
ಅಫಜಲಪುರ, ಜು.30: ತಾಲ್ಲೂಕಿನ ಕರ್ಜಗಿ ಗ್ರಾಮದ ಮುರಾರ್ಜಿ ವಸತಿ ಶಾಲೆಯಲ್ಲಿ ಗುರುವಾರ ಬೆಳಿಗ್ಗೆ ನೀಡಲಾದ ಉಪಾಹಾರ ಸೇವಿಸಿದ ಬಳಿಕ 42 ವಿದ್ಯಾರ್ಥಿಗಳು ಅಸ್ವಸ್ಥಗೊಂಡ ಘಟನೆ ನಡೆದಿದೆ. ಇವರಲ್ಲಿ ಇಬ್ಬರು ವಿದ್ಯಾರ್ಥಿಗಳ ಆರೋಗ್ಯ ಸ್ಥಿತಿ ಗಂಭೀರವಾಗಿದ್ದು, ಹೆಚ್ಚಿನ ಚಿಕಿತ್ಸೆಗೆ ಕಲಬುರಗಿಯ ಜಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ.
ಬೆಳಿಗ್ಗೆ ಉಪಾಹಾರವಾಗಿ ನೀಡಿದ್ದ ಅವಲಕ್ಕಿ–ಸೂಸಲಾ ಸೇವಿಸಿದ ಬಳಿಕ ವಿದ್ಯಾರ್ಥಿಗಳಿಗೆ ಹೊಟ್ಟೆನೋವು, ವಾಂತಿ ಹಾಗೂ ಅಸ್ವಸ್ಥತೆ ಕಾಣಿಸಿಕೊಂಡಿತು. ವಿಷಯ ತಿಳಿಯುತ್ತಿದ್ದಂತೆ ಶಾಲಾ ಸಿಬ್ಬಂದಿ ಹಾಗೂ ಸ್ಥಳೀಯರು ವಿದ್ಯಾರ್ಥಿಗಳನ್ನು ತಕ್ಷಣ ಅಫಜಲಪುರ ತಾಲ್ಲೂಕು ಆಸ್ಪತ್ರೆಗೆ ದಾಖಲಿಸಿದರು. ಗಂಭೀರ ಸ್ಥಿತಿಯಲ್ಲಿದ್ದ ಇಬ್ಬರನ್ನು ಜಿಮ್ಸ್ ಆಸ್ಪತ್ರೆಗೆ ರವಾನಿಸಲಾಗಿದ್ದು, ಉಳಿದ ವಿದ್ಯಾರ್ಥಿಗಳಿಗೆ ಚಿಕಿತ್ಸೆ ಮುಂದುವರಿದಿದೆ. ಹಲವರು ಚಿಕಿತ್ಸೆ ಪಡೆದು ಮನೆಗೆ ಮರಳಿದ್ದಾರೆ.
ಘಟನೆಯ ಸುದ್ದಿ ತಿಳಿಯುತ್ತಿದ್ದಂತೆ ಪೋಷಕರು, ವಿವಿಧ ಸಂಘಟನೆಗಳ ಕಾರ್ಯಕರ್ತರು ಹಾಗೂ ಸಾರ್ವಜನಿಕರು ಶಾಲೆಯ ಎದುರು ಜಮಾಯಿಸಿ ಪ್ರತಿಭಟನೆ ನಡೆಸಿದರು. ಘಟನೆಗೆ ಕಾರಣರಾದ ಅಧಿಕಾರಿಗಳು ಹಾಗೂ ಆಹಾರ ಪೂರೈಕೆ ಗುತ್ತಿಗೆದಾರರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು, ಗುತ್ತಿಗೆ ರದ್ದುಪಡಿಸಿ ಕಪ್ಪುಪಟ್ಟಿಗೆ ಸೇರಿಸಬೇಕು ಎಂದು ಆಗ್ರಹಿಸಿದರು. ಕೆಲಕಾಲ ಸ್ಥಳದಲ್ಲಿ ಉದ್ವಿಗ್ನ ವಾತಾವರಣ ನಿರ್ಮಾಣವಾಗಿತ್ತು.
