ಜಿಲ್ಲಾಸುದ್ದಿ
ಮಾಜಿ ಮುಖ್ಯಮಂತ್ರಿ ಧರ್ಮಸಿಂಗ್ ಆಪ್ತ ಹನುಮಂತರಾವ್ ಭೂಸನೂರ್ ಇನ್ನಿಲ್ಲ

ಕಲಬುರಗಿ, ಸೆ.22: ಬಿಜೆಪಿ ಮುಖಂಡ ಹಾಗೂ ಮಾಜಿ ಮುಖ್ಯಮಂತ್ರಿ ದಿ. ಡಾ. ಎನ್. ಧರ್ಮಸಿಂಗ್ ಅವರ ಆಪ್ತರಾಗಿದ್ದ ಹನುಮಂತರಾವ್ ಭೂಸನೂರ್ (61) ಅವರು ಮಂಗಳವಾರ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು.
ಹಲವು ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಅವರು ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಚಿಕಿತ್ಸೆ ಫಲಕಾರಿಯಾಗದೆ ನಿಧನರಾದರು. ಮೃತರು ಪತ್ನಿ, ಪುತ್ರಿ ಸೇರಿದಂತೆ ಅಪಾರ ಬಂಧು ಬಳಗವನ್ನು ಅಗಲಿದ್ದಾರೆ.
ಅಂತ್ಯಕ್ರಿಯೆ ಸೆ.23ರಂದು ಬುಧವಾರ ಮಧ್ಯಾಹ್ನ 2 ಗಂಟೆಗೆ ಆಳಂದ ತಾಲ್ಲೂಕಿನ ಕಡಗಂಚಿ ಗ್ರಾಮದ ಅವರ ಸ್ವಂತ ತೋಟದಲ್ಲಿ ನೆರವೇರಲಿದೆ ಎಂದು ಕುಟುಂಬದ ಮೂಲಗಳು ತಿಳಿಸಿವೆ.
ಹನುಮಂತರಾವ್ ಭೂಸನೂರ್ ಅವರು ಕಾಂಗ್ರೆಸ್ನ ಕಟ್ಟಾ ಕಾರ್ಯಕರ್ತರಾಗಿದ್ದರು. ಇತ್ತೀಚೆಗೆ ಕಾಂಗ್ರೆಸ್ ಪಕ್ಷಕ್ಕೆ ರಾಜೀನಾಮೆ ಸಲ್ಲಿಸಿ ಬಿಜೆಪಿಗೆ ಸೇರ್ಪಡೆಯಾಗಿದ್ದರು.
ಅವರ ನಿಧನಕ್ಕೆ ವಿವಿಧ ಕ್ಷೇತ್ರಗಳ ಗಣ್ಯರು ಹಾಗೂ ಅಭಿಮಾನಿಗಳು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.



