ಆಗಸ್ಟ್ 1ರಂದು ಶ್ರೀ ಮಹಾಂತ ಶಿವಯೋಗಿಗಳ ಜನ್ಮದಿನ: ವ್ಯಸನಮುಕ್ತ ದಿನಾಚರಣೆಗೆ ಸಕಲ ಸಿದ್ಧತೆ ಕೈಗೊಳ್ಳಲು ಸೂಚನೆ
ಅಪರ ಜಿಲ್ಲಾಧಿಕಾರಿ ರಾಯಪ್ಪ ಹುಣಸಗಿ ಅಧ್ಯಕ್ಷತೆಯಲ್ಲಿ ಪೂರ್ವಭಾವಿ ಸಭೆ; ಜಿಲ್ಲೆ-ತಾಲೂಕು ಮಟ್ಟದಲ್ಲಿ ಅರ್ಥಪೂರ್ಣ ಆಚರಣೆಗೆ ಒತ್ತು

ಶ್ರೀ ಶ್ರೀ ಶ್ರೀ ಮ.ನಿ.ಪ್ರ. ಡಾ. ಮಹಾಂತ ಶಿವಯೋಗಿಗಳ ಜನ್ಮದಿನಾಚರಣೆಯ ಅಂಗವಾಗಿ ಆಗಸ್ಟ್ 1ರಂದು ನಡೆಯಲಿರುವ ವ್ಯಸನಮುಕ್ತ ದಿನಾಚರಣೆಯನ್ನು ಅರ್ಥಪೂರ್ಣ ಹಾಗೂ ಯಶಸ್ವಿಯಾಗಿ ಆಚರಿಸಲು ಅಗತ್ಯ ಪೂರ್ವಸಿದ್ಧತೆಗಳನ್ನು ಕೈಗೊಳ್ಳುವಂತೆ ಅಪರ ಜಿಲ್ಲಾಧಿಕಾರಿ ರಾಯಪ್ಪ ಹುಣಸಗಿ ಸಂಬಂಧಿತ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಮಂಗಳವಾರ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ನಡೆದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಆಗಸ್ಟ್ 1ರಂದು ಬೆಳಿಗ್ಗೆ 11 ಗಂಟೆಗೆ ಕಲಬುರಗಿ ನಗರದ ಆದರ್ಶನಗರದಲ್ಲಿರುವ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಶ್ರೀ ಮಹಾಂತ ಶಿವಯೋಗಿಗಳ ಜನ್ಮದಿನಾಚರಣೆ ಹಾಗೂ ವ್ಯಸನಮುಕ್ತ ದಿನಾಚರಣೆ ಕಾರ್ಯಕ್ರಮ ಆಯೋಜಿಸಲಾಗುತ್ತಿದೆ ಎಂದು ತಿಳಿಸಿದರು.
ಕಾರ್ಯಕ್ರಮದ ಯಶಸ್ವಿ ಆಯೋಜನೆಗಾಗಿ ತಾಲೂಕು ಮಟ್ಟದಲ್ಲಿ ತಹಶೀಲ್ದಾರರ ನೇತೃತ್ವದಲ್ಲಿ ಪೂರ್ವಭಾವಿ ಸಭೆಗಳನ್ನು ನಡೆಸಿ ಅಗತ್ಯ ಸಿದ್ಧತೆಗಳನ್ನು ಪೂರ್ಣಗೊಳಿಸಬೇಕು ಎಂದು ಸೂಚಿಸಿದರು. ಕಾರ್ಯಕ್ರಮಕ್ಕೆ ನಿಯೋಜಿಸಲಾದ ಎಲ್ಲ ಅಧಿಕಾರಿಗಳು ತಮ್ಮ ಜವಾಬ್ದಾರಿಗಳನ್ನು ಸಮರ್ಪಕವಾಗಿ ನಿರ್ವಹಿಸಬೇಕು. ಭಾಗವಹಿಸುವವರಿಗೆ ಕುಡಿಯುವ ನೀರು ಮತ್ತು ಉಪಹಾರದ ವ್ಯವಸ್ಥೆಯನ್ನು ಸಮರ್ಪಕವಾಗಿ ಕಲ್ಪಿಸುವಂತೆ ಸಂಬಂಧಿತ ಇಲಾಖೆಗೆ ನಿರ್ದೇಶನ ನೀಡಿದರು.
