ವಾಡಿಯಲ್ಲಿ ನಾಲ್ವರು ಬಾಲ ಕಾರ್ಮಿಕರ ರಕ್ಷಣೆ; ಮಕ್ಕಳ ಕಲ್ಯಾಣ ಸಮಿತಿಗೆ ಹಾಜರುಪಡಿಕೆ
ಅಧಿಕಾರಿಗಳ ಜಂಟಿ ಕಾರ್ಯಾಚರಣೆ; ಬಾಲ ಕಾರ್ಮಿಕ ಪದ್ಧತಿ ವಿರುದ್ಧ ಕಟ್ಟುನಿಟ್ಟಿನ ಕ್ರಮ

ಚಿತ್ತಾಪುರ, ಜು.22: ತಾಲ್ಲೂಕಿನ ವಾಡಿ (ಜಂಕ್ಷನ್) ಪ್ರದೇಶದಲ್ಲಿ ಅಧಿಕಾರಿಗಳು ನಡೆಸಿದ ದಿಢೀರ್ ತಪಾಸಣೆಯಲ್ಲಿ ನಾಲ್ವರು ಬಾಲ ಕಾರ್ಮಿಕರನ್ನು ರಕ್ಷಿಸಿ, ಕೆಲಸದಿಂದ ಬಿಡುಗಡೆಗೊಳಿಸಲಾಯಿತು. ಬಳಿಕ ಮಕ್ಕಳನ್ನು ಜಿಲ್ಲಾ ಮಕ್ಕಳ ಕಲ್ಯಾಣ ಸಮಿತಿಯ ಮುಂದೆ ಹಾಜರುಪಡಿಸಿ ಅಗತ್ಯ ಕ್ರಮ ಕೈಗೊಳ್ಳಲಾಯಿತು.
ಈ ಜಂಟಿ ಕಾರ್ಯಾಚರಣೆಯಲ್ಲಿ ಕಾರ್ಮಿಕ ನಿರೀಕ್ಷಕರಾದ ವಿಕ್ರಂ ಬಡಿಗೇರ್, ಮಾರ್ಗದರ್ಶಿ ಸಂಸ್ಥೆಯ ನಿರ್ದೇಶಕ ಆನಂದರಾಜ್, ಮಕ್ಕಳ ಸಹಾಯವಾಣಿ ಸಿಬ್ಬಂದಿ ದೇವೇಂದ್ರಪ್ಪ, ಡಾನ್ ಬಾಸ್ಕೋ ಸಂಸ್ಥೆಯ ಸಿಬ್ಬಂದಿ, ವಾಡಿ ಪೊಲೀಸ್ ಠಾಣೆಯ ಸಿಬ್ಬಂದಿ ಹಾಗೂ ಜಿಲ್ಲಾ ಬಾಲ ಕಾರ್ಮಿಕ ಯೋಜನೆ ಸೊಸೈಟಿಯ ನಿರ್ದೇಶಕ ಸಂತೋಷ್ ಕುಲಕರ್ಣಿ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಮತ್ತು ಸಿಬ್ಬಂದಿ ಭಾಗವಹಿಸಿದ್ದರು.
ಈ ವೇಳೆ ಬಾಲ ಕಾರ್ಮಿಕ ಪದ್ಧತಿಯನ್ನು ಸಂಪೂರ್ಣವಾಗಿ ನಿರ್ಮೂಲನೆಗೊಳಿಸಲು ಸಾರ್ವಜನಿಕರು ಸಹಕರಿಸಬೇಕು ಎಂದು ಅಧಿಕಾರಿಗಳು ಮನವಿ ಮಾಡಿದರು. ಯಾವುದೇ ಸ್ಥಳದಲ್ಲಿ ಬಾಲ ಕಾರ್ಮಿಕರನ್ನು ಕೆಲಸಕ್ಕೆ ನಿಯೋಜಿಸಿರುವುದು ಕಂಡುಬಂದಲ್ಲಿ ಸಂಬಂಧಿತ ಇಲಾಖೆಗೆ ಅಥವಾ ಮಕ್ಕಳ ಸಹಾಯವಾಣಿಗೆ ಮಾಹಿತಿ ನೀಡುವಂತೆ ಅವರು ಕರೆ ನೀಡಿದರು.



