ರಾಜ್ಯಶಿಕ್ಷಣ

ನಕಲಿ ಪಿಎಚ್‌ಡಿ ಪ್ರಮಾಣಪತ್ರ ಹಗರಣ: 249 ಅತಿಥಿ ಉಪನ್ಯಾಸಕರ ವಿರುದ್ಧ ಕ್ರಿಮಿನಲ್ ಪ್ರಕರಣಕ್ಕೆ ಸೂಚನೆ

ಸರ್ಕಾರಿ ಪದವಿ ಕಾಲೇಜುಗಳಲ್ಲಿ ನಕಲಿ ಪಿಎಚ್‌ಡಿ ಪ್ರಮಾಣಪತ್ರ ಸಲ್ಲಿಸಿದ ಆರೋಪ; ತಪ್ಪಿತಸ್ಥರ ವಿರುದ್ಧ ಕಠಿಣ ಕಾನೂನು ಕ್ರಮಕ್ಕೆ ಶಿಕ್ಷಣ ಇಲಾಖೆ ಆದೇಶ.

ರಾಜ್ಯದ ಸರ್ಕಾರಿ ಪದವಿ ಕಾಲೇಜುಗಳಲ್ಲಿ ಕಾರ್ಯನಿರ್ವಹಿಸುತ್ತಿರುವ 249 ಅತಿಥಿ ಉಪನ್ಯಾಸಕರು ನಕಲಿ ಪಿಎಚ್‌ಡಿ ಪ್ರಮಾಣಪತ್ರಗಳನ್ನು ಸಲ್ಲಿಸಿ ನೇಮಕಾತಿ ಪಡೆದಿರುವುದು ಪರಿಶೀಲನೆಯಲ್ಲಿ ಬೆಳಕಿಗೆ ಬಂದಿದ್ದು, ಸಂಬಂಧಿಸಿದವರ ವಿರುದ್ಧ ಕ್ರಿಮಿನಲ್ ಪ್ರಕರಣ ದಾಖಲಿಸಿ ಒಂದು ವಾರದೊಳಗೆ ವರದಿ ಸಲ್ಲಿಸುವಂತೆ ಕಾಲೇಜು ಶಿಕ್ಷಣ ಇಲಾಖೆ ಆಯುಕ್ತರು ಎಲ್ಲಾ ಸರ್ಕಾರಿ ಕಾಲೇಜುಗಳ ಪ್ರಾಂಶುಪಾಲರಿಗೆ ಸೂಚನೆ ನೀಡಿದ್ದಾರೆ.

ಜುಲೈ 21ರಂದು ಹೊರಡಿಸಿರುವ ಆದೇಶದಲ್ಲಿ, ನಕಲಿ ಪಿಎಚ್‌ಡಿ ಪ್ರಮಾಣಪತ್ರ ಸಲ್ಲಿಸಿರುವ ಅತಿಥಿ ಉಪನ್ಯಾಸಕರನ್ನು ತಕ್ಷಣವೇ ಸೇವೆಯಿಂದ ಬಿಡುಗಡೆಗೊಳಿಸುವುದರ ಜೊತೆಗೆ, ಮುಂದಿನ ಯಾವುದೇ ನೇಮಕಾತಿ ಪ್ರಕ್ರಿಯೆಯಲ್ಲಿ ಭಾಗವಹಿಸದಂತೆ ಕಪ್ಪುಪಟ್ಟಿಗೆ (ಬ್ಲ್ಯಾಕ್‌ಲಿಸ್ಟ್) ಸೇರಿಸಲು ನಿರ್ದೇಶಿಸಲಾಗಿದೆ.

