ಅಪರಾಧ

ಆಟೋ ಚಾಲಕನ ಮೇಲೆ ಮಾರಣಾಂತಿಕ ಹಲ್ಲೆ: ಇಬ್ಬರು ಆರೋಪಿಗಳ ಬಂಧನ

ದೇವಲ್ ಗಾಣಗಾಪುರದಲ್ಲಿ ಕ್ಷುಲ್ಲಕ ಕಾರಣಕ್ಕೆ ಆಟೋ ಚಾಲಕನ ಮೇಲೆ ಹಲ್ಲೆ; ಸಿಸಿಟಿವಿ ಆಧಾರದಲ್ಲಿ ಆರೋಪಿಗಳನ್ನು ಬಂಧಿಸಿದ ಪೊಲೀಸರು.

ಕಲಬುರಗಿ, ಜು.25: ಜಿಲ್ಲೆಯ ಅಫಜಲಪುರ ತಾಲೂಕಿನ ದೇವಲ್ ಗಾಣಗಾಪುರದಲ್ಲಿ ಆಟೋ ಚಾಲಕನ ಮೇಲೆ ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ದೇವಲ್ ಗಾಣಗಾಪುರ ಠಾಣೆ ಪೊಲೀಸರು ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ.

ಬಂಧಿತರನ್ನು ದೇವಲ್ ಗಾಣಗಾಪುರ ನಿವಾಸಿಗಳಾದ ಪ್ರಜ್ವಲ್ ಹಾಗೂ ಪ್ರೀತಂ ಎಂದು ಗುರುತಿಸಲಾಗಿದೆ. ಶುಕ್ರವಾರ ಬೆಳಗಿನ ಜಾವ ದತ್ತು ಎಂಬ ಆಟೋ ಚಾಲಕನ ಮೇಲೆ ಕ್ಷುಲ್ಲಕ ಕಾರಣಕ್ಕೆ ಇಬ್ಬರೂ ದ್ವಿಚಕ್ರ ವಾಹನದಲ್ಲಿ ಬಂದು ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿ ಪರಾರಿಯಾಗಿದ್ದರು ಎನ್ನಲಾಗಿದೆ.

ಘಟನೆಯ ದೃಶ್ಯಗಳು ಸಮೀಪದ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದ್ದು, ಅದರ ಆಧಾರದ ಮೇಲೆ ತನಿಖೆ ನಡೆಸಿದ ಪೊಲೀಸರು ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಗಂಭೀರವಾಗಿ ಗಾಯಗೊಂಡಿರುವ ದತ್ತು ಅವರನ್ನು ಕಲಬುರಗಿಯ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಅವರ ಆರೋಗ್ಯ ಸ್ಥಿತಿ ಇನ್ನೂ ಚಿಂತಾಜನಕವಾಗಿದೆ ಎಂದು ತಿಳಿದುಬಂದಿದೆ.

ಘಟನೆಯ ಮಾಹಿತಿ ತಿಳಿದ ಕೋಲಿ ಸಮಾಜದ ಮುಖಂಡರು ಆಸ್ಪತ್ರೆಗೆ ಭೇಟಿ ನೀಡಿ ಗಾಯಾಳುವಿನ ಆರೋಗ್ಯ ವಿಚಾರಿಸಿ ಕುಟುಂಬಸ್ಥರಿಗೆ ಧೈರ್ಯ ತುಂಬಿದರು. ಪ್ರಕರಣದ ಕುರಿತು ದೇವಲ್ ಗಾಣಗಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಮುಂದಿನ ತನಿಖೆ ಮುಂದುವರಿಸಿದ್ದಾರೆ.

Related Articles

Leave a Reply

Your email address will not be published. Required fields are marked *

Back to top button