ಕಲ್ಯಾಣ ಕರ್ನಾಟಕವನ್ನು ಬರಪೀಡಿತ ಪ್ರದೇಶವೆಂದು ಘೋಷಿಸಲು ಆಗ್ರಹ
ರೈತರ ಬೆಳೆಸಾಲ ಮನ್ನಾ, ಪ್ರತಿ ಎಕರೆಗೆ ₹30 ಸಾವಿರ ಪರಿಹಾರ ಹಾಗೂ ಜಾನುವಾರುಗಳಿಗೆ ಮೇವು-ನೀರಿನ ತುರ್ತು ವ್ಯವಸ್ಥೆಗೆ ಒತ್ತಾಯ

ಕಲಬುರಗಿ, ಜು.29: ಕಲ್ಯಾಣ ಕರ್ನಾಟಕ ಭಾಗವನ್ನು ತಕ್ಷಣವೇ ಬರಪೀಡಿತ ಪ್ರದೇಶವೆಂದು ಘೋಷಿಸಿ, ರೈತರ ಬೆಳೆಸಾಲವನ್ನು ಮನ್ನಾ ಮಾಡಬೇಕು ಎಂದು ಕರ್ನಾಟಕ ಸಂಘಟನಾ ವೇದಿಕೆಯ ಸಂಸ್ಥಾಪಕ ರಾಜ್ಯಾಧ್ಯಕ್ಷ ಗುರು ಬಂಡಿ ಆಗ್ರಹಿಸಿದರು.
ನಗರದ ಪತ್ರಿಕಾ ಭವನದಲ್ಲಿ ಬುಧವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕಲ್ಯಾಣ ಕರ್ನಾಟಕದ ಎಲ್ಲಾ ಜಿಲ್ಲೆಗಳು, ತಾಲ್ಲೂಕುಗಳು ಹಾಗೂ ಗ್ರಾಮಗಳನ್ನು ಬರಪೀಡಿತ ಪ್ರದೇಶಗಳೆಂದು ಘೋಷಿಸಿ ಸರ್ಕಾರ ವಿಶೇಷ ಪರಿಹಾರ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಒತ್ತಾಯಿಸಿದರು.
ಬರದಿಂದ ತೀವ್ರ ಸಂಕಷ್ಟದಲ್ಲಿರುವ ರೈತರಿಗೆ ಪ್ರತಿ ಎಕರೆಗೆ ₹30 ಸಾವಿರ ಪರಿಹಾರ ನೀಡಬೇಕು. ಬೆಳೆ ನಷ್ಟದಿಂದ ಆರ್ಥಿಕ ಸಂಕಷ್ಟಕ್ಕೆ ಸಿಲುಕಿರುವ ರೈತರ ಬೆಳೆಸಾಲವನ್ನು ಕೂಡಲೇ ಮನ್ನಾ ಮಾಡಬೇಕು ಎಂದು ಅವರು ಆಗ್ರಹಿಸಿದರು.
ಈ ಬಾರಿ ಮುಂಗಾರು ಮಳೆಯ ಕೊರತೆಯಿಂದ ಹೆಸರು, ಉದ್ದು, ತೊಗರಿ ಸೇರಿದಂತೆ ಹಲವು ಬೆಳೆಗಳು ಹಾನಿಗೊಳಗಾಗಿವೆ. ಹಲವೆಡೆ ಇನ್ನೂ ಬಿತ್ತನೆ ಕಾರ್ಯವೇ ಆರಂಭವಾಗಿಲ್ಲ. ರೈತರು ಸಾಲ ಮಾಡಿ ಬೀಜ ಹಾಗೂ ರಸಗೊಬ್ಬರ ಖರೀದಿಸಿದ್ದರೂ ಮಳೆಯ ಕೊರತೆಯಿಂದ ಸಂಕಷ್ಟಕ್ಕೆ ಸಿಲುಕಿದ್ದಾರೆ ಎಂದು ಅವರು ತಿಳಿಸಿದರು.
ಈ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಪರಿಸ್ಥಿತಿಯ ಗಂಭೀರತೆಯನ್ನು ಮನಗಂಡು ರೈತರ ನೆರವಿಗೆ ತುರ್ತು ಕ್ರಮಗಳನ್ನು ಕೈಗೊಳ್ಳಬೇಕು. ಜಾನುವಾರುಗಳಿಗೆ ಮೇವು ಮತ್ತು ಕುಡಿಯುವ ನೀರಿನ ವ್ಯವಸ್ಥೆಯನ್ನು ಕೂಡಲೇ ಕಲ್ಪಿಸಿ ಗ್ರಾಮೀಣ ಪ್ರದೇಶಗಳಲ್ಲಿ ಉಂಟಾಗಿರುವ ಸಂಕಷ್ಟವನ್ನು ನಿವಾರಿಸಬೇಕು ಎಂದು ಒತ್ತಾಯಿಸಿದರು.
ಸುದ್ದಿಗೋಷ್ಠಿಯಲ್ಲಿ ಪ್ರದೀಪ್ ಓಂಕಾರ್, ಸಚಿನ್ ಪೂಜಾರಿ, ಸಾಗರ್ ಭಾವಿ, ಅನಿಲ್ ಬಂಡಿ, ಶಿವಕುಮಾರ್ ಪಾಟೀಲ್, ಬೀರು ಪೂಜಾರಿ ಸೇರಿದಂತೆ ಸಂಘಟನೆಯ ಪದಾಧಿಕಾರಿಗಳು ಉಪಸ್ಥಿತರಿದ್ದರು.



