ಕೇಂದ್ರ ಸಚಿವ ಶ್ರೀಪಾದ್ ನಾಯಕ್ ಭೇಟಿ ಮಾಡಿದ ಶಾಸಕ ಎಂ.ವೈ. ಪಾಟೀಲ
ಶ್ರೀ ದತ್ತಾತ್ರೇಯ ದೇವಸ್ಥಾನದ ಸಮಗ್ರ ಅಭಿವೃದ್ಧಿ ಕುರಿತು ಸಚಿವರೊಂದಿಗೆ ಶಾಸಕ ಎಂ.ವೈ. ಪಾಟೀಲ ಚರ್ಚೆ

ನವದೆಹಲಿಯಲ್ಲಿ ಕೇಂದ್ರ ವಿದ್ಯುತ್ ಹಾಗೂ ನವೀಕರಿಸಬಹುದಾದ ಇಂಧನ ಖಾತೆ ರಾಜ್ಯ ಸಚಿವರಾದ ಹಾಗೂ ಶ್ರೀ ಗುರುದೇವ ದತ್ತ ಮಹಾರಾಜರ ಪರಮ ಭಕ್ತರಾದ ಶ್ರೀಪಾದ್ ನಾಯಕ್ ಅವರನ್ನು ಅಫಜಲಪುರ ಕ್ಷೇತ್ರದ ಶಾಸಕ ಎಂ.ವೈ. ಪಾಟೀಲ ಅವರು ಸೌಹಾರ್ದಯುತವಾಗಿ ಭೇಟಿ ಮಾಡಿ ಕ್ಷೇತ್ರದ ವಿವಿಧ ಅಭಿವೃದ್ಧಿ ವಿಷಯಗಳ ಕುರಿತು ಚರ್ಚಿಸಿದರು.
ಈ ಸಂದರ್ಭದಲ್ಲಿ ಅಫಜಲಪುರ ತಾಲ್ಲೂಕಿನ ಪವಿತ್ರ ಶ್ರೀ ದತ್ತಾತ್ರೇಯ ದೇವಸ್ಥಾನದ ಸಮಗ್ರ ಅಭಿವೃದ್ಧಿ ಕುರಿತು ಶಾಸಕ ಎಂ.ವೈ. ಪಾಟೀಲ ಅವರು ಸಚಿವರ ಗಮನ ಸೆಳೆದರು. ದೇವಸ್ಥಾನಕ್ಕೆ ಅಗತ್ಯ ಮೂಲಸೌಕರ್ಯ, ಭಕ್ತರಿಗೆ ಅನುಕೂಲವಾಗುವ ಅಭಿವೃದ್ಧಿ ಕಾಮಗಾರಿಗಳು ಹಾಗೂ ಧಾರ್ಮಿಕ ಪ್ರವಾಸೋದ್ಯಮಕ್ಕೆ ಉತ್ತೇಜನ ನೀಡುವ ಯೋಜನೆಗಳ ಕುರಿತು ವಿವರವಾಗಿ ಮನವಿ ಸಲ್ಲಿಸಿದರು.
ಶಾಸಕರ ಮನವಿಗೆ ಸಕಾರಾತ್ಮಕವಾಗಿ ಸ್ಪಂದಿಸಿದ ಕೇಂದ್ರ ಸಚಿವ ಶ್ರೀಪಾದ್ ನಾಯಕ್, ದೇವಸ್ಥಾನದ ಅಭಿವೃದ್ಧಿಗೆ ಕೇಂದ್ರ ಸರ್ಕಾರದ ಮಟ್ಟದಲ್ಲಿ ಅಗತ್ಯ ಸಹಕಾರ ನೀಡುವುದಾಗಿ ಭರವಸೆ ನೀಡಿದರು. ಈ ಭೇಟಿ ವೇಳೆ ದೇವಸ್ಥಾನದ ಅಭಿವೃದ್ಧಿಗೆ ಸಂಬಂಧಿಸಿದ ವಿವಿಧ ಯೋಜನೆಗಳು ಹಾಗೂ ಅವುಗಳನ್ನು ಶೀಘ್ರ ಅನುಷ್ಠಾನಗೊಳಿಸುವ ಸಾಧ್ಯತೆಗಳ ಬಗ್ಗೆ ಸಮಾಲೋಚನೆ ನಡೆಯಿತು.
ಈ ಸಂದರ್ಭದಲ್ಲಿ ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮದ ಅಧ್ಯಕ್ಷ ಅರುಣಕುಮಾರ್ ಎಂ.ವೈ. ಪಾಟೀಲ ಸಹ ಉಪಸ್ಥಿತರಿದ್ದು, ದೇವಸ್ಥಾನದ ಅಭಿವೃದ್ಧಿಗೆ ಸಂಬಂಧಿಸಿದ ವಿಷಯಗಳ ಕುರಿತು ತಮ್ಮ ಅಭಿಪ್ರಾಯಗಳನ್ನು ಹಂಚಿಕೊಂಡರು. ಕ್ಷೇತ್ರದ ಧಾರ್ಮಿಕ ಹಾಗೂ ಪ್ರವಾಸೋದ್ಯಮ ಅಭಿವೃದ್ಧಿಗೆ ಈ ಭೇಟಿ ಮಹತ್ವದ ಹೆಜ್ಜೆಯಾಗಿದೆ ಎಂದು ತಿಳಿದುಬಂದಿದೆ.



