
ಕಲಬುರಗಿ, ಜು.28: ಕಲಬುರಗಿ ಜಿಲ್ಲೆಯಲ್ಲಿ ತೀವ್ರ ಬರದ ಪರಿಸ್ಥಿತಿಯಿಂದ ಕಳೆದ ಎರಡು ತಿಂಗಳಲ್ಲಿ 31 ರೈತರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಆರೋಪಿಸಿರುವ ಕರ್ನಾಟಕ ರಾಜ್ಯ ರೈತ ಸಂಘದ ಜಿಲ್ಲಾಾಧ್ಯಕ್ಷ ನಾಗೇಂದ್ರಪ್ಪ ಥಂಬೆ, ರಾಜ್ಯ ಸರ್ಕಾರ ತಕ್ಷಣವೇ ಜಿಲ್ಲೆಯನ್ನು ಬರಪೀಡಿತ ಪ್ರದೇಶವೆಂದು ಘೋಷಿಸಿ ರೈತರಿಗೆ ಸಾಲಮನ್ನಾ ಸೇರಿದಂತೆ ವಿಶೇಷ ಪರಿಹಾರ ಘೋಷಿಸಬೇಕು ಎಂದು ಆಗ್ರಹಿಸಿದರು.
ನಗರದ ಪತ್ರಿಕಾಭವನದಲ್ಲಿ ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯದಾದ್ಯಂತ ಮಳೆ ಕೊರತೆಯಿಂದ ರೈತರು ಸಂಕಷ್ಟಕ್ಕೆ ಸಿಲುಕಿದ್ದು, ಬಿತ್ತನೆ ಮಾಡಿದ ಬೆಳೆಗಳು ಮಳೆಯ ಅಭಾವದಿಂದ ಒಣಗುತ್ತಿವೆ ಎಂದು ಹೇಳಿದರು. ಸಾಲ ಮಾಡಿ ಜಮೀನು ಸಿದ್ಧಪಡಿಸಿ, ಬೀಜ, ಗೊಬ್ಬರ ಹಾಗೂ ಇತರೆ ಕೃಷಿ ಸಾಮಗ್ರಿಗಳನ್ನು ಖರೀದಿಸಿ ಬಿತ್ತನೆ ಮಾಡಿದರೂ ಮಳೆ ಕೈಕೊಟ್ಟಿರುವುದರಿಂದ ರೈತರು ತೀವ್ರ ಆರ್ಥಿಕ ಸಂಕಷ್ಟ ಅನುಭವಿಸುತ್ತಿದ್ದಾರೆ ಎಂದು ತಿಳಿಸಿದರು.
ರಾಜ್ಯದಲ್ಲಿ ಸುಮಾರು 80 ಶೇಕಡಾ ಕೃಷಿ ಚಟುವಟಿಕೆಗಳು ಹಿನ್ನಡೆ ಕಂಡಿದ್ದು, ಜಾನುವಾರುಗಳಿಗೆ ಮೇವು ಕೊರತೆ ಉಂಟಾಗಿದೆ. ರೈತರು ತಮ್ಮ ಜಾನುವಾರುಗಳನ್ನು ಮಾರಾಟ ಮಾಡುವ ಪರಿಸ್ಥಿತಿ ನಿರ್ಮಾಣವಾಗಿದ್ದು, ಬರದ ಪರಿಣಾಮ ದಿನದಿಂದ ದಿನಕ್ಕೆ ಗಂಭೀರವಾಗುತ್ತಿದೆ ಎಂದು ಅವರು ಕಳವಳ ವ್ಯಕ್ತಪಡಿಸಿದರು.
ಬರದ ಪರಿಸ್ಥಿತಿಯನ್ನು ಗಮನದಲ್ಲಿಟ್ಟುಕೊಂಡು ಕೃಷಿ ಸಾಲವನ್ನು ಮನ್ನಾ ಮಾಡಬೇಕು. ಬೆಳೆ ನಷ್ಟ ಮತ್ತು ಹವಾಮಾನ ವೈಪರೀತ್ಯದಿಂದ ಸಂಕಷ್ಟದಲ್ಲಿರುವ ರೈತರಿಗೆ ತಕ್ಷಣ ಪರಿಹಾರ ಒದಗಿಸಬೇಕು. ಸಣ್ಣ ಹಾಗೂ ಮಧ್ಯಮ ರೈತರಿಗೆ ಕೃಷಿ ಚಟುವಟಿಕೆ ಮುಂದುವರಿಸಲು ಸರ್ಕಾರ ವಿಶೇಷ ಆರ್ಥಿಕ ನೆರವು ನೀಡಬೇಕು ಎಂದು ಒತ್ತಾಯಿಸಿದರು.
