ಕಲಬುರಗಿಯಲ್ಲಿ ಆರೋಗ್ಯ ಇಲಾಖೆಯ ಪ್ರಗತಿ ಪರಿಶೀಲನೆ; ಗುತ್ತಿಗೆ ವೈದ್ಯಾಧಿಕಾರಿಗಳಿಗೆ ನೇಮಕಾತಿ ಆದೇಶ ವಿತರಣೆ
ಪ್ರಧಾನ ಕಾರ್ಯದರ್ಶಿ ರಿತ್ವಿಕ್ ಪಾಂಡೆ ನೇತೃತ್ವದಲ್ಲಿ ಸಭೆ; ಆರೋಗ್ಯ ಸೇವೆಗಳ ಬಲವರ್ಧನೆಗೆ ಒತ್ತು

ನಗರದ ಜಿಲ್ಲಾ ಪಂಚಾಯತ್‌ನ ನೂತನ ಸಭಾಂಗಣದಲ್ಲಿ ಶುಕ್ರವಾರ ಆರೋಗ್ಯ ಇಲಾಖೆಯ ಪ್ರಗತಿ ಪರಿಶೀಲನಾ ಸಭೆ ನಡೆಯಿತು. ಆರೋಗ್ಯ ಇಲಾಖೆಯ ಪ್ರಧಾನ ಕಾರ್ಯದರ್ಶಿ ರಿತ್ವಿಕ್ ಪಾಂಡೆ, ಐಎಎಸ್ ಅವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಜಿಲ್ಲೆಯ ವಿವಿಧ ಆರೋಗ್ಯ ಕಾರ್ಯಕ್ರಮಗಳ ಪ್ರಗತಿ ಕುರಿತು ಸಮಗ್ರ ಪರಿಶೀಲನೆ ನಡೆಸಲಾಯಿತು.
ಸಭೆಯಲ್ಲಿ ಜಿಲ್ಲಾಧಿಕಾರಿ ಇಕ್ರಮ್ ಶರೀಫ್, ಐಎಎಸ್, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ರಾಹುಲ್ ಎಸ್. ಸಂಕನೂರ್, ಐಎಎಸ್ ಸೇರಿದಂತೆ ಹಿರಿಯ ಅಧಿಕಾರಿಗಳು ಭಾಗವಹಿಸಿದರು. ಇದೇ ಸಂದರ್ಭದಲ್ಲಿ ಗುತ್ತಿಗೆ ವೈದ್ಯಾಧಿಕಾರಿಗಳಿಗೆ ನೇಮಕಾತಿ ಆದೇಶಗಳನ್ನು ವಿತರಿಸಿ, ಆರೋಗ್ಯ ಸೇವೆಗಳನ್ನು ಮತ್ತಷ್ಟು ಪರಿಣಾಮಕಾರಿಯಾಗಿ ಜನರಿಗೆ ತಲುಪಿಸುವಂತೆ ಸೂಚಿಸಲಾಯಿತು.
ಸಭೆಯಲ್ಲಿ ಕಲಬುರಗಿ ವಿಭಾಗೀಯ ಜಂಟಿ ನಿರ್ದೇಶಕ ಡಾ. ಶಂಕ್ರಪ್ಪ ಮೈಲಾರಿ, ವಿಭಾಗೀಯ ಉಪ ನಿರ್ದೇಶಕ (ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸೇವೆಗಳು) ಡಾ. ಎ.ಎಸ್. ರುದ್ರವಾಡಿ, ಡಾ. ಶರಣಬಸಪ್ಪ ಗಣಜಲ್ ಖೇಡ್, ಜಿಲ್ಲಾ ಆರೋಗ್ಯಾಧಿಕಾರಿ ಡಾ. ಶರಣಬಸಪ್ಪ ಕ್ಯಾತನಾಳ, ಜಿಲ್ಲಾ ಆರ್‌ಸಿಎಚ್ ಅಧಿಕಾರಿ ಡಾ. ಸಿದ್ದು ಪಾಟೀಲ್, ಜಿಲ್ಲಾ ಮಲೇರಿಯಾ ನಿರ್ಮೂಲನಾಧಿಕಾರಿ ಡಾ. ವಿವೇಕಾನಂದ ರೆಡ್ಡಿ, ಜಿಲ್ಲಾ ಕುಷ್ಠರೋಗ ನಿರ್ಮೂಲನಾಧಿಕಾರಿ ಡಾ. ರವಿಕಾಂತಿ ಕ್ಯಾತನಾಳ ಸೇರಿದಂತೆ ಇಲಾಖೆಯ ವಿವಿಧ ಕಾರ್ಯಕ್ರಮಾಧಿಕಾರಿಗಳು ಹಾಗೂ ಸಿಬ್ಬಂದಿ ಉಪಸ್ಥಿತರಿದ್ದರು.
ಸಭೆಯಲ್ಲಿ ಜಿಲ್ಲೆಯ ಆರೋಗ್ಯ ಸೇವೆಗಳ ಗುಣಮಟ್ಟ ಹೆಚ್ಚಿಸುವುದು, ವೈದ್ಯಕೀಯ ಸಿಬ್ಬಂದಿಯ ಕಾರ್ಯಕ್ಷಮತೆ ಮತ್ತು ಸಾರ್ವಜನಿಕರಿಗೆ ಆರೋಗ್ಯ ಸೇವೆಗಳನ್ನು ಇನ್ನಷ್ಟು ಪರಿಣಾಮಕಾರಿಯಾಗಿ ತಲುಪಿಸುವ ಕುರಿತು ಅಧಿಕಾರಿಗಳೊಂದಿಗೆ ಚರ್ಚೆ ನಡೆಸಲಾಯಿತು.