ಕಲ್ಯಾಣ ಕರ್ನಾಟಕ ಭಾಗದಲ್ಲೇ ಅತಿ ಹೆಚ್ಚು ಪ್ರಕರಣಗಳು ಪತ್ತೆಯಾಗಿದ್ದು, ಕಲಬುರಗಿಯಲ್ಲಿ 33, ಯಾದಗಿರಿಯಲ್ಲಿ 31, ಬೀದರ್‌ನಲ್ಲಿ 28, ರಾಯಚೂರಿನಲ್ಲಿ 24, ಕೊಪ್ಪಳದಲ್ಲಿ 13, ವಿಜಯನಗರದಲ್ಲಿ 9 ಹಾಗೂ ಬಳ್ಳಾರಿಯಲ್ಲಿ 2 ಪ್ರಕರಣಗಳು ದಾಖಲಾಗಿವೆ.

ರಾಜ್ಯದ ಸರ್ಕಾರಿ ಪದವಿ ಕಾಲೇಜುಗಳಲ್ಲಿ ಒಟ್ಟು 10,335 ಅತಿಥಿ ಉಪನ್ಯಾಸಕರು ಕಾರ್ಯನಿರ್ವಹಿಸುತ್ತಿದ್ದು, ಕಳೆದ ನೇಮಕಾತಿ ಪ್ರಕ್ರಿಯೆಯಲ್ಲಿ ಸಲ್ಲಿಸಲಾದ ವಿದ್ಯಾರ್ಹತೆ ಹಾಗೂ ಪಿಎಚ್‌ಡಿ ಪ್ರಮಾಣಪತ್ರಗಳ ಪರಿಶೀಲನೆ ವೇಳೆ 249 ನಕಲಿ ದಾಖಲೆಗಳು ಪತ್ತೆಯಾಗಿವೆ. ಈ ಹಿನ್ನೆಲೆಯಲ್ಲಿ ದಾಖಲೆ ಪರಿಶೀಲನೆಯನ್ನು ಮತ್ತಷ್ಟು ಕಟ್ಟುನಿಟ್ಟಾಗಿ ನಡೆಸಲಾಗಿದೆ.

ವಿಶ್ವವಿದ್ಯಾಲಯ ಅನುದಾನ ಆಯೋಗ (ಯುಜಿಸಿ) ನಿಯಮಗಳ ಪ್ರಕಾರ ಸರ್ಕಾರಿ ಪದವಿ ಕಾಲೇಜುಗಳಲ್ಲಿ ಅತಿಥಿ ಉಪನ್ಯಾಸಕರಾಗಿ ಸೇವೆ ಸಲ್ಲಿಸಲು ಅಭ್ಯರ್ಥಿಗಳು ನೆಟ್, ಕೆ-ಸೆಟ್ ಅಥವಾ ಮಾನ್ಯ ಪಿಎಚ್‌ಡಿ ಪದವಿ ಹೊಂದಿರಬೇಕು. ಆದರೆ ಕೆಲವು ಅಭ್ಯರ್ಥಿಗಳು ನಕಲಿ ಪಿಎಚ್‌ಡಿ ಪ್ರಮಾಣಪತ್ರಗಳನ್ನು ಸಲ್ಲಿಸಿ ನೇಮಕಾತಿ ಪಡೆದಿರುವುದು ತನಿಖೆಯಲ್ಲಿ ಬಹಿರಂಗವಾಗಿದೆ.

ವಿಭಾಗವಾರು ನೋಡಿದರೆ, 249 ಪ್ರಕರಣಗಳಲ್ಲಿ 153 ಪ್ರಕರಣಗಳು ಕಲಬುರಗಿ ವಿಭಾಗದಲ್ಲೇ ಪತ್ತೆಯಾಗಿದ್ದು, ಧಾರವಾಡ ವಿಭಾಗದಲ್ಲಿ 31, ಬೆಂಗಳೂರು ವಿಭಾಗದಲ್ಲಿ 24, ಮೈಸೂರು ವಿಭಾಗದಲ್ಲಿ 22, ಶಿವಮೊಗ್ಗ ವಿಭಾಗದಲ್ಲಿ 17 ಹಾಗೂ ಮಂಗಳೂರು ವಿಭಾಗದಲ್ಲಿ 2 ಪ್ರಕರಣಗಳು ದಾಖಲಾಗಿವೆ.

