾಂಗ್ಚುಕ್ ಅವರನ್ನು ಬಲವಂತವಾಗಿ ಆಸ್ಪತ್ರೆಗೆ ದಾಖಲಿಸಿದ್ದನ್ನು ಖಂಡಿಸಿದ ಎಐಡಿವೈಒ
ಶಾಂತಿಯುತ ಪ್ರತಿಭಟನೆಗೆ ಅವಕಾಶ ನೀಡುವಂತೆ ಆಗ್ರಹ • ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ವಿರುದ್ಧ ಕ್ರಮಕ್ಕೆ ಒತ್ತಾಯ

ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣದ ವಿರುದ್ಧ ಕ್ರಮ ಕೈಗೊಳ್ಳಬೇಕು ಹಾಗೂ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿ ಉಪವಾಸ ಸತ್ಯಾಗ್ರಹ ನಡೆಸುತ್ತಿದ್ದ ಪರಿಸರವಾದಿ, ಶಿಕ್ಷಣ ತಜ್ಞ ಹಾಗೂ ಸಾಮಾಜಿಕ ಹೋರಾಟಗಾರ ಸೋನಂ ವಾಂಗ್ಚುಕ್ ಅವರನ್ನು ಪೊಲೀಸರು ಬಲವಂತವಾಗಿ ಪ್ರತಿಭಟನಾ ಸ್ಥಳದಿಂದ ಆಸ್ಪತ್ರೆಗೆ ದಾಖಲಿಸಿರುವ ಕ್ರಮವನ್ನು ಆಲ್ ಇಂಡಿಯಾ ಡೆಮಾಕ್ರಟಿಕ್ ಯೂತ್ ಆರ್ಗನೈಸೇಶನ್ (ಎಐಡಿವೈಒ) ತೀವ್ರವಾಗಿ ಖಂಡಿಸಿದೆ.
ಸಂಘಟನೆಯ ಜಿಲ್ಲಾ ಅಧ್ಯಕ್ಷ ಜಗನ್ನಾಥ ಎಸ್.ಎಚ್. ಪ್ರಕಟಣೆ ಮೂಲಕ ಪ್ರತಿಕ್ರಿಯಿಸಿ, ದೆಹಲಿಯ ಜಂತರ್ ಮಂತರ್‌ನಲ್ಲಿ ಶಾಂತಿಯುತವಾಗಿ ನಡೆಯುತ್ತಿದ್ದ ಪ್ರತಿಭಟನೆಯನ್ನು ತಡೆಗಟ್ಟಲು ಹೆಚ್ಚಿನ ಸಂಖ್ಯೆಯಲ್ಲಿ ಪೊಲೀಸರನ್ನು ನಿಯೋಜಿಸಿರುವುದು ಪ್ರಜಾಪ್ರಭುತ್ವದ ಮೌಲ್ಯಗಳಿಗೆ ವಿರುದ್ಧವಾಗಿದೆ ಎಂದು ಆರೋಪಿಸಿದರು.
ಪ್ರಜಾಪ್ರಭುತ್ವ ರಾಷ್ಟ್ರದಲ್ಲಿ ಶಾಂತಿಯುತವಾಗಿ ಪ್ರತಿಭಟನೆ ನಡೆಸುವವರೊಂದಿಗೆ ಸರ್ಕಾರ ಸಂವಾದ ನಡೆಸಿ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳಬೇಕಾದರೆ, ಪ್ರತಿಭಟನಾಕಾರರನ್ನು ಬಲವಂತವಾಗಿ ತೆರವುಗೊಳಿಸಿರುವುದು ಖಂಡನೀಯ ಎಂದು ಅವರು ಹೇಳಿದರು.
ನೀಟ್ ಸೇರಿದಂತೆ ವಿವಿಧ ರಾಷ್ಟ್ರೀಯ ಪರೀಕ್ಷೆಗಳಲ್ಲಿ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣಗಳನ್ನು ಸಂಪೂರ್ಣವಾಗಿ ತಡೆಯಬೇಕು, ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಹಾಗೂ ಪರೀಕ್ಷಾ ವ್ಯವಸ್ಥೆಯಲ್ಲಿ ಪಾರದರ್ಶಕತೆ ಮತ್ತು ವಿಶ್ವಾಸಾರ್ಹತೆಯನ್ನು ಪುನಃಸ್ಥಾಪಿಸಬೇಕು ಎಂದು ಒತ್ತಾಯಿಸಿದರು.
ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಬೇಕು, ಪರೀಕ್ಷಾ ವ್ಯವಸ್ಥೆಯಲ್ಲಿ ಅಗತ್ಯ ಸುಧಾರಣೆಗಳನ್ನು ಜಾರಿಗೊಳಿಸಬೇಕು ಹಾಗೂ ಶಾಂತಿಯುತ ಪ್ರತಿಭಟನೆಗಳ ಮೇಲಿನ ಪೊಲೀಸ್ ಕ್ರಮವನ್ನು ತಕ್ಷಣ ನಿಲ್ಲಿಸಬೇಕು ಎಂದು ಎಐಡಿವೈಒ ಆಗ್ರಹಿಸಿದೆ.



