ಜಿಲ್ಲಾಸುದ್ದಿಸಮಾಜ

ಸೇವಾಲಾಲ್ ಮಹಾರಾಜರ ಮೂರ್ತಿ ತೆರವು ಖಂಡಿಸಿ ಪ್ರತಿಭಟನೆ; ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಒತ್ತಾಯ

ನಂದೂರು ಗ್ರಾಮದಲ್ಲಿ ಮೂರ್ತಿ ತೆರವು ಪ್ರಕರಣಕ್ಕೆ ಆಕ್ರೋಶ; ಜಿಲ್ಲಾಧಿಕಾರಿ ಕಚೇರಿ ಎದುರು ರಾಷ್ಟ್ರೀಯ ಗೋರ ಬಂಜಾರಾ ಮಹಾಸಭಾ ಪ್ರತಿಭಟನೆ

ತಾಲೂಕಿನ ನಂದೂರು ಗ್ರಾಮದ ಬಾಪು ನಾಯಕ್ ಹಾಗೂ ಕಾನು ನಾಯಕ್ ತಾಂಡಾಕ್ಕೆ ಹೋಗುವ ರಸ್ತೆಯಲ್ಲಿ ಸಂತ ಶ್ರೀ ಸೇವಾಲಾಲ್ ಮಹಾರಾಜರ ಮೂರ್ತಿಯನ್ನು ತೆರವುಗೊಳಿಸಿರುವುದನ್ನು ಖಂಡಿಸಿ ರಾಷ್ಟ್ರೀಯ ಗೋರ ಬಂಜಾರಾ ಮಹಾಸಭಾ ಕಾರ್ಯಕರ್ತರು ಮಂಗಳವಾರ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿದರು.

ಸಂಘಟನೆಯ ಜಿಲ್ಲಾ ಅಧ್ಯಕ್ಷ ಸಂತೋಷ್ ಆಡೆ ಅವರ ನೇತೃತ್ವದಲ್ಲಿ ನಡೆದ ಪ್ರತಿಭಟನೆಯಲ್ಲಿ, ಮೂರ್ತಿಯನ್ನು ತೆರವುಗೊಳಿಸಿದವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು ಹಾಗೂ ಈ ಘಟನೆಯ ಸಂಪೂರ್ಣ ತನಿಖೆ ನಡೆಸಬೇಕು ಎಂದು ಒತ್ತಾಯಿಸಲಾಯಿತು. ಪ್ರತಿಭಟನಾಕಾರರು ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿ, ಜುಲೈ 6ರಂದು ಮೂರ್ತಿ ತೆರವುಗೊಳಿಸಿದ ಪ್ರಕರಣದಲ್ಲಿ ಸಂಬಂಧಪಟ್ಟ ಅಧಿಕಾರಿಗಳು ಹಾಗೂ ಗುತ್ತಿಗೆದಾರರ ವಿರುದ್ಧ ಕ್ರಮ ಜರುಗಿಸಬೇಕು ಎಂದು ಆಗ್ರಹಿಸಿದರು.

ಪ್ರತಿಭಟನಾಕಾರರ ಪ್ರಕಾರ, ಮೂರ್ತಿಯನ್ನು ನಂತರ ಅದೇ ಸ್ಥಳದಲ್ಲಿ ಮರುಸ್ಥಾಪನೆ ಮಾಡಲಾಗಿದೆ. ಆದರೂ ಈ ಘಟನೆಗೆ ಕಾರಣರಾದವರ ವಿರುದ್ಧ ಯಾವುದೇ ಕ್ರಮ ಕೈಗೊಳ್ಳದಿರುವುದು ಬೇಸರದ ಸಂಗತಿಯಾಗಿದೆ ಎಂದು ಅವರು ಹೇಳಿದರು.

ಈ ವಿಷಯದಲ್ಲಿ ಜಿಲ್ಲಾಧಿಕಾರಿಗಳು, ರಸ್ತೆ ಗುತ್ತಿಗೆದಾರರು ಹಾಗೂ ಸ್ಥಳೀಯ ಶಾಸಕರನ್ನು ಹಲವು ಬಾರಿ ಸಂಪರ್ಕಿಸಿದರೂ ಸ್ಪಷ್ಟ ಉತ್ತರ ದೊರಕಿಲ್ಲ ಎಂದು ಆರೋಪಿಸಿದ ಅವರು, ಸಾರ್ವಜನಿಕರ ಭಾವನೆಗಳಿಗೆ ಧಕ್ಕೆ ಉಂಟುಮಾಡಿದ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿ ಸಂಬಂಧಪಟ್ಟ ಲೋಕೋಪಯೋಗಿ ಇಲಾಖೆ ಅಧಿಕಾರಿಗಳು ಹಾಗೂ ಗುತ್ತಿಗೆದಾರರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು.

ಮೂರ್ತಿ ತೆರವು ಪ್ರಕರಣದಲ್ಲಿ ಭಾಗಿಯಾದ ಗುತ್ತಿಗೆದಾರರ ಪರವಾನಗಿಯನ್ನು ರದ್ದುಪಡಿಸುವುದು ಸೇರಿದಂತೆ ಸಂಬಂಧಪಟ್ಟ ಅಧಿಕಾರಿಗಳ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳಬೇಕು ಎಂದು ಪ್ರತಿಭಟನಾಕಾರರು ಆಗ್ರಹಿಸಿದರು. ಬೇಡಿಕೆಗಳಿಗೆ ಸ್ಪಂದಿಸದಿದ್ದರೆ ಮುಂದಿನ ದಿನಗಳಲ್ಲಿ ಶಾಸಕರ ನಿವಾಸದ ಮುಂದೆ ಧರಣಿ ಸತ್ಯಾಗ್ರಹ ನಡೆಸುವುದಾಗಿ ಎಚ್ಚರಿಕೆ ನೀಡಿದರು.

ಪ್ರತಿಭಟನೆಯಲ್ಲಿ ನಾರಾಯಣ ಪವಾರ್, ರಾಜು ಪವಾರ್, ಶ್ರೀಮಂತ ಪವಾರ್, ಆಕಾಶ್ ರಾಠೋಡ್, ಶಂಕರ ರಾಠೋಡ್, ಸಂತೋಷ್ ಪವಾರ್, ಅಮಿತ್ ರಾಠೋಡ್, ವಸಂತ್ ರಾಠೋಡ್ ಸೇರಿದಂತೆ ಹಲವು ಮುಖಂಡರು ಹಾಗೂ ಕಾರ್ಯಕರ್ತರು ಭಾಗವಹಿಸಿದ್ದರು.

Related Articles

Leave a Reply

Your email address will not be published. Required fields are marked *

Back to top button