ಕಾಲೇಜುವಾರು ಪರಿಶೀಲನೆಯಲ್ಲಿ ಯಾದಗಿರಿ ಜಿಲ್ಲೆಯ ಶಹಾಪುರ ಸರ್ಕಾರಿ ಪದವಿ ಕಾಲೇಜಿನಲ್ಲಿ ಅತಿ ಹೆಚ್ಚು 20 ನಕಲಿ ಪಿಎಚ್‌ಡಿ ಪ್ರಕರಣಗಳು ಪತ್ತೆಯಾಗಿವೆ. ಬೀದರ್ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ 19, ಕಲಬುರಗಿ ಮಹಿಳಾ ಸರ್ಕಾರಿ ಕಾಲೇಜಿನಲ್ಲಿ 13 ಹಾಗೂ ಕೊಪ್ಪಳ ಮಹಿಳಾ ಸರ್ಕಾರಿ ಕಾಲೇಜಿನಲ್ಲಿ 7 ಪ್ರಕರಣಗಳು ದಾಖಲಾಗಿವೆ.

ಸರ್ಕಾರಕ್ಕೆ ಸುಳ್ಳು ಮಾಹಿತಿ ನೀಡಿ ನಕಲಿ ದಾಖಲೆಗಳನ್ನು ಸಲ್ಲಿಸಿರುವವರ ವಿರುದ್ಧ ಸಂಬಂಧಿತ ಪೊಲೀಸ್ ಠಾಣೆಗಳಲ್ಲಿ ಕ್ರಿಮಿನಲ್ ಪ್ರಕರಣ ದಾಖಲಿಸುವಂತೆ ಸೂಚನೆ ನೀಡಲಾಗಿದೆ. ಜೊತೆಗೆ ಒಂದು ವಾರದೊಳಗೆ ಪ್ರಕರಣಗಳ ವಿವರವನ್ನು ಕಾಲೇಜು ಶಿಕ್ಷಣ ಇಲಾಖೆ ಆಯುಕ್ತರ ಕಚೇರಿಗೆ ಕಳುಹಿಸುವಂತೆ ಪ್ರಾಂಶುಪಾಲರಿಗೆ ಕಟ್ಟುನಿಟ್ಟಿನ ಆದೇಶ ನೀಡಲಾಗಿದೆ.

ಇನ್ನೂ ಹೆಚ್ಚಿನ ಸಂಖ್ಯೆಯಲ್ಲಿ ನಕಲಿ ಪಿಎಚ್‌ಡಿ ಪ್ರಮಾಣಪತ್ರ ಸಲ್ಲಿಸಿರುವವರಿರುವ ಸಾಧ್ಯತೆ ಇದೆ ಎಂಬ ಅನುಮಾನ ವ್ಯಕ್ತವಾಗಿದ್ದು, ದಾಖಲೆಗಳ ಸಮಗ್ರ ಪರಿಶೀಲನೆ ಮುಂದುವರಿದಿದೆ. ಕೆಲವು ಉಪನ್ಯಾಸಕರು ಪರಿಶೀಲನೆ ತಪ್ಪಿಸಲು ರಜೆ ಪಡೆದಿರುವುದು ಹಾಗೂ ಈ ವರ್ಷದ ನೇಮಕಾತಿ ಪ್ರಕ್ರಿಯೆಯಿಂದ ದೂರ ಉಳಿದಿರುವುದು ಕೂಡ ಇಲಾಖೆಯ ಗಮನಕ್ಕೆ ಬಂದಿದೆ. ಈ ಹಿನ್ನೆಲೆಯಲ್ಲಿ ರಾಜ್ಯದಾದ್ಯಂತ ದಾಖಲೆಗಳ ಪರಿಶೀಲನೆ ಮತ್ತಷ್ಟು ತೀವ್ರಗೊಳಿಸಲಾಗಿದ್ದು, ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಇಲಾಖೆ ತಿಳಿಸಿದೆ.

Related Articles

Leave a Reply

Your email address will not be published. Required fields are marked *

Back to top button