ರಾಜಕೀಯ

ವಿದ್ಯಾರ್ಥಿಗಳ ಮೇಲೆ ಲಾಠಿ ಚಾರ್ಜ್ ಖಂಡನೆ: ಕೇಂದ್ರ ಗೃಹ ಸಚಿವ ಅಮಿತ್ ಶಾ ರಾಜೀನಾಮೆಗೆ ಎಸ್‌.ಆರ್‌. ಕೊಲ್ಲೂರು ಆಗ್ರಹ

ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಪ್ರತಿಭಟನೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೊಲೀಸ್ ಕ್ರಮ ಖಂಡನೆ; ಪ್ರಕರಣ ಹಿಂಪಡೆಯಲು ಹಾಗೂ ಮೃತ ವಿದ್ಯಾರ್ಥಿಗಳ ಕುಟುಂಬಗಳಿಗೆ ಪರಿಹಾರ ನೀಡಲು ಒತ್ತಾಯ.

ಕಲಬುರಗಿ, ಜು.25: ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣದ ಹಿನ್ನೆಲೆಯಲ್ಲಿ ದೆಹಲಿಯ ಜಂತರ್ ಮಂತರ್‌ನಲ್ಲಿ ಶಾಂತಿಯುತವಾಗಿ ಪ್ರತಿಭಟನೆ ನಡೆಸುತ್ತಿದ್ದ ವಿದ್ಯಾರ್ಥಿಗಳ ಮೇಲೆ ನಡೆದ ಪೊಲೀಸ್ ಲಾಠಿ ಚಾರ್ಜ್‌ನ್ನು ತೀವ್ರವಾಗಿ ಖಂಡಿಸಿರುವ ದಲಿತ ಸಂಘರ್ಷ ಸಮಿತಿ (ಅಂಬೇಡ್ಕರ್‌ವಾದಿ) ರಾಜ್ಯ ಸಂಚಾಲಕ ಎಸ್‌.ಆರ್‌. ಕೊಲ್ಲೂರು, ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ನೈತಿಕ ಹೊಣೆ ಹೊತ್ತು ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿದರು.

ನಗರದ ಪತ್ರಿಕಾ ಭವನದಲ್ಲಿ ಶನಿವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರದ ನಡೆ ಪ್ರಶ್ನಾರ್ಹವಾಗಿದೆ. ಶಿಕ್ಷಣ ವ್ಯವಸ್ಥೆಯ ಮೇಲಿನ ಜನರ ನಂಬಿಕೆಯನ್ನು ಉಳಿಸಬೇಕಾದರೆ ಸಂಬಂಧಪಟ್ಟವರ ವಿರುದ್ಧ ಕಠಿಣ ಕ್ರಮ ಜರುಗಿಸಬೇಕು ಎಂದು ಒತ್ತಾಯಿಸಿದರು.

ವಿದ್ಯಾರ್ಥಿಗಳ ಮೇಲೆ ನಡೆದ ಪೊಲೀಸ್ ದೌರ್ಜನ್ಯ ಪ್ರಜಾಪ್ರಭುತ್ವದ ಮೌಲ್ಯಗಳಿಗೆ ವಿರುದ್ಧವಾಗಿದ್ದು, ಪ್ರತಿಭಟನೆ ನಡೆಸುತ್ತಿದ್ದ ವಿದ್ಯಾರ್ಥಿಗಳ ಮೇಲೆ ಬಲಪ್ರಯೋಗ ಮಾಡಿರುವುದನ್ನು ಖಂಡನೀಯ ಎಂದು ಹೇಳಿದರು. ಲಾಠಿ ಚಾರ್ಜ್‌ಗೆ ಕಾರಣರಾದ ಪೊಲೀಸ್ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳಬೇಕು ಹಾಗೂ ವಿದ್ಯಾರ್ಥಿಗಳ ಮೇಲೆ ದಾಖಲಿಸಿರುವ ಪ್ರಕರಣಗಳನ್ನು ಕೂಡಲೇ ಹಿಂಪಡೆಯಬೇಕು ಎಂದು ಆಗ್ರಹಿಸಿದರು.

ನೀಟ್ ಪರೀಕ್ಷೆಯಲ್ಲಿನ ಅಕ್ರಮಗಳಿಂದ ದೇಶದಾದ್ಯಂತ ಸಾವಿರಾರು ವಿದ್ಯಾರ್ಥಿಗಳು ಮಾನಸಿಕ ಒತ್ತಡಕ್ಕೆ ಒಳಗಾಗಿದ್ದು, ಹಲವರು ಆತ್ಮಹತ್ಯೆಗೆ ಶರಣಾಗಿರುವುದು ಆತಂಕಕಾರಿ ಬೆಳವಣಿಗೆಯಾಗಿದೆ. ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿಗಳ ಕುಟುಂಬಗಳಿಗೆ ಸಮರ್ಪಕ ಪರಿಹಾರ ನೀಡಬೇಕು ಎಂದು ಅವರು ಒತ್ತಾಯಿಸಿದರು.

ಮುಂದಿನ ದಿನಗಳಲ್ಲಿ ನೀಟ್ ಪರೀಕ್ಷೆಯ ಸಂಪೂರ್ಣ ಜವಾಬ್ದಾರಿಯನ್ನು ಆಯಾ ರಾಜ್ಯ ಸರ್ಕಾರಗಳಿಗೆ ನೀಡುವ ಕುರಿತು ಕೇಂದ್ರ ಸರ್ಕಾರ ಗಂಭೀರವಾಗಿ ಚಿಂತನೆ ನಡೆಸಬೇಕು. ಮರುಮರು ಪ್ರಶ್ನೆಪತ್ರಿಕೆ ಸೋರಿಕೆ ಹಾಗೂ ಪರೀಕ್ಷಾ ಅಕ್ರಮಗಳು ನಡೆಯುತ್ತಿರುವ ಹಿನ್ನೆಲೆಯಲ್ಲಿ ಪಾರದರ್ಶಕ ಪರೀಕ್ಷಾ ವ್ಯವಸ್ಥೆ ಜಾರಿಗೆ ತರಬೇಕೆಂದು ಆಗ್ರಹಿಸಿದರು.

2024ರ ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣದಲ್ಲಿ ಬಂಧಿಸಲ್ಪಟ್ಟವರ ವಿರುದ್ಧ ಇದುವರೆಗೆ ಯಾವ ಕ್ರಮ ಕೈಗೊಳ್ಳಲಾಗಿದೆ ಎಂಬುದನ್ನು ಕೇಂದ್ರ ಸರ್ಕಾರ ದೇಶದ ಜನತೆಗೆ ಸ್ಪಷ್ಟಪಡಿಸಬೇಕು ಎಂದು ಎಸ್‌.ಆರ್‌. ಕೊಲ್ಲೂರು ಒತ್ತಾಯಿಸಿದರು.

ಸುದ್ದಿಗೋಷ್ಠಿಯಲ್ಲಿ ಮರೇಪ್ಪ ಬನ್ನಟ್ಟಿ, ಪಾಂಡುರಂಗ ಮದನಕರ್, ಮಲ್ಲಿಕಾರ್ಜುನ ಶೆಳ್ಳಗಿ ಸೇರಿದಂತೆ ಸಂಘಟನೆಯ ಮುಖಂಡರು ಉಪಸ್ಥಿತರಿದ್ದರು.

Related Articles

Leave a Reply

Your email address will not be published. Required fields are marked *

Back to top button