ರಾಜಕೀಯ

ಬರ ಪರಿಹಾರ ಕಾಮಗಾರಿಗಳಿಗೆ ಆಗ್ರಹಿಸಿ ಜು.24ರಂದು ಆರ್‌ಪಿಐ ಸಾಂಕೇತಿಕ ಧರಣಿ

ಕಲಬುರಗಿ ಜಿಲ್ಲೆಯನ್ನು ಬರಪೀಡಿತ ಪ್ರದೇಶವೆಂದು ಘೋಷಿಸಿ ತಕ್ಷಣ ಪರಿಹಾರ ಕ್ರಮ ಕೈಗೊಳ್ಳುವಂತೆ ಸರ್ಕಾರಕ್ಕೆ ಒತ್ತಾಯ

ಜಿಲ್ಲೆಯಲ್ಲಿನ ಮುಂಗಾರು ಮಳೆ ವಿಫಲವಾಗಿರುವ ಹಿನ್ನೆಲೆಯಲ್ಲಿ ಕಲಬುರಗಿ ಜಿಲ್ಲೆಯನ್ನು ತಕ್ಷಣವೇ ಬರಪೀಡಿತ ಪ್ರದೇಶವೆಂದು ಘೋಷಿಸಿ ಪರಿಹಾರ ಕಾಮಗಾರಿಗಳನ್ನು ಆರಂಭಿಸಬೇಕು ಎಂದು ಆಗ್ರಹಿಸಿ ಜುಲೈ 24ರಂದು ಜಿಲ್ಲಾಧಿಕಾರಿ ಕಚೇರಿ ಎದುರು ಒಂದು ದಿನದ ಸಾಂಕೇತಿಕ ಧರಣಿ ಸತ್ಯಾಗ್ರಹ ಹಮ್ಮಿಕೊಳ್ಳಲಾಗಿದೆ ಎಂದು ಆರ್‌ಪಿಐ ಪಕ್ಷದ ದಕ್ಷಿಣ ಭಾರತದ ಪ್ರಧಾನ ಕಾರ್ಯದರ್ಶಿ ಎ.ಬಿ. ಹೊಸಮನಿ ತಿಳಿಸಿದ್ದಾರೆ.

ನಗರದಲ್ಲಿ ಬುಧವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ತೊಗರಿ ಬೆಳೆಗೆ ಹೆಸರಾದ ಕಲಬುರಗಿ ಜಿಲ್ಲೆಯಲ್ಲಿ ಈ ಬಾರಿ ಸಮರ್ಪಕ ಮಳೆಯಾಗದ ಕಾರಣ ರೈತರು ಸಂಕಷ್ಟಕ್ಕೆ ಸಿಲುಕಿದ್ದು, ಬರದ ಛಾಯೆ ಆವರಿಸಿದೆ ಎಂದು ಹೇಳಿದರು.

ಮಳೆ ಕೊರತೆಯಿಂದ ತೊಗರಿ, ಸೋಯಾಬೀನ್, ಹತ್ತಿ ಸೇರಿದಂತೆ ಹಲವು ಬೆಳೆಗಳು ಹಾನಿಗೊಳಗಾಗಿವೆ. ಅಂತರ್ಜಲ ಮಟ್ಟ ಕುಸಿದಿದ್ದು, ಕುಡಿಯುವ ನೀರಿನ ಸಮಸ್ಯೆ ಎದುರಾಗಿದೆ. ಜಾನುವಾರುಗಳಿಗೆ ಮೇವು ಕೊರತೆ ಉಂಟಾಗಿದ್ದು, ರೈತರು ಸಾಲದ ಭಾರದಿಂದ ತೀವ್ರ ಸಂಕಷ್ಟ ಅನುಭವಿಸುತ್ತಿದ್ದಾರೆ ಎಂದು ಆತಂಕ ವ್ಯಕ್ತಪಡಿಸಿದರು.

ರೈತರ ಆತ್ಮಹತ್ಯೆ ತಡೆಯಲು ಸರ್ಕಾರ ತಕ್ಷಣ ಕ್ರಮ ಕೈಗೊಳ್ಳಬೇಕು. ಆತ್ಮಹತ್ಯೆ ಮಾಡಿಕೊಂಡ ರೈತರ ಕುಟುಂಬಗಳಿಗೆ ಸಮರ್ಪಕ ಪರಿಹಾರ ನೀಡಬೇಕು. ರೈತರಿಗೆ ಪ್ರತಿ ಎಕರೆಗೆ ₹50 ಸಾವಿರ ಬೆಳೆ ಪರಿಹಾರ ಘೋಷಿಸಬೇಕು. ರಾಷ್ಟ್ರೀಕೃತ ಬ್ಯಾಂಕುಗಳಲ್ಲಿನ ಕೃಷಿ ಸಾಲ ಮನ್ನಾ ಮಾಡಬೇಕು ಹಾಗೂ ಜಾನುವಾರುಗಳ ರಕ್ಷಣೆಗೆ ಗೋಶಾಲೆಗಳನ್ನು ಆರಂಭಿಸಬೇಕು ಎಂದು ಅವರು ಒತ್ತಾಯಿಸಿದರು.

ಜಿಲ್ಲೆಯಲ್ಲಿ ಕುಡಿಯುವ ನೀರಿನ ಸಮಸ್ಯೆ ನಿವಾರಣೆಗೆ ಅಗತ್ಯ ಕ್ರಮ ಕೈಗೊಳ್ಳಬೇಕು. ಭೀಮಾ ನದಿಯಿಂದ ಕರ್ನಾಟಕಕ್ಕೆ 15 ಟಿಎಂಸಿ ನೀರು ಬಿಡುಗಡೆ ಮಾಡಲು ಕ್ರಮ ವಹಿಸಬೇಕು. ಮೋಡ ಬಿತ್ತನೆ ಕೈಗೊಂಡು ಮರು ಬಿತ್ತನೆಗೆ ಉಚಿತ ಬೀಜ ಮತ್ತು ರಸಗೊಬ್ಬರ ವಿತರಿಸಬೇಕು. ಬಾಕಿ ಉಳಿದಿರುವ ಬೆಳೆ ವಿಮೆ ಪರಿಹಾರವನ್ನು ಕೂಡಲೇ ಬಿಡುಗಡೆ ಮಾಡಬೇಕು ಎಂದು ಆಗ್ರಹಿಸಿದರು.

ಸುದ್ದಿಗೋಷ್ಠಿಯಲ್ಲಿ ಬಾಲಾಜಿ ಕಾಂಬಳೆ, ಮಲ್ಲೇಶ ಸಜ್ಜನ್, ಮಲ್ಲಿಕಾರ್ಜುನ ಭಾವಿಕಟ್ಟಿ, ಸತೀಶ ಮಾನೆ, ರಾಜಕುಮಾರ ಕಾಂಬಳೆ, ರಾಘವೇಂದ್ರ, ಮಹಾದೇವಪ್ಪ ಸೇರಿದಂತೆ ಪಕ್ಷದ ಮುಖಂಡರು ಉಪಸ್ಥಿತರಿದ್ದರು.

Related Articles

Leave a Reply

Your email address will not be published. Required fields are marked *

Back to top button