ಬಿಸಿಯೂಟ ತಯಾರಕರನ್ನು ಕಾರ್ಮಿಕರೆಂದು ಪರಿಗಣಿಸಿ: ಸಿದ್ದು ಕೇರೂರ್ ಆಗ್ರಹ
ಬಿಸಿಯೂಟ ಸಿಬ್ಬಂದಿಗೆ ಕನಿಷ್ಠ ವೇತನ, ಇಎಸ್‌ಐ ಸೌಲಭ್ಯ ಹಾಗೂ ಸಾಮಾಜಿಕ ಭದ್ರತೆ ಕಲ್ಪಿಸಲು ಒತ್ತಾಯ

ಕಳೆದ 25 ವರ್ಷಗಳಿಂದ ರಾಜ್ಯದ ಪ್ರಾಥಮಿಕ ಹಾಗೂ ಪ್ರೌಢಶಾಲೆಗಳಲ್ಲಿ ಬಿಸಿಯೂಟ ಯೋಜನೆಯಡಿ ಸೇವೆ ಸಲ್ಲಿಸುತ್ತಿರುವ ಬಿಸಿಯೂಟ ತಯಾರಕರನ್ನು ಸರ್ಕಾರ ಕಾರ್ಮಿಕರೆಂದು ಪರಿಗಣಿಸಿ, ಕನಿಷ್ಠ ವೇತನ ಕಾಯ್ದೆಯ ವ್ಯಾಪ್ತಿಗೆ ಒಳಪಡಿಸಬೇಕು ಎಂದು ಕರ್ನಾಟಕ ದಲಿತ ಸಂಘರ್ಷ ಸಮಿತಿ (ಅಂಬೇಡ್ಕರ್ ವಾದ) ತಾಲೂಕು ಸಂಚಾಲಕ ಸಿದ್ದು ಕೇರೂರ್ ಆಗ್ರಹಿಸಿದ್ದಾರೆ.
ಸರ್ಕಾರಿ ಶಾಲೆಗಳಲ್ಲಿ ಕಾರ್ಯನಿರ್ವಹಿಸುವ ಮುಖ್ಯ ಅಡುಗೆಯವರಿಗೆ ಮಾಸಿಕ ₹4,700 ಹಾಗೂ ಸಹಾಯಕ ಅಡುಗೆಯವರಿಗೆ ₹4,600 ಮಾತ್ರ ಗೌರವಧನ ನೀಡಲಾಗುತ್ತಿದೆ. ಈ ಅಲ್ಪ ಮೊತ್ತದಲ್ಲಿ ಜೀವನ ನಿರ್ವಹಣೆ ಅತ್ಯಂತ ಕಷ್ಟಕರವಾಗಿದೆ. ಬಿಸಿಯೂಟ ತಯಾರಿಕೆಯನ್ನು ಖಾಸಗಿ ಸಂಸ್ಥೆಗಳಿಗೆ ವಹಿಸುವ ಬದಲು, ಈಗಾಗಲೇ ಸೇವೆ ಸಲ್ಲಿಸುತ್ತಿರುವ ಸಿಬ್ಬಂದಿಯ ಹಕ್ಕುಗಳನ್ನು ಸರ್ಕಾರ ರಕ್ಷಿಸಬೇಕು ಎಂದು ಅವರು ಒತ್ತಾಯಿಸಿದರು.
ರಾಜ್ಯದಲ್ಲಿ ಸುಮಾರು 1.50 ಲಕ್ಷ ಬಿಸಿಯೂಟ ತಯಾರಕರು ಕಾರ್ಯನಿರ್ವಹಿಸುತ್ತಿದ್ದು, 2022-23ನೇ ಸಾಲಿನಿಂದ ಬಾಕಿ ಉಳಿದಿರುವ ಗೌರವಧನವನ್ನು ಕೂಡಲೇ ಬಿಡುಗಡೆ ಮಾಡಬೇಕು ಎಂದು ಆಗ್ರಹಿಸಿದರು.
100ಕ್ಕೂ ಹೆಚ್ಚು ವಿದ್ಯಾರ್ಥಿಗಳಿರುವ ಶಾಲೆಗಳಲ್ಲಿ ಕೇವಲ ಇಬ್ಬರು ಅಡುಗೆಯವರು ಕೆಲಸ ನಿರ್ವಹಿಸುತ್ತಿರುವುದರಿಂದ ಅವರ ಮೇಲೆ ಹೆಚ್ಚಿನ ಕೆಲಸದ ಒತ್ತಡ ಬೀಳುತ್ತಿದೆ. ವಿದ್ಯಾರ್ಥಿಗಳ ಸಂಖ್ಯೆಗೆ ಅನುಗುಣವಾಗಿ ಹೆಚ್ಚುವರಿ ಸಿಬ್ಬಂದಿಯನ್ನು ನೇಮಿಸಬೇಕು ಎಂದು ಅವರು ತಿಳಿಸಿದರು.
ಬಿಸಿಯೂಟ ತಯಾರಕರು ಕರ್ತವ್ಯದ ವೇಳೆ ಮೃತಪಟ್ಟರೆ ಅವರ ಕುಟುಂಬಕ್ಕೆ ₹20 ಲಕ್ಷ ಪರಿಹಾರ ನೀಡಬೇಕು. ಕುಟುಂಬದ ಒಬ್ಬ ಸದಸ್ಯರಿಗೆ ಉದ್ಯೋಗಾವಕಾಶ ಕಲ್ಪಿಸಬೇಕು. ಕರ್ತವ್ಯದ ವೇಳೆ ಅಪಘಾತಕ್ಕೀಡಾದರೆ ಸಂಪೂರ್ಣ ವೈದ್ಯಕೀಯ ವೆಚ್ಚವನ್ನು ಸರ್ಕಾರವೇ ಭರಿಸಬೇಕು. ಅಲ್ಲದೆ, ಬಿಸಿಯೂಟ ಸಿಬ್ಬಂದಿಯನ್ನು ಇಎಸ್‌ಐ (ESI) ಯೋಜನೆಯ ವ್ಯಾಪ್ತಿಗೆ ಒಳಪಡಿಸಿ ಸಾಮಾಜಿಕ ಭದ್ರತೆ ಒದಗಿಸಬೇಕು ಎಂದು ಸಿದ್ದು ಕೇರೂರ್ ಸರ್ಕಾರವನ್ನು ಆಗ್ರಹಿಸಿದರು.



