ಔರಾದ್‌ನಲ್ಲಿ ಇಂದು ಕಾಂಗ್ರೆಸ್ ‘ಸಂಘಟನೆ ಸೃಜನ ಅಭಿಯಾನ’
ಪಕ್ಷ ಸಂಘಟನೆ ಬಲವರ್ಧನೆ ಹಾಗೂ ಜಿಲ್ಲಾ ಅಧ್ಯಕ್ಷರ ಆಯ್ಕೆ ಪ್ರಕ್ರಿಯೆಗೆ ವೇದಿಕೆ ಸಜ್ಜು.

ಔರಾದ್, ಜು. 31: ಕಾಂಗ್ರೆಸ್ ಪಕ್ಷವನ್ನು ಬೂತ್ ಮಟ್ಟದಿಂದ ಮತ್ತಷ್ಟು ಬಲಪಡಿಸುವ ಉದ್ದೇಶದಿಂದ ಆಗಸ್ಟ್ 1ರಂದು ಶನಿವಾರ ಪಟ್ಟಣದ ಸಾಯಿ ಕಲ್ಯಾಣ ಮಂಟಪದಲ್ಲಿ ‘ಸಂಘಟನೆ ಸೃಜನ ಅಭಿಯಾನ’ ಹಮ್ಮಿಕೊಳ್ಳಲಾಗಿದೆ ಎಂದು ಕಾಂಗ್ರೆಸ್ ಮುಖಂಡ ಡಾ. ಭೀಮಸೇನರಾವ್ ಶಿಂಧೆ ತಿಳಿಸಿದ್ದಾರೆ.
ಈ ಅಭಿಯಾನದ ಅಂಗವಾಗಿ ಪಕ್ಷದ ನೂತನ ಜಿಲ್ಲಾ ಅಧ್ಯಕ್ಷರ ಆಯ್ಕೆ ಪ್ರಕ್ರಿಯೆಯೂ ನಡೆಯಲಿದ್ದು, ಎಐಸಿಸಿ ವೀಕ್ಷಕರಾದ ರಾಜೇಶ್ ಲಿಲೋಥಿಯಾ, ಹಸನಸಾಬ್ ದೋತಿಹಾಳ್, ವಿಠ್ಠಲ್ ಯಾದವ್, ರಮೇಶ್ ಮರಗೋಳ್ ಹಾಗೂ ಜ್ಯೋತಿ ಮರಗೋಳ್ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ ಎಂದು ಅವರು ತಿಳಿಸಿದ್ದಾರೆ.
ಜಿಲ್ಲೆಯಲ್ಲಿ ಪಕ್ಷ ಸಂಘಟನೆಗೆ ಹೊಸ ಚೈತನ್ಯ ತುಂಬುವ ಉದ್ದೇಶದಿಂದ ಎಐಸಿಸಿ ವೀಕ್ಷಕರು ಜಿಲ್ಲೆಯ ಎಲ್ಲ ವಿಧಾನಸಭಾ ಕ್ಷೇತ್ರಗಳಿಗೆ ಭೇಟಿ ನೀಡಿ, ಸ್ಥಳೀಯ ಮುಖಂಡರು ಹಾಗೂ ಕಾರ್ಯಕರ್ತರೊಂದಿಗೆ ಸಮಾಲೋಚನೆ ನಡೆಸಿದ್ದಾರೆ. ಪಕ್ಷದ ನಾಯಕತ್ವದ ಕುರಿತು ಮುಖಂಡರು ಮತ್ತು ಕಾರ್ಯಕರ್ತರ ಅಭಿಪ್ರಾಯಗಳನ್ನು ಸಂಗ್ರಹಿಸುವ ಕಾರ್ಯವೂ ಕೈಗೊಳ್ಳಲಾಗಿದೆ ಎಂದು ಅವರು ವಿವರಿಸಿದ್ದಾರೆ.
ಅಭಿಯಾನದಲ್ಲಿ ಜಿಲ್ಲಾ ಪಂಚಾಯಿತಿ, ತಾಲೂಕು ಪಂಚಾಯಿತಿ, ಪುರಸಭೆ ಹಾಗೂ ಗ್ರಾಮ ಪಂಚಾಯಿತಿಗಳ ಹಾಲಿ ಮತ್ತು ಮಾಜಿ ಸದಸ್ಯರು, ಕಾಂಗ್ರೆಸ್ ಪಕ್ಷದ ಹಿರಿಯ ಮುಖಂಡರು, ವಿವಿಧ ಘಟಕಗಳ ಪದಾಧಿಕಾರಿಗಳು ಹಾಗೂ ಕಾರ್ಯಕರ್ತರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ಡಾ. ಭೀಮಸೇನರಾವ್ ಶಿಂಧೆ ಮನವಿ ಮಾಡಿದ್ದಾರೆ.