ಜಿಲ್ಲೆ ಹಾಗೂ ತಾಲೂಕು ಮಟ್ಟದ ಎಲ್ಲಾ ಸರ್ಕಾರಿ ಮತ್ತು ಅರೆ ಸರ್ಕಾರಿ ಕಚೇರಿಗಳು, ಶಾಲಾ-ಕಾಲೇಜುಗಳಲ್ಲಿ ಆಗಸ್ಟ್ 1ರಂದು ಬೆಳಿಗ್ಗೆ 9 ಗಂಟೆಗೆ ಕಡ್ಡಾಯವಾಗಿ ಶ್ರೀ ಮಹಾಂತ ಶಿವಯೋಗಿಗಳ ಜನ್ಮದಿನಾಚರಣೆಯನ್ನು ಆಚರಿಸುವಂತೆ ಸೂಚಿಸಲಾಯಿತು.
ವಿದ್ಯಾರ್ಥಿಗಳಲ್ಲಿ ವ್ಯಸನದ ದುಷ್ಪರಿಣಾಮಗಳ ಕುರಿತು ಜಾಗೃತಿ ಮೂಡಿಸುವುದರ ಜೊತೆಗೆ ಶ್ರೀ ಮಹಾಂತ ಶಿವಯೋಗಿಗಳ ತತ್ವ, ಆದರ್ಶ ಹಾಗೂ ಜೀವನ ಸಂದೇಶಗಳ ಕುರಿತು 15 ರಿಂದ 20 ನಿಮಿಷಗಳ ವಿಶೇಷ ಉಪನ್ಯಾಸ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲು ನಿರ್ಧರಿಸಲಾಯಿತು. ವೇದಿಕೆ ಅಲಂಕಾರದ ಜವಾಬ್ದಾರಿಯನ್ನು ತೋಟಗಾರಿಕೆ ಇಲಾಖೆಗೆ ಹಾಗೂ ವೈದ್ಯಕೀಯ ಮತ್ತು ಅಗತ್ಯ ಸಹಕಾರದ ಹೊಣೆಯನ್ನು ಆರೋಗ್ಯ ಇಲಾಖೆಗೆ ವಹಿಸಲಾಯಿತು.
ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಉಪನಿರ್ದೇಶಕ ಜಡಿಯಪ್ಪ ಗೆದ್ಲಗಟ್ಟಿ ಅವರು ಕಾರ್ಯಕ್ರಮದ ಪ್ರೋಟೋಕಾಲ್‌ಗೆ ಅನುಗುಣವಾಗಿ ಆಹ್ವಾನ ಪತ್ರಿಕೆಗಳನ್ನು ಮುದ್ರಿಸಿ ವಿತರಿಸಲಾಗುವುದು ಎಂದು ತಿಳಿಸಿದರು.
ಸಭೆಯಲ್ಲಿ ಸಹಾಯಕ ಕಾರ್ಯನಿರ್ವಾಹಕ ಅಭಿಯಂತರ ಅಜೀಂ ಪಾಶಾ, ಜಿಲ್ಲಾ ಪಂಚಾಯತ್ ಸಹಾಯಕ ಯೋಜನಾಧಿಕಾರಿ ಚನ್ನಪ್ಪ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಕಚೇರಿಯ ಆರೋಗ್ಯ ನಿರೀಕ್ಷಣಾಧಿಕಾರಿ ಇಕ್ಬಾಲ್ ಮಹಾಗಾವಿ, ಆರೋಗ್ಯ ಇಲಾಖೆಯ ನಾಗರಾಜ ಬಿರಾದಾರ, ಸಮಾಜ ಕಲ್ಯಾಣ ಇಲಾಖೆಯ ಲೆಕ್ಕಾಧೀಕ್ಷಕ ಮೊಹಮ್ಮದ್ ಇರ್ಫಾನ್, ಶಾಲಾ ಶಿಕ್ಷಣ ಇಲಾಖೆಯ ಜಿಲ್ಲಾ ದೈಹಿಕ ಶಿಕ್ಷಣಾಧಿಕಾರಿ ರಾಜಶೇಖರ ಗೋನಾಯಕ, ಪದವಿ ಪೂರ್ವ ಶಿಕ್ಷಣ ಇಲಾಖೆಯ ಅಧೀಕ್ಷಕ ಆಕಾಶದೀಪ ಸೇರಿದಂತೆ ವಿವಿಧ ಜಿಲ್ಲಾ ಮಟ್ಟದ ಅಧಿಕಾರಿಗಳು ಹಾಗೂ ತಾಲೂಕು ತಹಶೀಲ್ದಾರರು ಉಪಸ್ಥಿತರಿದ್ದರು.



