
ಕಲಬುರಗಿ, ಜು.11: ಗುಲ್ಬರ್ಗಾ ವಿಶ್ವವಿದ್ಯಾಲಯದ ಸಿಂಡಿಕೇಟ್ ಸದಸ್ಯ ಹಾಗೂ ಕಲ್ಯಾಣ ಕರ್ನಾಟಕ ಪ್ರದೇಶಾಭಿವೃದ್ಧಿ ಮಂಡಳಿ ಅಧ್ಯಕ್ಷರಾಗಿರುವ ಶಾಸಕ ಡಾ. ಅಜಯ್ ಸಿಂಗ್ ಅವರ ಆಪ್ತ ಉದಯಕಾಂತ್ ಜೇವರ್ಗಿ ಅವರ ಶೈಕ್ಷಣಿಕ ಅರ್ಹತೆ ಮತ್ತು ಪದವಿ ಪ್ರಮಾಣಪತ್ರದ ಕುರಿತು ಅನುಮಾನ ವ್ಯಕ್ತಪಡಿಸಿರುವ ಶ್ರೀರಾಮ ಸೇನೆ, ಈ ಕುರಿತು ಉನ್ನತ ಮಟ್ಟದ ತನಿಖೆ ನಡೆಸಬೇಕು ಎಂದು ಆಗ್ರಹಿಸಿದೆ.
ನಗರದಲ್ಲಿ ಶನಿವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಶ್ರೀರಾಮ ಸೇನೆ ರಾಜ್ಯಾಧ್ಯಕ್ಷ ಸಿದ್ದಲಿಂಗ ಸ್ವಾಮೀಜಿ, ಆರೋಪಗಳು ಸಾಬೀತಾದರೆ ಸಂಬಂಧಪಟ್ಟವರ ವಿರುದ್ಧ ಕ್ರಿಮಿನಲ್ ಪ್ರಕರಣ ದಾಖಲಿಸಬೇಕು. ಇಲ್ಲವಾದರೆ ಗುಲ್ಬರ್ಗಾ ವಿಶ್ವವಿದ್ಯಾಲಯದ ಮುಂದೆ ಹೋರಾಟ ನಡೆಸಲಾಗುವುದು ಎಂದು ಎಚ್ಚರಿಕೆ ನೀಡಿದರು.
ವಿಶ್ವವಿದ್ಯಾಲಯದ ನಿಯಮಗಳ ಪ್ರಕಾರ ಸಿಂಡಿಕೇಟ್ ಸದಸ್ಯರಾಗಿ ನಾಮನಿರ್ದೇಶನಗೊಂಡವರು ತಮ್ಮ ಶೈಕ್ಷಣಿಕ ದಾಖಲೆಗಳು ಮತ್ತು ಪದವಿ ಪ್ರಮಾಣಪತ್ರಗಳನ್ನು ನಿಗದಿತ ಅವಧಿಯೊಳಗೆ ಸಲ್ಲಿಸಬೇಕಾಗುತ್ತದೆ. ಆದರೆ ಉದಯಕಾಂತ್ ಜೇವರ್ಗಿ ಅವರು ಈ ಪ್ರಕ್ರಿಯೆಯನ್ನು ಪೂರ್ಣಗೊಳಿಸಿಲ್ಲ ಎಂದು ಅವರು ಆರೋಪಿಸಿದರು.
ಜೇವರ್ಗಿ ಅವರು ಗುಜರಾತ್ನ ಖಾಸಗಿ ಶಿಕ್ಷಣ ಸಂಸ್ಥೆಯಿಂದ ಸ್ನಾತಕೋತ್ತರ ಪದವಿ ಪಡೆದಿರುವುದಾಗಿ ಹೇಳಿಕೊಂಡಿದ್ದರೂ, ಆ ಸಂಸ್ಥೆಯ ಮಾನ್ಯತೆ ಹಾಗೂ ದಾಖಲೆಗಳ ಬಗ್ಗೆ ಅನುಮಾನಗಳಿವೆ ಎಂದು ಸೇನೆ ಆರೋಪಿಸಿದೆ. ಸರ್ಕಾರ ಹಾಗೂ ವಿಶ್ವವಿದ್ಯಾಲಯ ಈ ದಾಖಲೆಗಳ ಸತ್ಯಾಸತ್ಯತೆ ಪರಿಶೀಲಿಸಿ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಲಾಯಿತು.
2024ರ ಆಗಸ್ಟ್ 27ರಂದು ರಾಜ್ಯ ಸರ್ಕಾರ ಕರ್ನಾಟಕ ರಾಜ್ಯ ವಿಶ್ವವಿದ್ಯಾಲಯಗಳ ಅಧಿನಿಯಮದ ಅನ್ವಯ ಗುಲ್ಬರ್ಗಾ ವಿಶ್ವವಿದ್ಯಾಲಯ ಸೇರಿದಂತೆ ವಿವಿಧ ವಿಶ್ವವಿದ್ಯಾಲಯಗಳ ಸಿಂಡಿಕೇಟ್ ಸದಸ್ಯರನ್ನು ನಾಮನಿರ್ದೇಶನ ಮಾಡಿತ್ತು. ನಾಮನಿರ್ದೇಶಿತ ಸದಸ್ಯರು ತಮ್ಮ ಶೈಕ್ಷಣಿಕ ದಾಖಲೆಗಳನ್ನು ಸಂಬಂಧಿತ ವಿಶ್ವವಿದ್ಯಾಲಯಕ್ಕೆ ಸಲ್ಲಿಸಿ ಪರಿಶೀಲನೆಗೆ ಒಳಪಡಿಸಬೇಕೆಂಬ ನಿಯಮವಿದೆ ಎಂದು ಅವರು ನೆನಪಿಸಿದರು.
ಆದರೆ ಎರಡು ವರ್ಷ ಕಳೆದರೂ ದಾಖಲೆಗಳ ಸಮಗ್ರ ಪರಿಶೀಲನೆ ನಡೆದಿಲ್ಲ ಎಂದು ಆರೋಪಿಸಿದ ಅವರು, ಈ ವಿಚಾರದಲ್ಲಿ ಸಂಬಂಧಪಟ್ಟ ಅಧಿಕಾರಿಗಳ ಪಾತ್ರದ ಮೇಲೂ ಅನುಮಾನ ವ್ಯಕ್ತಪಡಿಸಿದರು.
ಕೂಡಲೇ ಪ್ರಕರಣದ ಕುರಿತು ಉನ್ನತ ಮಟ್ಟದ ತನಿಖೆ ನಡೆಸಿ, ತಪ್ಪಿತಸ್ಥರ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಶ್ರೀರಾಮ ಸೇನೆ ಆಗ್ರಹಿಸಿತು.
ಸುದ್ದಿಗೋಷ್ಠಿಯಲ್ಲಿ ರಾಕೇಶ್ ಜಮಾದಾರ್, ಗುರುಶಾಂತ್ ತೆಂಗಳಿ, ಮಲ್ಲಿಕಾರ್ಜುನ ಹಿರೇಪೂಜಾರಿ, ಸುಧಾಕರ್, ರೋಹಿತ್ ಪಿಸ್ಕೆ, ನಿಂಗಣ್ಣ ಕೊಣ್ಣೂರು ಸೇರಿದಂತೆ ಹಲವರು ಉಪಸ್ಥಿತರಿದ್ದರು.



