ಶಿಕ್ಷಣ

ಮಕ್ಕಳಲ್ಲಿ ಪರಿಸರ ಜಾಗೃತಿ ಬೆಳೆಸೋಣ: ಸಾಹಿತ್ಯ ಸೇವಕ ಧರ್ಮಣ್ಣ ಧನ್ನಿ ಕರೆ

ಶಾಲೆಯಲ್ಲಿ ಪರಿಸರ ಜಾಗೃತಿ, ಗುರು ವಂದನೆ ಹಾಗೂ ಸಸಿ ನೆಡುವ ಕಾರ್ಯಕ್ರಮಕ್ಕೆ ಉತ್ತಮ ಸ್ಪಂದನೆ

ಇಂದಿನ ಮಕ್ಕಳಲ್ಲಿ ಪರಿಸರದ ಬಗ್ಗೆ ಜಾಗೃತಿ ಮತ್ತು ಪ್ರಕೃತಿ ಸಂರಕ್ಷಣೆಯ ಮನೋಭಾವ ಬೆಳೆಸುವುದು ಅತ್ಯಗತ್ಯ ಎಂದು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಗೌರವ ಕಾರ್ಯದರ್ಶಿ ಧರ್ಮಣ್ಣ ಎಚ್. ಧನ್ನಿ ಅಭಿಪ್ರಾಯಪಟ್ಟರು.

ಜಿಲ್ಲೆಯ ಆಳಂದ ತಾಲೂಕಿನ ಕಡಗಂಚಿ ಗ್ರಾಮದ ವಿದ್ಯಾವರ್ಧಕ ಸಂಘದ ಪ್ರೌಢಶಾಲೆಯಲ್ಲಿ ಸ್ಪೂರ್ತಿ ಗ್ರಾಮೀಣ ಅಭಿವೃದ್ಧಿ ಮತ್ತು ಶಿಕ್ಷಣ ಸೇವಾ ಸಂಸ್ಥೆ ಆಯೋಜಿಸಿದ್ದ ಸಸಿ ನೆಡುವ ಹಾಗೂ ಗುರು ವಂದನಾ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಮಾತನಾಡಿದ ಅವರು, ಆಧುನಿಕ ಜೀವನಶೈಲಿಯ ನಡುವೆ ಶಿಕ್ಷಣದ ಜೊತೆಗೆ ಸಾಮಾಜಿಕ ಅರಿವು, ಪರಿಸರ ಪ್ರಜ್ಞೆ ಮತ್ತು ನೈತಿಕ ಮೌಲ್ಯಗಳನ್ನು ಮಕ್ಕಳಲ್ಲಿ ಬೆಳೆಸಬೇಕು ಎಂದರು.

ಮಕ್ಕಳಿಗೆ ಇತಿಹಾಸ, ಸಂಸ್ಕೃತಿ ಮತ್ತು ಜೀವನ ಮೌಲ್ಯಗಳನ್ನು ಪರಿಚಯಿಸುವುದರ ಜೊತೆಗೆ ದಾಸರು ಮತ್ತು ಶರಣರ ವಚನಗಳ ಮಹತ್ವವನ್ನು ತಿಳಿಸಬೇಕು. ಬುದ್ಧ, ಬಸವಣ್ಣ ಮತ್ತು ಡಾ. ಬಿ.ಆರ್. ಅಂಬೇಡ್ಕರ್ ಅವರ ತತ್ವ-ಸಿದ್ಧಾಂತಗಳನ್ನು ಜೀವನದಲ್ಲಿ ಅಳವಡಿಸಿಕೊಳ್ಳಬೇಕು. ತಂದೆ-ತಾಯಿ, ಗುರು-ಹಿರಿಯರನ್ನು ಗೌರವಿಸುವ ಸಂಸ್ಕಾರವನ್ನು ಮಕ್ಕಳಲ್ಲಿ ಬೆಳೆಸಬೇಕೆಂದು ಅವರು ಕರೆ ನೀಡಿದರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಶಾಲೆಯ ಮುಖ್ಯಗುರು ಲಿಂಗರಾಜ ಎಸ್. ಪಾಟೀಲ ಮಾತನಾಡಿ, ವಿದ್ಯಾರ್ಥಿಗಳು ತಮ್ಮ ಗುರುಗಳನ್ನು ಸದಾ ಸ್ಮರಿಸಿ ಗೌರವಿಸುವ ಗುಣವನ್ನು ಬೆಳೆಸಿಕೊಳ್ಳಬೇಕು. ಉತ್ತಮ ಶಿಕ್ಷಣದ ಮೂಲಕ ಉಜ್ವಲ ಭವಿಷ್ಯ ರೂಪಿಸಿಕೊಳ್ಳಬೇಕೆಂದು ಸಲಹೆ ನೀಡಿದರು.

ಸ್ಪೂರ್ತಿ ಗ್ರಾಮೀಣ ಅಭಿವೃದ್ಧಿ ಮತ್ತು ಶಿಕ್ಷಣ ಸೇವಾ ಸಂಸ್ಥೆಯ ಕಾರ್ಯದರ್ಶಿ ಕರಬಸಪ್ಪ ಭೂಸನೂರ ಕಾರ್ಯಕ್ರಮದ ಉದ್ದೇಶವನ್ನು ವಿವರಿಸಿದರು.

ಈ ಸಂದರ್ಭದಲ್ಲಿ 2005ನೇ ಸಾಲಿನ ಹಳೆಯ ವಿದ್ಯಾರ್ಥಿಗಳು ಗುರು ವಂದನಾ ಕಾರ್ಯಕ್ರಮವನ್ನು ಆಯೋಜಿಸಿ ಶಿಕ್ಷಕರನ್ನು ಸನ್ಮಾನಿಸಿದರು. ಬಳಿಕ ಶಾಲಾ ಆವರಣದಲ್ಲಿ ಸಸಿ ನೆಡುವ ಮೂಲಕ ಪರಿಸರ ಸಂರಕ್ಷಣೆಯ ಸಂಕಲ್ಪ ಕೈಗೊಳ್ಳಲಾಯಿತು.

ಕಾರ್ಯಕ್ರಮದಲ್ಲಿ ಶರಣಬಸಪ್ಪ ನರೋಣಿ, ಬಾಬುರಾವ್ ಹೊಸಕುರಬ, ಚಂದ್ರಕಲಾ, ಅಂದಪ್ಪ ಡೋಣಿ, ಮಹಾದೇವಪ್ಪ ಹೊಸಳ್ಳಿ, ರಾಜಕುಮಾರ ಜವಳಿ, ರಾಜೇಶ್ ಜಮಾದಾರ, ಮಹೇಶ್ ಅಲ್ದಿ, ಮಲ್ಲಿಕಾರ್ಜುನ ಜವಳಿ, ಶಾಮರಾವ್ ಹೊಸಕುರಬ, ಶಾಂತಕುಮಾರ ತಡಕಲ್, ವಿಶ್ವನಾಥ, ಮಲ್ಲು ಸುಂಟನೂರ, ಭೀಮಾ ಗೋಮದ, ಬೀರಣ್ಣ ಅರಬ್ ಸೇರಿದಂತೆ ಅನೇಕ ಗಣ್ಯರು, ಶಿಕ್ಷಕರು, ವಿದ್ಯಾರ್ಥಿಗಳು ಹಾಗೂ ಗ್ರಾಮಸ್ಥರು ಉಪಸ್ಥಿತರಿದ್ದರು.

Related Articles

Leave a Reply

Your email address will not be published. Required fields are marked *

Back to top button