ಸಂಸತ್ ಚಲೋ ಪ್ರತಿಭಟನಾಕಾರರ ಮೇಲೆ ಲಾಠಿ ಪ್ರಹಾರ ಖಂಡಿಸಿ ವಿದ್ಯಾರ್ಥಿಗಳ ಪ್ರತಿಭಟನೆ
ಚಿತ್ತಾಪುರದಲ್ಲಿ ಎಐಡಿಎಸ್ಒ ನೇತೃತ್ವದಲ್ಲಿ ಪ್ರತಿಭಟನೆ; ಶಿಕ್ಷಣ ಸಚಿವರ ರಾಜೀನಾಮೆಗೆ ಆಗ್ರಹ

ಸಂಸತ್ ಚಲೋ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ಪ್ರತಿಭಟನಾಕಾರರ ಮೇಲೆ ನಡೆದ ಲಾಠಿ ಪ್ರಹಾರವನ್ನು ಖಂಡಿಸಿ ಎಐಡಿಎಸ್ಒ (AIDSO) ನೇತೃತ್ವದಲ್ಲಿ ಚಿತ್ತಾಪುರ ಪಟ್ಟಣದಲ್ಲಿ ವಿದ್ಯಾರ್ಥಿಗಳು ಸೋಮವಾರ ಪ್ರತಿಭಟನೆ ನಡೆಸಿದರು.
ಪಟ್ಟಣದ ಲಾಡ್ಜಿಂಗ್ ಕ್ರಾಸ್ ಬಳಿ ನಡೆದ ಪ್ರತಿಭಟನೆಯಲ್ಲಿ ಎಐಡಿಎಸ್ಒ ಜಿಲ್ಲಾ ಕಾರ್ಯದರ್ಶಿ ವೆಂಕಟೇಶ್ ದೇವದುರ್ಗ ಮಾತನಾಡಿ, ನೀಟ್ ಪರೀಕ್ಷಾ ವ್ಯವಸ್ಥೆಯು ದೇಶದ ಲಕ್ಷಾಂತರ ಬಡ ಹಾಗೂ ಮಧ್ಯಮ ವರ್ಗದ ವಿದ್ಯಾರ್ಥಿಗಳ ಭವಿಷ್ಯಕ್ಕೆ ಧಕ್ಕೆ ಉಂಟುಮಾಡುತ್ತಿದೆ ಎಂದು ಆರೋಪಿಸಿದರು. ನೀಟ್ ಪರೀಕ್ಷೆಯ ಅಕ್ರಮಗಳ ಹಿನ್ನೆಲೆಯಲ್ಲಿ ಅನೇಕ ವಿದ್ಯಾರ್ಥಿಗಳು ಸಂಕಷ್ಟಕ್ಕೆ ಸಿಲುಕಿದ್ದು, ಸರ್ಕಾರವು ಸಮಸ್ಯೆಯನ್ನು ಗಂಭೀರವಾಗಿ ಪರಿಗಣಿಸದೆ ನಿರ್ಲಕ್ಷ್ಯ ವಹಿಸಿದೆ ಎಂದು ಟೀಕಿಸಿದರು.
ಶಾಂತಿಯುತವಾಗಿ ಪ್ರತಿಭಟನೆ ನಡೆಸುತ್ತಿದ್ದವರ ಮೇಲೆ ಪೊಲೀಸರು ಲಾಠಿ ಪ್ರಹಾರ ನಡೆಸಿರುವುದು ಪ್ರಜಾಪ್ರಭುತ್ವದ ಮೌಲ್ಯಗಳಿಗೆ ವಿರುದ್ಧವಾಗಿದೆ. ದೇಶದ ಪ್ರತಿಯೊಬ್ಬ ನಾಗರಿಕನಿಗೂ ಶಾಂತಿಯುತವಾಗಿ ಪ್ರತಿಭಟಿಸುವ ಹಕ್ಕಿದ್ದು, ಅದನ್ನು ಹತ್ತಿಕ್ಕುವ ಯಾವುದೇ ಕ್ರಮವನ್ನು ಒಪ್ಪಲಾಗುವುದಿಲ್ಲ ಎಂದು ಹೇಳಿದರು.
ಸರ್ಕಾರವು ಪ್ರತಿಭಟನಾಕಾರರೊಂದಿಗೆ ಸಂವಾದ ನಡೆಸಬೇಕು. ನೀಟ್ ಪರೀಕ್ಷಾ ವ್ಯವಸ್ಥೆಯನ್ನು ರದ್ದುಪಡಿಸಿ, ಶಿಕ್ಷಣ ಸಚಿವರು ನೈತಿಕ ಹೊಣೆ ಹೊತ್ತು ರಾಜೀನಾಮೆ ನೀಡಬೇಕು ಎಂದು ಪ್ರತಿಭಟನಾಕಾರರು ಆಗ್ರಹಿಸಿದರು.
ಸಂಸತ್ ಚಲೋ ಪ್ರತಿಭಟನೆಗೆ ಮುಂಚಿತವಾಗಿಯೇ ಮಾಹಿತಿ ನೀಡಿದ್ದರೂ ಅನುಮತಿ ನಿರಾಕರಿಸಿ ನಂತರ ಪ್ರತಿಭಟನಾಕಾರರ ಮೇಲೆ ಬಲಪ್ರಯೋಗ ನಡೆಸಿರುವುದು ಖಂಡನೀಯ ಎಂದು ಎಐಡಿಎಸ್ಒ ಮುಖಂಡರು ತಿಳಿಸಿದರು. ವಿದ್ಯಾರ್ಥಿಗಳ ಧ್ವನಿಯನ್ನು ಹತ್ತಿಕ್ಕುವ ಪ್ರಯತ್ನವನ್ನು ದೇಶದ ವಿದ್ಯಾರ್ಥಿ ಸಮುದಾಯ ಒಗ್ಗಟ್ಟಿನಿಂದ ವಿರೋಧಿಸಬೇಕೆಂದು ಕರೆ ನೀಡಿದರು.
ಪ್ರತಿಭಟನೆಯಲ್ಲಿ ಎಐಡಿಎಸ್ಒ ಜಿಲ್ಲಾ ಸಮಿತಿ ಸದಸ್ಯರಾದ ದೇವರಾಜ್ ರಾಜೋಳ್, ತೋಟೇಂದ್ರ, ಸಂಜಯ್, ಶ್ರೀನಿವಾಸ್, ಆರಿಫ್, ರೆಡ್ಡೆಪ್ಪ, ಮಹೇಶ್, ಉಲ್ಲಾಸ್ ಸೇರಿದಂತೆ ನೂರಾರು ವಿದ್ಯಾರ್ಥಿಗಳು ಭಾಗವಹಿಸಿದ್ದರು.



