ಕನಿಷ್ಠ ವೇತನ ಜಾರಿಗೆ ಆಗ್ರಹಿಸಿ ಹಾಸ್ಟೆಲ್ ಹೊರಗುತ್ತಿಗೆ ನೌಕರರ ಧರಣಿ
ಬಾಕಿ ವೇತನ ತಕ್ಷಣ ಬಿಡುಗಡೆಗೆ ಒತ್ತಾಯ; ಭ್ರಷ್ಟಾಚಾರದ ಆರೋಪದ ತನಿಖೆಗೆ ಆಗ್ರಹಿಸಿ ಜಿಲ್ಲಾಡಳಿತಕ್ಕೆ ಮನವಿ
ಕಲಬುರಗಿ, ಜು.30: ಕನಿಷ್ಠ ವೇತನ ಜಾರಿ, ಬಾಕಿ ವೇತನ ಪಾವತಿ ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಕರ್ನಾಟಕ ರಾಜ್ಯ ಸರ್ಕಾರಿ ಹಾಸ್ಟೆಲ್ ಮತ್ತು ವಸತಿ ಶಾಲೆಗಳ ಹೊರಗುತ್ತಿಗೆ ನೌಕರರು ಗುರುವಾರ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳ ಕಚೇರಿ ಎದುರು ಧರಣಿ ನಡೆಸಿದರು.
ಕರ್ನಾಟಕ ರಾಜ್ಯ ಸರ್ಕಾರಿ ಹಾಸ್ಟೆಲ್ ಮತ್ತು ವಸತಿ ಶಾಲೆ ಹೊರಗುತ್ತಿಗೆ ನೌಕರರ ಸಂಘದ ನೇತೃತ್ವದಲ್ಲಿ ನಡೆದ ಪ್ರತಿಭಟನೆಯಲ್ಲಿ ರಾಜ್ಯಾಧ್ಯಕ್ಷ ಭೀಮಶೆಟ್ಟಿ ಯಂಪಳ್ಳಿ ಸೇರಿದಂತೆ ಹಲವಾರು ನೌಕರರು ಭಾಗವಹಿಸಿದರು.
ಪ್ರತಿಭಟನಾಕಾರರು ನಂತರ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಿಗೆ ಮನವಿ ಸಲ್ಲಿಸಿ, ಜಿಲ್ಲೆಯ ವಿವಿಧ ಹಾಸ್ಟೆಲ್ ಹಾಗೂ ವಸತಿ ನಿಲಯಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಹೊರಗುತ್ತಿಗೆ ನೌಕರರಿಗೆ ಸರ್ಕಾರ ನಿಗದಿಪಡಿಸಿರುವ ಕನಿಷ್ಠ ವೇತನವನ್ನು ಜಾರಿಗೊಳಿಸಬೇಕು ಎಂದು ಆಗ್ರಹಿಸಿದರು.
ನಿರಂತರವಾಗಿ ಮನವಿ ಸಲ್ಲಿಸುತ್ತಿದ್ದರೂ ಅಧಿಕಾರಿಗಳ ನಿರ್ಲಕ್ಷ್ಯದಿಂದ ಕನಿಷ್ಠ ವೇತನ ಜಾರಿಯಾಗಿಲ್ಲ ಎಂದು ಆರೋಪಿಸಿದ ಅವರು, ಬಿಸಿಎಂ ಇಲಾಖೆಯ ಹಾಸ್ಟೆಲ್ ನೌಕರರಿಗೆ ಮೇ, ಜೂನ್ ಹಾಗೂ ಜುಲೈ ತಿಂಗಳ ವೇತನ ಪಾವತಿಯಾಗಿದ್ದು, ಸಮಾಜ ಕಲ್ಯಾಣ ಇಲಾಖೆ, ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ, ಮೊರಾರ್ಜಿ ದೇಸಾಯಿ, ಕಿತ್ತೂರು ರಾಣಿ ಚೆನ್ನಮ್ಮ, ಇಂದಿರಾಗಾಂಧಿ ಹಾಗೂ ಏಕಲವ್ಯ ವಸತಿ ನಿಲಯಗಳ ನೌಕರರಿಗೆ ಹಲವು ತಿಂಗಳಿಂದ ವೇತನ ಪಾವತಿಯಾಗದೆ ಸಂಕಷ್ಟ ಎದುರಾಗಿದೆ ಎಂದು ದೂರಿದರು.
ವೇತನ ಬಿಲ್ಗಳ ಅನುಮೋದನೆ ಹಾಗೂ ಪಾವತಿಯಲ್ಲಿ ಭ್ರಷ್ಟಾಚಾರ ನಡೆಯುತ್ತಿದೆ ಎಂದು ಆರೋಪಿಸಿದ ಪ್ರತಿಭಟನಾಕಾರರು, ಸಂಬಂಧಪಟ್ಟ ಅಧಿಕಾರಿಗಳ ವಿರುದ್ಧ ಸಮಗ್ರ ತನಿಖೆ ನಡೆಸಿ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು.
ಹಾಸ್ಟೆಲ್ ನೌಕರರಿಗೆ ವಾರದ ರಜೆ ಸೇರಿದಂತೆ ಕಾರ್ಮಿಕರಿಗೆ ದೊರೆಯಬೇಕಾದ ಮೂಲಭೂತ ಸೌಲಭ್ಯಗಳನ್ನು ಕಲ್ಪಿಸಬೇಕು. ವಿವಿಧ ಇಲಾಖೆಗಳಲ್ಲಿ ಹೊರಗುತ್ತಿಗೆ ನೌಕರರ ನೇಮಕಾತಿಯಲ್ಲೂ ಅಕ್ರಮಗಳು ನಡೆದಿರುವ ಆರೋಪಗಳ ಕುರಿತು ತನಿಖೆ ನಡೆಸಿ ಸಮಸ್ಯೆಗಳನ್ನು ಪರಿಹರಿಸಬೇಕು ಎಂದು ಅವರು ಮನವಿಯಲ್ಲಿ ಆಗ್ರಹಿಸಿದರು.