ಘಟನಾ ಸ್ಥಳಕ್ಕೆ ಭೇಟಿ ನೀಡಿದ ಕ್ಷೇತ್ರದ ಶಾಸಕ ಎಂ.ವೈ. ಪಾಟೀಲ್ ಹಾಗೂ ಸಮಾಜ ಕಲ್ಯಾಣ ಇಲಾಖೆಯ ಜಂಟಿ ನಿರ್ದೇಶಕಿ ಪ್ರೀತಿ ದೊಡ್ಡಮನಿ ಆಸ್ಪತ್ರೆಗೆ ತೆರಳಿ ವಿದ್ಯಾರ್ಥಿಗಳ ಆರೋಗ್ಯ ವಿಚಾರಿಸಿದರು. ಬಳಿಕ ಪ್ರತಿಭಟನಾಕಾರರೊಂದಿಗೆ ಮಾತನಾಡಿದ ಶಾಸಕರು, ಆಹಾರದ ಗುಣಮಟ್ಟದ ಬಗ್ಗೆ ಸಂಪೂರ್ಣ ತನಿಖೆ ನಡೆಸಿ ತಪ್ಪಿತಸ್ಥರ ವಿರುದ್ಧ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿದರು.
ಶಾಸಕರು ನೀಡಿದ ಮಾಹಿತಿಯಂತೆ, ಬೆಳಿಗ್ಗೆ ನೀಡಿದ ಉಪಾಹಾರದಲ್ಲಿ ದುರ್ವಾಸನೆ ಬರುತ್ತಿದೆ ಎಂದು ಕೆಲವು ವಿದ್ಯಾರ್ಥಿಗಳು ತಿನ್ನಲು ನಿರಾಕರಿಸಿದ್ದರೂ, ಯಾವುದೇ ಸಮಸ್ಯೆಯಿಲ್ಲ ಎಂದು ಸಿಬ್ಬಂದಿ ತಿಳಿಸಿದ್ದರಿಂದ ಉಪಾಹಾರ ಸೇವಿಸಿದ್ದರು. ನಂತರ ವಿದ್ಯಾರ್ಥಿಗಳಿಗೆ ಅಸ್ವಸ್ಥತೆ ಕಾಣಿಸಿಕೊಂಡಿತು. ಒಟ್ಟು 55 ವಿದ್ಯಾರ್ಥಿಗಳಲ್ಲಿ 42 ಮಂದಿ ಅಸ್ವಸ್ಥರಾಗಿದ್ದು, 40 ಮಂದಿಗೆ ತಾಲ್ಲೂಕು ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗಿದೆ. ಇಬ್ಬರನ್ನು ಹೆಚ್ಚಿನ ಚಿಕಿತ್ಸೆಗೆ ಜಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ.
ಈ ರೀತಿಯ ಘಟನೆಗಳು ಮರುಕಳಿಸದಂತೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಾಗುವುದು ಎಂದು ಶಾಸಕರು ತಿಳಿಸಿದರು. ಪ್ರಾಥಮಿಕ ತನಿಖೆಯಲ್ಲಿ ವಾರ್ಡನ್, ಅಡುಗೆ ಸಿಬ್ಬಂದಿ ಹಾಗೂ ಆಹಾರ ಪೂರೈಕೆ ಗುತ್ತಿಗೆದಾರರ ನಿರ್ಲಕ್ಷ್ಯ ಕಂಡುಬಂದಿದ್ದು, ತಪ್ಪಿತಸ್ಥರ ವಿರುದ್ಧ ಅಮಾನತು ಸೇರಿದಂತೆ ಶಿಸ್ತು ಕ್ರಮ ಜರುಗಿಸಲು ಸೂಚಿಸಲಾಗಿದೆ. ಶಾಲೆಯ ಪ್ರಾಂಶುಪಾಲರು ರಜೆಯಲ್ಲಿದ್ದರೂ, ಅವರ ಜವಾಬ್ದಾರಿಯನ್ನೂ ಪರಿಶೀಲಿಸಲಾಗುವುದು ಎಂದು ಹೇಳಿದರು.
ಇದೇ ವೇಳೆ ಆರೋಗ್ಯ ಹಾಗೂ ಶಿಕ್ಷಣ ಇಲಾಖೆಯ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ, ವಿದ್ಯಾರ್ಥಿಗಳಿಗೆ ನೀಡಲಾದ ಆಹಾರ ಹಾಗೂ ಕುಡಿಯುವ ನೀರಿನ ಮಾದರಿಗಳನ್ನು ಪ್ರಯೋಗಾಲಯ ಪರೀಕ್ಷೆಗೆ ಸಂಗ್ರಹಿಸಿದ್ದಾರೆ. ತನಿಖಾ ವರದಿ ಬಂದ ಬಳಿಕ ಮುಂದಿನ ಕ್ರಮ ಕೈಗೊಳ್ಳಲಾಗುವುದು ಎಂದು ಅಧಿಕಾರಿಗಳು ತಿಳಿಸಿದ್ದಾರೆ.