ಜಿಲ್ಲೆಯನ್ನು ತಕ್ಷಣ ಬರಪೀಡಿತ ಪ್ರದೇಶವೆಂದು ಘೋಷಿಸಿ, ಪ್ರತಿ ಎಕರೆಗೆ ₹50 ಸಾವಿರ ಪರಿಹಾರ ನೀಡಬೇಕು. ₹3 ಲಕ್ಷದವರೆಗೆ ರೈತರ ಕೃಷಿ ಸಾಲವನ್ನು ಮನ್ನಾ ಮಾಡಬೇಕು. ರಸಗೊಬ್ಬರಗಳ ಬೆಲೆ ಇಳಿಕೆ ಮಾಡುವುದರ ಜೊತೆಗೆ ರೈತರಿಗೆ ನೇರ ನಗದು ವರ್ಗಾವಣೆ (ಡಿಬಿಟಿ) ಮೂಲಕ ಹೆಚ್ಚುವರಿ ಸಹಾಯಧನ ನೀಡಬೇಕು ಎಂದು ಅವರು ಆಗ್ರಹಿಸಿದರು.
ಕೃಷಿ ಚಟುವಟಿಕೆಗಳಿಗೆ ಅಗತ್ಯವಿರುವ ಡೀಸೆಲ್ ಅನ್ನು ರಿಯಾಯಿತಿ ದರದಲ್ಲಿ ಲಭ್ಯವಾಗುವಂತೆ ಕ್ರಮ ಕೈಗೊಳ್ಳಬೇಕು. ಬೆಳೆಗಳಿಗೆ ವೈಜ್ಞಾನಿಕ ಬೆಂಬಲ ಬೆಲೆ (ಎಂಎಸ್‌ಪಿ) ನಿಗದಿಪಡಿಸಿ ರೈತರ ಆದಾಯವನ್ನು ರಕ್ಷಿಸಬೇಕು ಎಂದು ಅವರು ಒತ್ತಾಯಿಸಿದರು.
ರಸಗೊಬ್ಬರಗಳ ಬೆಲೆ ಏರಿಕೆ ರೈತರ ಮೇಲಿನ ಆರ್ಥಿಕ ಹೊರೆಯನ್ನು ಮತ್ತಷ್ಟು ಹೆಚ್ಚಿಸಿದೆ. ಯೂರಿಯಾ, ಡಿಎಪಿ ಸೇರಿದಂತೆ ವಿವಿಧ ಗೊಬ್ಬರಗಳ ಬೆಲೆ ನಿಯಂತ್ರಿಸಿ, ಸಹಾಯಧನ ಹೆಚ್ಚಿಸಬೇಕು. ರೈತರಿಗೆ ಅಗತ್ಯವಿರುವ ಗೊಬ್ಬರಗಳನ್ನು ಕಡ್ಡಾಯ ಲಿಂಕ್ ಪದ್ಧತಿಯಿಲ್ಲದೆ ಸುಲಭವಾಗಿ ವಿತರಿಸುವಂತೆ ಹಾಗೂ ಕಾಳಸಂತೆ, ಕೃತಕ ಅಭಾವ ಸೃಷ್ಟಿಸಿ ಅಕ್ರಮ ಮಾರಾಟ ನಡೆಸುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಅವರು ಆಗ್ರಹಿಸಿದರು.
ಸುದ್ದಿಗೋಷ್ಠಿಯಲ್ಲಿ ಉಮಾಪತಿ ಪಾಟೀಲ, ರಮೇಶ್ ರಾಗಿ, ಮಂಜುಳಾ ಭಜಂತ್ರಿ, ಮಹಾದೇವಿ ಭಜಂತ್ರಿ, ಅಶ್ವಿನಿ ಬಾರಿಗಿಡ, ಸಿದ್ದು ಪಾಟೀಲ, ಕರೆಪ್ಪ ಕಾರಗುಂಡ ಸೇರಿದಂತೆ ರೈತ ಸಂಘದ ಮುಖಂಡರು ಉಪಸ್ಥಿತರಿದ್ದರು.



