ರಾಹುಲ್ ಗಾಂಧಿ ವಿರುದ್ಧದ ನೀತಿಗೆ ಖಂಡನೆ: ಕಲಬುರಗಿಯಲ್ಲಿ ಇಂದು ಮೌನ ಪಾದಯಾತ್ರೆ

ಕಲಬುರಗಿ, ಸೆ.11: ರಾಜ್ಯಸಭೆಯ ವಿರೋಧ ಪಕ್ಷದ ನಾಯಕ ಹಾಗೂ ಎಐಸಿಸಿ ಅಧ್ಯಕ್ಷ ಡಾ. ಮಲ್ಲಿಕಾರ್ಜುನ ಖರ್ಗೆ ಮತ್ತು ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರ ವಿರುದ್ಧದ ಕ್ರಮಗಳನ್ನು ಖಂಡಿಸಿ, ಸೆ.12ರಂದು ಬೆಳಿಗ್ಗೆ 10 ಗಂಟೆಗೆ ನಗರದಲ್ಲಿ ಮೌನ ಪಾದಯಾತ್ರೆ ನಡೆಸಲಾಗುವುದು ಎಂದು ಜಿಲ್ಲಾ ಕಾಂಗ್ರೆಸ್ ಪ್ರಚಾರ ಸಮಿತಿ ಅಧ್ಯಕ್ಷ ಅಶೋಕ ವೀರನಾಯಕ ತಿಳಿಸಿದರು.
ನಗರದ ಪತ್ರಿಕಾ ಭವನದಲ್ಲಿ ಶುಕ್ರವಾರ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ನಗರದ ಜಿಲ್ಲಾ ಕಾಂಗ್ರೆಸ್ ಕಚೇರಿಯಿಂದ ಅನ್ನಪೂರ್ಣ ಕ್ರಾಸ್ವರೆಗೆ, ಮಹಾತ್ಮ ಗಾಂಧೀಜಿ ಪ್ರತಿಮೆಯವರೆಗೆ ಮೌನ ಪಾದಯಾತ್ರೆ ನಡೆಯಲಿದೆ ಎಂದು ಹೇಳಿದರು.
ಕಳೆದ ಆಗಸ್ಟ್ 8ರಂದು ಉತ್ತರಾಖಂಡದ ಹಲ್ದ್ವಾನಿಯ ರಾಮಲೀಲಾ ಮೈದಾನದಲ್ಲಿ ನಡೆದ ಕಾರ್ಯಕ್ರಮದಲ್ಲಿ ಡಾ. ಮಲ್ಲಿಕಾರ್ಜುನ ಖರ್ಗೆ ಅವರು ಮಾಡಿದ ಭಾಷಣದ ವೇದಿಕೆಯನ್ನು ಕೆಲವರು ಶುದ್ಧೀಕರಣ ಮಾಡಿರುವುದು ಅತ್ಯಂತ ಖಂಡನೀಯ. ಈ ಘಟನೆಯನ್ನು ಖಂಡಿಸಿದ್ದ ರಾಹುಲ್ ಗಾಂಧಿ ವಿರುದ್ಧ ದುರುದ್ದೇಶಪೂರ್ವಕವಾಗಿ ಎಫ್ಐಆರ್ ದಾಖಲಿಸಲಾಗಿದೆ ಎಂದು ಅವರು ಆರೋಪಿಸಿದರು.
ಉತ್ತರಾಖಂಡ ಸರ್ಕಾರದ ಕ್ರಮವನ್ನು ಖಂಡಿಸಿ, ಮಹಾತ್ಮ ಗಾಂಧೀಜಿ ಹಾಗೂ ಡಾ. ಬಿ.ಆರ್. ಅಂಬೇಡ್ಕರ್ ಅವರ ಭಾವಚಿತ್ರಗಳೊಂದಿಗೆ ಮೌನ ಪ್ರತಿಭಟನೆ ನಡೆಸಲಾಗುವುದು. ಜಿಲ್ಲಾ ಕಾಂಗ್ರೆಸ್ ಮುಖಂಡರು ಹಾಗೂ ಕಾರ್ಯಕರ್ತರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕು ಎಂದು ಅವರು ಮನವಿ ಮಾಡಿದರು.
ಸುದ್ದಿಗೋಷ್ಠಿಯಲ್ಲಿ ಮಹಾಂತೇಶ ಕೌಲಗಿ, ಮಲ್ಲಪ್ಪ ಎಂ. ಹೊಸಮನಿ, ದಿನೇಶ್ ದೊಡ್ಡಮನಿ, ಮೋದಿನ್ ಪಟೇಲ್ ಅಣಬಿ, ಶರಣು ಶಾಸ್ತ್ರಿ, ಹರೀಶ್ ಖಾನಾಪುರ, ಹುಲಿಗೆಪ್ಪ ಕನಕಗಿರಿ, ಸಾಜೀದ್ ಅಲಿ ರಂಜೋಳ್, ನಂದಕುಮಾರ ನಾಗಭುಜಂಗಿ ಸೇರಿದಂತೆ ಹಲವರು ಉಪಸ್ಥಿತರಿದ್ದರು.



