ಜೇವರ್ಗಿ–ಯಡ್ರಾಮಿ ಬರಪೀಡಿತ ಪ್ರದೇಶ ಘೋಷಣೆಗೆ ಎತ್ತಿನ ಬಂಡಿ ಪ್ರತಿಭಟನೆ
ರೈತರ ಸಂಕಷ್ಟ ಪರಿಹಾರಕ್ಕೆ ಸರ್ಕಾರ ತಕ್ಷಣ ಕ್ರಮ ಕೈಗೊಳ್ಳಬೇಕು ಎಂದು ಜೆಡಿಎಸ್ ಆಗ್ರಹ

ಜೇವರ್ಗಿ ಪಟ್ಟಣದ ರಿಲಯನ್ಸ್ ಪೆಟ್ರೋಲ್ ಬಂಕ್‌ನಿಂದ ಬಸವೇಶ್ವರ ವೃತ್ತದವರೆಗೆ ನೂರಾರು ಎತ್ತಿನ ಬಂಡಿಗಳೊಂದಿಗೆ ಜೆಡಿಎಸ್ ರಾಜ್ಯ ಘಟಕದ ಕಾರ್ಯಾಧ್ಯಕ್ಷ ಹಾಗೂ ಮಾಜಿ ಶಾಸಕ ದೊಡ್ಡಪ್ಪಗೌಡ ಪಾಟೀಲ್ ನರಿಬೋಳ ಅವರ ನೇತೃತ್ವದಲ್ಲಿ ರೈತರು ಬೃಹತ್ ಪ್ರತಿಭಟನೆ ನಡೆಸಿದರು. ಜೇವರ್ಗಿ ಮತ್ತು ಯಡ್ರಾಮಿ ತಾಲ್ಲೂಕುಗಳನ್ನು ತಕ್ಷಣವೇ ಬರಪೀಡಿತ ಪ್ರದೇಶಗಳೆಂದು ಘೋಷಿಸಿ ರೈತರ ಸಂಕಷ್ಟ ನಿವಾರಣೆಗೆ ಸರ್ಕಾರ ಮುಂದಾಗಬೇಕು ಎಂದು ಪ್ರತಿಭಟನಾಕಾರರು ಒತ್ತಾಯಿಸಿದರು.
ಈ ಸಂದರ್ಭದಲ್ಲಿ ಜೆಡಿಎಸ್ ತಾಲ್ಲೂಕು ಅಧ್ಯಕ್ಷ ಎಂ.ಡಿ. ರೌಫ್ ಹವಾಲ್ದಾರ್ ಅವರು ತಹಶೀಲ್ದಾರ್ ಮುಖಾಂತರ ರಾಜ್ಯಪಾಲರಿಗೆ ಮನವಿ ಸಲ್ಲಿಸಿ, ಮಳೆ ಕೊರತೆಯಿಂದ ಬೆಳೆ ಹಾನಿಯಾಗಿ ರೈತರು ತೀವ್ರ ಆರ್ಥಿಕ ಸಂಕಷ್ಟಕ್ಕೆ ಸಿಲುಕಿದ್ದಾರೆ. ಸರ್ಕಾರ ತಕ್ಷಣ ಪರಿಸ್ಥಿತಿಯನ್ನು ಪರಿಶೀಲಿಸಿ ಬರ ಘೋಷಣೆ ಮಾಡುವುದರ ಜೊತೆಗೆ ಸೂಕ್ತ ಪರಿಹಾರ ಒದಗಿಸಬೇಕು ಎಂದು ಆಗ್ರಹಿಸಿದರು.
ಮನವಿಯಲ್ಲಿ ರೈತರ ಸಂಪೂರ್ಣ ಸಾಲಮನ್ನಾ, ಕಾಲುವೆಗಳಿಗೆ ನೀರು ಹರಿಸುವುದು, ಕಬ್ಬಿನ ಬಾಕಿ ಬಿಲ್ ಬಿಡುಗಡೆ, ಬೆಳೆ ವಿಮೆ ಪರಿಹಾರ ವಿತರಣೆ, ರಸಗೊಬ್ಬರ ಸಮರ್ಪಕ ಪೂರೈಕೆ, ವಿದ್ಯಾರ್ಥಿಗಳಿಗೆ ಸಮಯಕ್ಕೆ ಸರಿಯಾದ ಬಸ್ ವ್ಯವಸ್ಥೆ, ರೈತರ ಜಮೀನುಗಳಿಗೆ ಕನಿಷ್ಠ ಏಳು ಗಂಟೆಗಳ ವಿದ್ಯುತ್ ಪೂರೈಕೆ ಹಾಗೂ ಗ್ರಾಮೀಣ ಮತ್ತು ನಗರ ಪ್ರದೇಶಗಳಲ್ಲಿ ಸಮರ್ಪಕ ವಿದ್ಯುತ್ ವ್ಯವಸ್ಥೆ ಕಲ್ಪಿಸುವಂತೆ ಒತ್ತಾಯಿಸಲಾಯಿತು.
ಇದೇ ವೇಳೆ ನರಿಬೋಳ–ಚಾಮನೂರ ಸೇತುವೆ ಕಾಮಗಾರಿಯನ್ನು ತಕ್ಷಣ ಆರಂಭಿಸಬೇಕು, ಅಪೂರ್ಣ ರಸ್ತೆ ಹಾಗೂ ಸೇತುವೆ ಕಾಮಗಾರಿಗಳನ್ನು ಶೀಘ್ರ ಪೂರ್ಣಗೊಳಿಸಬೇಕು, ಕಳಪೆ ಕಾಮಗಾರಿಗಳ ತನಿಖೆ ನಡೆಸಬೇಕು ಹಾಗೂ ವೃದ್ಧಾಪ್ಯ ವೇತನ, ಅಂಗವಿಕಲರ ಭತ್ಯೆ ಮತ್ತು ವಿಧವಾ ವೇತನಗಳ ಬಾಕಿ ಹಣವನ್ನು ತಕ್ಷಣ ಬಿಡುಗಡೆ ಮಾಡಬೇಕು ಎಂದು ಸರ್ಕಾರವನ್ನು ಆಗ್ರಹಿಸಲಾಯಿತು.
ಪ್ರತಿಭಟನೆಯಲ್ಲಿ ವಿವಿಧ ಗ್ರಾಮಗಳ ರೈತರು, ರೈತಪರ ಹೋರಾಟಗಾರರು, ರೈತ ಸಂಘಟನೆಗಳ ಮುಖಂಡರು, ಜೆಡಿಎಸ್ ಮುಖಂಡರು ಹಾಗೂ ಪದಾಧಿಕಾರಿಗಳು ಭಾಗವಹಿಸಿ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.



