ರಾಜಕೀಯ

ಎಲ್ಲಾ ವಿದ್ಯಾರ್ಥಿನಿಲಯಗಳಿಗೆ ಸಚಿವ ಪ್ರಿಯಾಂಕ್ ಖರ್ಗೆ ಭೇಟಿ ನೀಡಲಿ: ಬಿಜೆಪಿ ಆಗ್ರಹ

ವಿದ್ಯಾರ್ಥಿನಿಲಯಗಳ ದುಸ್ಥಿತಿ ಪರಿಶೀಲಿಸಿ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ಕಲ್ಪಿಸುವಂತೆ ಸಚಿವರಿಗೆ ಬಿಜೆಪಿ ನಾಯಕರ ಒತ್ತಾಯ

ಕಲಬುರಗಿ, ಜು.11: ಜಿಲ್ಲೆಯ ವಿವಿಧ ವಿದ್ಯಾರ್ಥಿನಿಲಯಗಳಲ್ಲಿ ವಿದ್ಯಾರ್ಥಿಗಳು ಎದುರಿಸುತ್ತಿರುವ ಮೂಲಸೌಕರ್ಯ ಹಾಗೂ ಆಹಾರ ಸಮಸ್ಯೆಗಳನ್ನು ಖುದ್ದಾಗಿ ಪರಿಶೀಲಿಸಲು ಸಚಿವ ಪ್ರಿಯಾಂಕ್ ಖರ್ಗೆ ಅವರು ಎಲ್ಲಾ ವಿದ್ಯಾರ್ಥಿನಿಲಯಗಳಿಗೆ ಭೇಟಿ ನೀಡಬೇಕು ಎಂದು ಬಿಜೆಪಿ ಮುಖಂಡರು ಆಗ್ರಹಿಸಿದ್ದಾರೆ.

ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಬಿಜೆಪಿ ತಾಲ್ಲೂಕು ಅಧ್ಯಕ್ಷ ರವೀಂದ್ರ ಸಜ್ಜನಶೆಟ್ಟಿ ಅವರು, ರಾಷ್ಟ್ರ ಹಾಗೂ ಅಂತರರಾಷ್ಟ್ರೀಯ ವಿಚಾರಗಳ ಕುರಿತು ಮಾತನಾಡುವ ಬದಲು ಸಚಿವರು ತಮ್ಮ ಕ್ಷೇತ್ರದ ವಿದ್ಯಾರ್ಥಿನಿಲಯಗಳ ಸ್ಥಿತಿಗತಿಗಳತ್ತ ಗಮನ ಹರಿಸಬೇಕು ಎಂದು ಹೇಳಿದರು. ವಿವಿಧ ವಿದ್ಯಾರ್ಥಿನಿಲಯಗಳಿಗೆ ಭೇಟಿ ನೀಡಿ ವಿದ್ಯಾರ್ಥಿಗಳ ಅಹವಾಲುಗಳನ್ನು ಆಲಿಸಿ, ಸಮಸ್ಯೆಗಳ ಪರಿಹಾರಕ್ಕೆ ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು.

ಇತ್ತೀಚಿನ ದಿನಗಳಲ್ಲಿ ವಿದ್ಯಾರ್ಥಿನಿಲಯಗಳಲ್ಲಿ ಕಳಪೆ ಆಹಾರ ಸೇವನೆಯಿಂದ ವಿದ್ಯಾರ್ಥಿಗಳು ಅಸ್ವಸ್ಥಗೊಂಡು ಆಸ್ಪತ್ರೆ ಸೇರುವ ಘಟನೆಗಳು ಹೆಚ್ಚಾಗುತ್ತಿವೆ. ಕೆಲವು ದಿನಗಳ ಹಿಂದೆ ಅಂಬೇಡ್ಕರ್ ವಿದ್ಯಾರ್ಥಿನಿಲಯದ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದ್ದು, ದಂಡೋತಿ ವಸತಿ ಶಾಲೆಯಲ್ಲಿಯೂ ಕಳಪೆ ಆಹಾರ ಸೇವಿಸಿ 40ಕ್ಕೂ ಹೆಚ್ಚು ವಿದ್ಯಾರ್ಥಿಗಳು ಅಸ್ವಸ್ಥರಾಗಿರುವುದು ಗಂಭೀರ ವಿಷಯವಾಗಿದೆ ಎಂದು ಅವರು ಹೇಳಿದರು.

ವಿದ್ಯಾರ್ಥಿನಿಲಯಗಳಲ್ಲಿ ಸರಿಯಾದ ಆಹಾರ, ಕುಡಿಯುವ ನೀರು ಹಾಗೂ ಸ್ವಚ್ಛತಾ ವ್ಯವಸ್ಥೆಗಳ ಕೊರತೆ ಇದೆ. ಅನೇಕ ಕಡೆಗಳಲ್ಲಿ ಶೌಚಾಲಯಗಳ ನಿರ್ವಹಣೆ ಹದಗೆಟ್ಟಿದ್ದು, ಸ್ನಾನ ಹಾಗೂ ಕುಡಿಯುವ ನೀರಿನ ಸಮಸ್ಯೆ ತೀವ್ರವಾಗಿದೆ. ಈ ಎಲ್ಲ ಸಮಸ್ಯೆಗಳನ್ನು ಸಚಿವರು ಖುದ್ದಾಗಿ ಪರಿಶೀಲಿಸಿದರೆ ನೈಜ ಪರಿಸ್ಥಿತಿ ಅರಿವಾಗಲಿದೆ ಎಂದು ಬಿಜೆಪಿ ಮುಖಂಡರು ಅಭಿಪ್ರಾಯಪಟ್ಟರು.

ಜಿಲ್ಲಾ ಮಟ್ಟದ ಹಾಗೂ ತಾಲ್ಲೂಕು ಮಟ್ಟದ ಅಧಿಕಾರಿಗಳು ನೈಜ ಮಾಹಿತಿಯನ್ನು ಸಚಿವರಿಗೆ ನೀಡದೆ ತಪ್ಪು ಮಾಹಿತಿ ನೀಡುತ್ತಿದ್ದಾರೆ ಎಂದು ಆರೋಪಿಸಿದ ಅವರು, ವಿದ್ಯಾರ್ಥಿಗಳ ಆರೋಗ್ಯ ಮತ್ತು ಸುರಕ್ಷತೆಯನ್ನು ಮೊದಲ ಆದ್ಯತೆಯಾಗಿ ಪರಿಗಣಿಸಿ ಕೂಡಲೇ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು.

ಸುದ್ದಿಗೋಷ್ಠಿಯಲ್ಲಿ ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಬಸವರಾಜ ಬೆಟ್ನೂರಕರ ಸೇರಿದಂತೆ ಪಕ್ಷದ ಹಲವು ಮುಖಂಡರು ಉಪಸ್ಥಿತರಿದ್ದರು.

Related Articles

Leave a Reply

Your email address will not be published. Required fields are marked *

Back to top button