ಜಿಲ್ಲಾಸುದ್ದಿ

ಹೀರಾಪುರದಲ್ಲಿ ನೀರಿನ ಟ್ಯಾಂಕರ್‌ಗಳ ಅಬ್ಬರ: ನಿವಾಸಿಗಳ ಜೀವಕ್ಕೆ ಅಪಾಯ, ಕ್ರಮಕ್ಕೆ ಆಗ್ರಹ

ರಸ್ತೆ ಮಧ್ಯೆ ಟ್ಯಾಂಕರ್ ಭಾಗ ಬಿದ್ದು ಆತಂಕ; ನಿಯಮ ಉಲ್ಲಂಘಿಸುವ ವಾಹನಗಳ ವಿರುದ್ಧ ಕಠಿಣ ಕ್ರಮಕ್ಕೆ ನಿವಾಸಿಗಳ ಒತ್ತಾಯ

ಕಲಬುರಗಿ, ಜು.28: ನಗರದ ಹೊರವಲಯದ ಹೀರಾಪುರ ಬಡಾವಣೆಯಲ್ಲಿ ಅತಿವೇಗ ಹಾಗೂ ನಿರ್ಲಕ್ಷ್ಯದಿಂದ ಸಂಚರಿಸುವ ನೀರಿನ ಟ್ಯಾಂಕರ್‌ಗಳಿಂದ ಸಾರ್ವಜನಿಕರ ಜೀವಕ್ಕೆ ಅಪಾಯ ಎದುರಾಗುತ್ತಿದೆ ಎಂದು ಆರೋಪಿಸಿರುವ ನಿವಾಸಿಗಳು, ಈ ಕುರಿತು ನಗರ ಪೊಲೀಸ್ ಆಯುಕ್ತರಿಗೆ ದೂರು ನೀಡಿದ್ದರೂ ಇದುವರೆಗೆ ಯಾವುದೇ ಪರಿಣಾಮಕಾರಿ ಕ್ರಮ ಕೈಗೊಳ್ಳದಿರುವುದಕ್ಕೆ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಮಂಗಳವಾರ ಬೆಳಿಗ್ಗೆ ಸುಮಾರು 10 ಗಂಟೆ ವೇಳೆಗೆ ನೀರಿನ ಟ್ಯಾಂಕರ್‌ನ ಹಿಂಭಾಗದ ಟ್ಯಾಂಕ್ ರಸ್ತೆ ಮಧ್ಯದಲ್ಲೇ ಬಿದ್ದ ಘಟನೆ ಸಂಭವಿಸಿದೆ. ಅದೃಷ್ಟವಶಾತ್ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ. ಆದರೆ ಕೆಲಕಾಲ ವಾಹನ ಸಂಚಾರಕ್ಕೆ ತೀವ್ರ ಅಡಚಣೆ ಉಂಟಾಗಿ ಸಾರ್ವಜನಿಕರು ಆತಂಕಕ್ಕೀಡಾದರು.

ಇಂತಹ ಘಟನೆಗಳು ಮುಂದಿನ ದಿನಗಳಲ್ಲಿ ದೊಡ್ಡ ದುರಂತಕ್ಕೆ ಕಾರಣವಾಗುವ ಸಾಧ್ಯತೆ ಇರುವುದರಿಂದ ಸಂಬಂಧಪಟ್ಟ ಅಧಿಕಾರಿಗಳು ಈ ವಿಷಯವನ್ನು ಗಂಭೀರವಾಗಿ ಪರಿಗಣಿಸಿ ತಕ್ಷಣ ಕ್ರಮ ಕೈಗೊಳ್ಳಬೇಕು ಎಂದು ನಿವಾಸಿಗಳು ಆಗ್ರಹಿಸಿದ್ದಾರೆ.

ಹೀರಾಪುರ ಬಡಾವಣೆಯಲ್ಲಿ ಪ್ರತಿದಿನ ಹೆಚ್ಚಿನ ಸಂಖ್ಯೆಯಲ್ಲಿ ನೀರಿನ ಟ್ಯಾಂಕರ್‌ಗಳು ಸಂಚರಿಸುತ್ತಿದ್ದು, ಸಾರ್ವಜನಿಕರ ಸುರಕ್ಷಿತ ಸಂಚಾರಕ್ಕೆ ತೊಂದರೆಯಾಗುತ್ತಿದೆ. ಕೆಲವು ವಾಹನಗಳಲ್ಲಿ ನೋಂದಣಿ ಸಂಖ್ಯೆ ಫಲಕಗಳೇ ಇಲ್ಲದಿರುವುದು ಕಂಡುಬರುತ್ತಿದೆ. ಇಂತಹ ವಾಹನಗಳ ವಿರುದ್ಧ ಇದುವರೆಗೆ ಕ್ರಮ ಕೈಗೊಳ್ಳದಿರುವುದು ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ.

ಈ ಕುರಿತು ಸ್ಥಳೀಯ ಅಶೋಕನಗರ ಪೊಲೀಸ್ ಠಾಣೆಯ ಪೊಲೀಸ್ ಇನ್‌ಸ್ಪೆಕ್ಟರ್ ಅವರನ್ನು ದೂರವಾಣಿ ಮೂಲಕ ಸಂಪರ್ಕಿಸಲು ಪ್ರಯತ್ನಿಸಿದರೂ ಕರೆ ಸ್ವೀಕರಿಸಿಲ್ಲ ಎಂದು ನಿವಾಸಿಗಳು ತಿಳಿಸಿದ್ದಾರೆ. ಹೀಗಾಗಿ ನಗರ ಪೊಲೀಸ್ ಆಯುಕ್ತರು ತಕ್ಷಣ ಮಧ್ಯಪ್ರವೇಶಿಸಿ ಹೀರಾಪುರದಲ್ಲಿ ಸಂಚರಿಸುವ ನೀರಿನ ಟ್ಯಾಂಕರ್‌ಗಳ ದಾಖಲೆಗಳು, ನೋಂದಣಿ ಸಂಖ್ಯೆ, ಪರವಾನಗಿ ಹಾಗೂ ಸುರಕ್ಷತಾ ಮಾನದಂಡಗಳನ್ನು ಪರಿಶೀಲಿಸಬೇಕು ಎಂದು ಒತ್ತಾಯಿಸಿದ್ದಾರೆ.

ನಿಯಮ ಉಲ್ಲಂಘಿಸುವ ಹಾಗೂ ಸಾರ್ವಜನಿಕರ ಸುರಕ್ಷತೆಗೆ ಧಕ್ಕೆ ಉಂಟುಮಾಡುವ ಟ್ಯಾಂಕರ್‌ಗಳ ವಿರುದ್ಧ ಕಾನೂನು ಕ್ರಮ ಜರುಗಿಸಿ, ಅಸುರಕ್ಷಿತ ವಾಹನಗಳ ಸಂಚಾರಕ್ಕೆ ಕಡಿವಾಣ ಹಾಕಬೇಕು. ಜೊತೆಗೆ ಹೀರಾಪುರ ನಿವಾಸಿಗಳಿಗೆ ಸುರಕ್ಷಿತ ಹಾಗೂ ಸುಗಮ ಸಂಚಾರದ ವಾತಾವರಣ ಕಲ್ಪಿಸಬೇಕು ಎಂದು ನಿವಾಸಿಗಳು ಮನವಿ ಮಾಡಿದ್ದಾರೆ.

Related Articles

Leave a Reply

Your email address will not be published. Required fields are marked *

Back to top button